ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ ರತ್ನಪ್ರಭಾ ಅವರ ಸೇವಾವಧಿಯನ್ನು ವಿಸ್ತರಣೆ ಮಾಡಬೇಕು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಶುಕ್ರವಾರ ಶಿಫಾರಸ್ಸು ಮಾಡಿದ್ದಾರೆ.
ಮೂಲಗಳ ಪ್ರಕಾರ ರತ್ನಪ್ರಭಾ ಅವರ ಸೇವಾವಧಿ ವಿಸ್ತರಣೆಗೆ ಶಿಫಾರಸ್ಸು ಮಾಡಿ ಸಿಎಂ ಸಿದ್ದರಾಮಯ್ಯ ಅವರ ಕಚೇರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಕಾರ್ಯವನ್ನು ಸಮರ್ಪಕವಾಗಿ ನಡೆಸುವ ಉದ್ದೇಶದಿಂದ ಮುಖ್ಯ ಕಾರ್ಯದರ್ಶಿಗಳ ಸೇವಾ ಅವಧಿಯನ್ನು 3 ತಿಂಗಳು ವಿಸ್ತರಿಸುವಂತೆ ರಾಜ್ಯ ಸರ್ಕಾರ ಶಿಫಾರಸು ಮಾಡಿದೆ ಎನ್ನಲಾಗಿದೆ.
ಇನ್ನು ರಾಜ್ಯ ಸರ್ಕಾರದ ಪತ್ರಕ್ಕೆ ಕೇಂದ್ರ ಸರ್ಕಾರ ಇನ್ನೂ ಪ್ರತಿಕ್ರಿಯೆ ನೀಡಿಲ್ಲವಾದರೂ, ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಸಚಿವಾಲಯ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ.
2017ರ ನವೆಂಬರ್ 30 ರಂದು ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ್ದ ರತ್ನಪ್ರಭಾ ಅವರು ಮಾರ್ಚ್ 31 ರಂದು ನಿವೃತ್ತರಾಗಲಿದ್ದಾರೆ. 1981ರ ಐಎಎಸ್ ಬ್ಯಾಚ್ ಅಧಿಕಾರಿಯಾದ ರತ್ನಪ್ರಭಾ ಅವರ ಮೂಲ ಆಂಧ್ರ್ರ ಪ್ರದೇಶವಾಗಿದೆ. ಇವರು ತೆಲುಗು, ಕನ್ನಡ, ಕೊಂಕಣಿ, ಫ್ರೆಂಚ್, ಇಂಗ್ಲಿಷ್ ಭಾಷೆ ಬಲ್ಲವರಾಗಿದ್ದು, ರಾಜ್ಯದ ವಿವಿಧೆಡೆ ಜಿಲ್ಲಾಧಿಕಾರಿಯಾಗಿ, ಸರ್ಕಾರದ ಪ್ರಮುಖ ಇಲಾಖೆಗಳನ್ನು ನಿಭಾಯಿಸಿದ್ದಾರೆ. ವಿಶೇಷವಾಗಿ ಕೈಗಾರಿಕೆ ಹಾಗೂ ವಾಣಿಜ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಮಹಿಳೆಯರ ಉದ್ಯಮಶೀಲತೆ ವೃದ್ಧಿಸಲು ಹೆಚ್ಚಿನ ಕೆಲಸ ಮಾಡಿದ್ದಾರೆ.