ಕಾರವಾರ: ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ಎಲ್ಲ ಸರ್ಕಾರಿ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಕಡ್ಡಾಯವಾಗಿ ಹಾಜರಿರಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
ಗಣರಾಜ್ಯೋತ್ಸವ ಆಚರಣೆ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆ ನಡೆಸಿದ ಅವರು 2018 ಜನವರಿ 26ರಂದು 69ನೇ ಗಣ ರಾಜ್ಯೋತ್ಸವ ಸಮಾರಂಭ ನಡೆಯಲಿದ್ದು ಅಂದು ಬೆಳಿಗ್ಗೆ 9ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರದ ಎಲ್ಲ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಬೆಳಿಗ್ಗೆ 8.40ಕ್ಕೆ ಕಾರ್ಯಕ್ರಮ ನಡೆಯುವ ಪೊಲೀಸ್ ಪರೇಡ್ ಮೈದಾನಕ್ಕೆ ಕಡ್ಡಾಯವಾಗಿ ಹಾಜರಿರಬೇಕು ಎಂದು ಸೂಚನೆ ನೀಡಿದರು.
ನೌಕರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಹಾಜರಾದ ಬಗ್ಗೆ ಆಯಾ ಇಲಾಖೆ ಅಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿಗೆ ಹಾಜರಾತಿ ಸಲ್ಲಿಸುವಂತೆಯೂ ಹಾಗೂ ನಗರ ಭಾಗದ ಎಲ್ಲ ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸುವಂತೆ ಅವರು ಸಭೆಯಲ್ಲಿ ತಿಳಿಸಿದರು.
ಪ್ರತಿ ವರ್ಷದಂತೆ ಗಣ ರಾಜ್ಯೋತ್ಸವ ಕಾರ್ಯಕ್ರಮ ಸರ್ಕಾರಿ ಶಿಷ್ಠಾಚಾರದ ಪ್ರಕಾರ ನಡೆಯಲಿದ್ದು ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು ಹಾಗೂ ಗಣ್ಯರನ್ನು ಆಹ್ವಾನಿಸಲಾಗುವುದು. ಪೂರ್ವಭಾವಿಯಾಗಿ ಹಿಂದಿನ ದಿನ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ದೀಪಾಲಂಕಾರಗಳನ್ನು ಮಾಡುವುದು ಹಾಗೂ ನಗರಾದ್ಯಂತ ಸ್ವಚ್ಛತೆ ಸೇರಿದಂತೆ ಕಾರ್ಯಕ್ರಮದ ಪೂರ್ವ ತಯಾರಿ ಕುರಿತು ಜವಾಬ್ದಾರಿ ನೀಡಿದ ಅಧಿಕಾರಿಗಳು ಯಾವುದೇ ಲೋಪವಿಲ್ಲದಂತೆ ಕಾರ್ಯ ನಿರ್ವಹಿಸಲು ಸೂಚಿಸಿದರು.
ಅಲ್ಲದೆ ಪೊಲೀಸ್ ಪರೇಡ್ ಮೈದಾನದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿಗಳು ಉಪ ನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಇವರಿಗೆ ಸೂಚಿಸಿದರು. ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆಗಳ ಮುದ್ರಣ, ಗಣ್ಯರ ಆಹ್ವಾನ, ಶಾಲಾಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ವಿವಿಧ ಜವಾಬ್ದಾರಿಗಳನ್ನು ವಿವಿಧ ಅಧಿಕಾರಿಗಳಿಗೆ ವಹಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ್ ಪಾಟೀಲ್, ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ಸೇರಿದಂತೆ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಉಪಸ್ಥಿತರಿದ್ದರು.