ನವದೆಹಲಿ: ಪ್ರಶ್ನೆ ಪತ್ರಿಕೆಗಳ ಸೋರಿಕೆಯಿಂದಾಗಿ 10ನೇ ತರಗತಿಯ ಗಣಿತ ಮತ್ತು 12ನೇ ತರಗತಿಯ ಅರ್ಥಶಾಸ್ತ್ರ ವಿಷಯದ ಪರೀಕ್ಷೆಗಳನ್ನು ಮತ್ತೊಮ್ಮೆ ನಡೆಸಲು ಕೇಂದ್ರ ಪ್ರೌಢಶಿಕ್ಷಣ ಮಂಡಳಿಯು (ಸಿಬಿಎಸ್‌ಇ) ನಿರ್ಧರಿಸಿದೆ.
ದೇಶದಾದ್ಯಂತ ಬುಧವಾರ ನಡೆದ 10ನೇ ತರಗತಿಯ ಗಣಿತ ಮತ್ತು ಮಾರ್ಚ್ 26ರಂದು ನಡೆದಿದ್ದ 12ನೇ ತರಗತಿಯ ಅರ್ಥಶಾಸ್ತ್ರ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು ಎಂಬ ವರದಿಗಳಿಂದಾಗಿ ಮಂಡಳಿ ಈ ಕ್ರಮ ತೆಗೆದುಕೊಂಡಿದೆ.
ಮರು ಪರೀಕ್ಷೆಯ ದಿನಾಂಕ ಮತ್ತು ಇತರ ಮಾಹಿತಿಯನ್ನು ವಾರದೊಳಗೆ ವೆಬ್‌ಸೈಟ್‌ನಲ್ಲಿ ಪ್ರಕಟಿಸುವುದಾಗಿ ಸಿಬಿಎಸ್‌ಇ ತಿಳಿಸಿದೆ.
ಈ ಎರಡು ಪ್ರಶ್ನೆ ಪತ್ರಿಕೆಯ ಸೋರಿಕೆಯಿಂದಾಗಿ ದೇಶದಾದ್ಯಂತ ಪರೀಕ್ಷೆ ಬರೆದ ಸುಮಾರು 20 ಲಕ್ಷ ವಿದ್ಯಾರ್ಥಿಗಳಿಗೆ ತೊಂದರೆಯಾದಂತಾಗಿದೆ. ಮಂಡಳಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ದೆಹಲಿ ಅಪರಾಧ ವಿಭಾಗದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಪ್ರಧಾನಿ ಗರಂ: ಈ ನಡುವೆ, ಸಿಬಿಎಸ್‌ಇ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಪ್ರಧಾನಿ ನರೇಂದ್ರ ಮೋದಿ ಗರಂ ಆಗಿದ್ದಾರೆ. ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಎದುರು ಪ್ರಧಾನಿ ಅಸಮಾಧಾನ ಹೊರಹಾಕಿದ್ದಾರೆ ಎಂದು ತಿಳಿದು ಬಂದಿದೆ.
‘ಪ್ರಶ್ನೆ ಪತ್ರಿಕೆ ಸೋರಿಕೆಯ ಬಗ್ಗೆ ಪ್ರಧಾನಿಗೆ ಎಲ್ಲ ಮಾಹಿತಿ ನೀಡಲಾಗಿದ್ದು, ಇದನ್ನು ಅವರು ಗಂಭೀರವಾಗಿ ಪರಿಗಣಿಸಿದ್ದಾರೆ’ ಎಂದು ಜಾವಡೇಕರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.