ಬೆಂಗಳೂರು: ಹಲವು ಅಕ್ರಮಗಳನ್ನು ಬಯಲಿಗೆಳೆದಿದ್ದ ಪ್ರಾಮಾಣಿಕ ಐಎಎಸ್ ಅಧಿಕಾರಿ ರಶ್ಮಿ ಮಹೇಶ್ ಕಳೆದ 10 ತಿಂಗಳಿನಿಂದ ನಾಪತ್ತೆಯಾಗಿದ್ದಾರೆ. ಅವರು ಎಲ್ಲಿ ಕೆಲಸ ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಬೇಕೆಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಶೋಬಾ, ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯಲ್ಲಿ ನಡೆದ ಹಗರಣವನ್ನು ಬಯಲಿಗೆ ಎಳೆದಿದ್ದ ರಶ್ಮಿ ಮೇಲೆ ಹಲ್ಲೆ ನಡೆದಿತ್ತು. ಆ ಬಳಿಕ ಅವರನ್ನು ಪಿಯು ಮಂಡಳಿಗೆ ವರ್ಗಾವಣೆ ಮಾಡಲಾಗಿತ್ತು. ಅದಾದ ಬಳಿಕ ಅವರು ಎಲ್ಲಿ ಹೋದರು ಎಂಬುದು ಗೊತ್ತಿಲ್ಲ. ಐಎಎಸ್ ಅಧಿಕಾರಿಗಳ ಸಂಪರ್ಕದಲ್ಲೂ ಅವರು ಇಲ್ಲ, ನಾನು ಸೇರಿದಂತೆ ಹಲವರು ರಶ್ಮಿ ಅವರನ್ನು ಸಂಪರ್ಕಿಸಲು. ಪ್ರಯತ್ನಿಸಿದೆವು, ಆದರೆ ನಾವು ವಿಫಲರಾಗಿದ್ದೇವೆ. ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಒಂದೋ ಭ್ರಷ್ಟಾಚಾರಕ್ಕೆ ನೆರವಾಗಬೇಕು, ಇಲ್ಲವೆಂದರೆ ಸಾಯಬೇಕು ಎಂಬಂತಹ ಸ್ಥಿತಿಯನ್ನು ಸೃಷ್ಟಿಸಲಾಗಿದೆ ಅವರು ಆರೋಪಿಸಿದ್ದಾರೆ.
ರಕ್ಷಣೆ ನೀಡಬೇಕು ಎಂದು ಕೋರಿ ಐಪಿಎಸ್ ಅಧಿಕಾರಿ ಆರ್.ಪಿ. ಶರ್ಮಾ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಅಧಿಕಾರಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಕಿರುಕುಳಕ್ಕೆ ಶರ್ಮಾ ಪತ್ರ ಕೈಗನ್ನಡಿ. ಐಪಿಎಸ್ ಅಧಿಕಾರಿಗಳಿಗೆ ರಕ್ಷಣೆ ಸಿಗುತ್ತಿಲ್ಲ ಎಂದರೆ ಇನ್ನು ಯಾರಿಗೆ ರಕ್ಷಣೆ ಸಿಗಲು ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ.