ಕಾರವಾರ: ಜಿಲ್ಲೆಯ ಎಲ್ಲಾ ಮಹಿಳಾ ಸಾಂತ್ವನ ಕೇಂದ್ರಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಬೇಕು
ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಲ್. ಚಂದ್ರಶೇಖರ ನಾಯಕ ಹೇಳಿದರು.
ಅವರು ಸೋಮವಾರ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ ವರದಕ್ಷಿಣೆ ನಿಷೇಧ ಕಾಯ್ದೆ, ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ತಡೆ, ಸಾಂತ್ವನ ಯೋಜನೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ ಮಹಿಳಾ ಸಾಂತ್ವನ ಕೇಂದ್ರಗಳಲ್ಲಿ ದಾಖಲಾದ ಪ್ರಕರಣಗಳ ಬಗ್ಗೆ ಅಲ್ಲಿರುವ ಸಿಬ್ಬಂದಿಗಳು ಆಸಕ್ತಿ ಮತ್ತು ದಕ್ಷತೆಯಿಂದ ಪ್ರಾಮಾಣಿಕವಾಗಿ ಪ್ರಕರಣಗಳನ್ನು ಇತ್ಯರ್ಥಗೊಳಿಸಬೇಕು, ಜಿಲ್ಲಾ ಆಸ್ಪತ್ರೆಯಲ್ಲಿರುವ ಮಹಿಳಾ ಚಿಕಿತ್ಸಾ ಘಟಕದಲ್ಲಿ ಮಹಿಳಾ ಪೊಲೀಸ್ ಪೇದೆ ಮತ್ತು ವಕೀಲರನ್ನು ನಿಯೋಜಿಸಿ ಎಂದು ಸೂಚಿಸಿದರು.
ಶಾಲೆಗಳಲ್ಲಿರುವ ಸುರಕ್ಷಾ ಸಮಿತಿಗಳು ಆಯ್ದಅರ್ಹ ಶಿಕ್ಷಕಿಯೊಬ್ಬರನ್ನು ಕೌನ್ಸಲರನ್ನಾಗಿ ಮಾಡಿ ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಮತ್ತು ದೌಜ್ರ್ಯನ್ಯಗಳ ಬಗ್ಗೆ ತಿಳಿದುಕೊಳ್ಳಬೇಕು. ಸುರಕ್ಷಾ ಸಮಿತಿಗಳು ಇನ್ನು ಮುಂದೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಕಾರವಾರ ಡಿ.ಡಿ,ಪಿ.ಐ ಅವರಿಗೆ ಸಿ.ಇ.ಒ ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಉಪನಿರ್ದೇಶಕ ರಾಜೇಂದ್ರ ಬೇಕಲ್ ಮಾತನಾಡಿ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರಗಳು ಜಿಲ್ಲೆಯ 11 ತಾಲೂಕುಗಳಲ್ಲಿಯೂ ಕಾರ್ಯನಿರ್ವಹಿಸುತ್ತಿವೆ. ದೌರ್ಜನ್ಯಕ್ಕೆ ಒಳಗಾದ ಮಹಿಳೆಯರನ್ನು ಇಟ್ಟುಕೊಳ್ಳಲು ಸ್ವಾಧಾರಕೇಂದ್ರ ಪ್ರಾರಂಬಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಇಂದಿನಿಂದ ಜಿಲ್ಲೆಯ ಎಲ್ಲಾ ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಗೆಳತಿ ಸಹಾಯ ಕೇಂದ್ರಗಳನ್ನು ತೆರೆಯಲಾಗುತ್ತಿದೆ.
ಗ್ರಾಮ ಮಟ್ಟದಲ್ಲಿ ಮತ್ತು ತಾಲೂಕು ಮಟ್ಟದಲ್ಲಿ ಕಾವಲು ಸಭೆಗಳನ್ನು ನಡೆಸಲಾಗುತ್ತಿದ್ದು, ಪ್ರತಿಗ್ರಾಮ ಪಂಚಾಯತ್‍ಗಳಲ್ಲಿ ಸಮಿತಿ ರಚಿಸಲಾಗಿದೆ. ಗ್ರಾಮ ಮಟ್ಟದಲ್ಲಿ ಹೆಣ್ಣು ಮಕ್ಕಳು ಕಾಣೆಯಾದರೆ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ, ಸಾಂತ್ವನ ಕೇಂದ್ರ ಅಥವಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಗೆ ಮಾಹಿತಿ ನೀಡಲು ಸೂಚನೆ ನೀಡಲಾಗುತ್ತಿದೆ ಎಂದು ವಿವರಿಸಿದರು. ಸಭೆಯಲ್ಲಿ ಪೊಲೀಸ್ ಅಧಿಕಾರಿ, ವಕಿಲರು ಮತ್ತು ವಿವಿಧ ಸ್ವಯಂ ಸೇವಾ ಸಂಘಗಳ ಪದಾಧಿಕಾರಿಗಳಿದ್ದರು.

RELATED ARTICLES  ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 109 ಜನರಿಗೆ ಕರೋನಾ ಪಾಸಿಟಿವ್