ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ಕುರಿತ ತೀರ್ಪಿನ ವಿರುದ್ಧ ರಾಜ್ಯ ಸರ್ಕಾರದಿಂದ ಮೇಲ್ಮನವಿ ಸಲ್ಲಿಸದಿರಲು ಗುರುವಾರ ಸಂಜೆ ನಡೆದ ಸಂಸದರ ಸಭೆಯಲ್ಲಿ ನಿರ್ಧರಿಸಲಾಯಿತು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸಂಸದರ ಸಭೆ ನಡೆದಿದೆ. ಮಂಡ್ಯ ಸಂಸದ ಪುಟ್ಟರಾಜು, ಹಾಸನದ ಸಂಸದ ಎಚ್.ಡಿ. ದೇವೇಗೌಡ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಭೆಗೆ ಹಾಜರಾಗಲಿಲ್ಲ.
ಕಾವೇರಿ ನದಿ ನೀರು ಹಂಚಿಕೆ ಕುರಿತು ಫೆಬ್ರುವರಿ 16ರಂದು ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ನೀಡಿತ್ತು. ‘ಕರ್ನಾಟಕಕ್ಕೆ ಒಟ್ಟು 284.75 ಟಿಎಂಸಿ ನೀರು ಬಳಸಿಕೊಳ್ಳಬಹುದು ಹಾಗೂ ಬೆಂಗಳೂರಿಗೆ ಕುಡಿಯುವ ನೀರಿಗಾಗಿ 4.75 ಟಿಎಂಸಿ ನೀರು ಬಳಸಿಕೊಳ್ಳಬಹುದು. ತಮಿಳುನಾಡಿಗೆ ಪ್ರತಿ ವರ್ಷ ಹರಿಸುತ್ತಿದ್ದ ನೀರಿನ ಪ್ರಮಾಣದಲ್ಲಿ ಇಳಿಕೆ ಮಾಡಿ, 177.25 ಟಿಎಂಸಿ ನೀರು ಹರಿಸಬೇಕು’ ಎಂದು ತೀರ್ಪಿನಲ್ಲಿ ಹೇಳಲಾಗಿತ್ತು.
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ಅಮಿತಾವ್ ರಾಯ್, ಎ.ಎಂ. ಖನ್ವಿಲ್ಕರ್ ಅವರನ್ನು ಒಳಗೊಂಡ ತ್ರಿಸದಸ್ಯ ಪೀಠವು ತೀರ್ಪು ಪ್ರಕಟಿಸಿತ್ತು.