ಪಣಜಿ: ಮಹದಾಯಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಮಾತುಕತೆಗೆ ಗೋವಾ ಸಿದ್ಧ ಎಂದು ಅಲ್ಲಿಯ ಸಿಎಂ ಮನೋಹರ ಪರಿಕ್ಕರ್ ತಿಳಿದ್ದಾರೆ.
ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದರೂ ರಾಜ್ಯ ಹಿತಾಸಕ್ತಿಯಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ. ರಾಜಕೀಯ ಕ್ಷೇತ್ರದಲ್ಲಿ ಕೆಲವೊಮ್ಮೆ ಕೆಲವು ನಿರ್ಧಾರಗಳನ್ನು ಕೈಗೊಳ್ಳಬೇಕಾಗುತ್ತದೆ. ಆದರೆ, ರಾಜ್ಯ ಹಿತಾಸಕ್ತಿಯೊಂದಿಗೆ ರಾಜಿ ಮಾಡಿಕೊಳ್ಳುವ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ. ಮಹದಾಯಿ ನದಿ ವಿವಾದದಲ್ಲಿ ರಾಜ್ಯ ಯಾವುದೇ ಒತ್ತಡಕ್ಕೆ ಒಳಗಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಪ್ರಸ್ತುತ ಆಡಳಿತದಲ್ಲಿರುವ ಸರ್ಕಾರವನ್ನು ನಾನು ನಂಬುವುದಿಲ್ಲ. ಹೀಗಾಗಿ ನಾನು ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದೇನೆ. ಕರ್ನಾಟಕ ರಾಜ್ಯದಲ್ಲಿ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಯಡಿಯೂರಪ್ಪ ಅವರಿಗೆ ಬರೆದಿರುವ ಪತ್ರವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ಈ ರೀತಿ ನೀವು ಚಿಂತನೆ ಮಾಡುತ್ತಿರುವುದೇ ಆದರೆ, ಅವರನ್ನೇ ಹೋಗಿ ಪ್ರಶ್ನಿಸಿ. ಮಹದಾಯಿ ವಿವಾದ ಸಂಬಂಧ ನಾನು ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದೇನೆ. ಆದರೆ, ಗೋವಾ ಹಿತಾಸಕ್ತಿಗೆ ವಿರುದ್ಧವಾಗಿ ಎಂದಿಗೂ ನಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.