ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಇದೇ 15ರೊಳಗೆ ಬಹುತೇಕ ಅಂತಿಮಗೊಳ್ಳುವ ಸಾಧ್ಯತೆ ಇದೆ.
ದೆಹಲಿಯಲ್ಲಿ 9 ಮತ್ತು 10ರಂದು ಕಾಂಗ್ರೆಸ್ ಕೇಂದ್ರ ಚುನಾವಣಾ ಪರಿಶೀಲನಾ ಸಮಿತಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ, ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ.
ಟಿಕೆಟ್ ಹಂಚಿಕೆ ಸಂಬಂಧ ಗೊಂದಲಕ್ಕೆ ಅವಕಾಶ ಆಗಬಾರದು ಎಂಬ ಕಾರಣಕ್ಕೆ, ಗೆಲ್ಲುವ ಒಬ್ಬ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಿ ಕಳುಹಿಸಿಕೊಡುವಂತೆ ರಾಜ್ಯ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ ಸೂಚಿಸಿದೆ.
ಡಿಸೆಂಬರ್‌ನಲ್ಲಿ ನಡೆದಿದ್ದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್‌ಗಾಗಿ ಎದುರಾಗಿದ್ದ ತೀವ್ರ ಸ್ಪರ್ಧೆಯ ನಡುವೆಯೇ ಆಯಾ ಕ್ಷೇತ್ರಗಳ ಒಬ್ಬ ಆಕಾಂಕ್ಷಿಯ ಹೆಸರಿದ್ದ ಪಟ್ಟಿಗೆ ಹೈಕಮಾಂಡ್ ಅನುಮೋದನೆ ನೀಡಿತ್ತು. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲೂ ಅದೇ ಮಾದರಿ ಅನುಸರಿಸಲು ನಿರ್ಧರಿಸಲಾಗಿದೆ ಎಂದು ಪಕ್ಷದ ಹೈಕಮಾಂಡ್ ಮೂಲಗಳು ತಿಳಿಸಿವೆ.
ಈ ಹಿಂದೆ ನಡೆದಿದ್ದ ಬಹುತೇಕ ಚುನಾವಣೆಗಳಲ್ಲಿ ಪ್ರತಿ ಕ್ಷೇತ್ರದಿಂದ ಮೂರು ಅಥವಾ ಅದಕ್ಕಿಂತ ಹೆಚ್ಚು ಸಂಖ್ಯೆಯ ಆಕಾಂಕ್ಷಿಗಳ ಪಟ್ಟಿಯನ್ನು ರಾಜ್ಯ ಘಟಕಗಳು ಹೈಕಮಾಂಡ್‌ಗೆ ಕಳುಹಿಸಿಕೊಡುವ ಪದ್ಧತಿ ಇತ್ತು. ನಾಮಪತ್ರ ಸಲ್ಲಿಕೆಯ ಕೊನೆಯ ದಿನ ಸಮೀಪಿಸಿದಾಗ ದೆಹಲಿಯಲ್ಲೇ ಟಿಕೆಟ್ ಹಂಚಿಕೆ ಪ್ರಕ್ರಿಯೆ ಪೂರ್ಣಗೊಳ್ಳುತ್ತಿತ್ತು. ಈ ಬಾರಿ ಗೊಂದಲಗಳಿಗೆ ಆಸ್ಪದ ಆಗದಂತೆ, ಪ್ರಚಾರಕ್ಕೆ ಸಾಕಷ್ಟು ಸಮಯಾವಕಾಶ ಇರುವಾಗಲೇ ಟಿಕೆಟ್ ಹಂಚಿಕೆ ಅಂತಿಮಗೊಳಿಸಲು ನಿರ್ಧರಿಸಲಾಗಿದೆ.ತೀವ್ರ ಸ್ಪರ್ಧೆ ಇರುವ ಕೆಲವು ಕ್ಷೇತ್ರಗಳಲ್ಲಿ ಬಂಡಾಯಕ್ಕೆ ಅವಕಾಶ ಆಗದಂತೆ ಎಚ್ಚರ ವಹಿಸುವಂತೆ ಸೂಚಿಸಲಾಗಿದೆ. ಎಲ್ಲ ಆಕಾಂಕ್ಷಿಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಗೆಲ್ಲುವವರನ್ನೇ ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ತಿಳಿಸಿದರು.
ಗುಜರಾತ್ ಚುನಾವಣೆ ವೇಳೆ ರಾಜ್ಯ ಘಟಕದ ಮುಖಂಡರೇ ಟಿಕೆಟ್ ಹಂಚಿಕೆ ಪ್ರಕ್ರಿಯೆ ಅಂತಿಮಗೊಳಿಸಿದ್ದರು. ಅಲ್ಲಿನ ಒಟ್ಟು 182 ಕ್ಷೇತ್ರಗಳ ಪೈಕಿ 80 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಆಡಳಿತಾರೂಢ ಬಿಜೆಪಿಯು ನೂರಕ್ಕಿಂತ ಕಡಿಮೆ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳುವಂತೆ ಮಾಡುವಲ್ಲಿ ಈ ತಂತ್ರ ಸಾಕಷ್ಟು ಸಹಕಾರಿಯಾಗಿತ್ತು.
ಪಕ್ಷದ ರಾಜ್ಯ ನಾಯಕರು, ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಮತ್ತು ಚುನಾವಣಾ ಪರಿಶೀಲನಾ ಸಮಿತಿ ಮುಖ್ಯಸ್ಥ ಮಧುಸೂದನ ಮಿಸ್ತ್ರಿ ಅವರಿಗೆ ಈ ಬಗ್ಗೆ ಮನವರಿಕೆ ಮಾಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಪಕ್ಷದ ಹಾಲಿ ಶಾಸಕರಲ್ಲಿ ಕೆಲವರನ್ನು ಹೊರತುಪಡಿಸಿ ಮಿಕ್ಕೆಲ್ಲರಿಗೂ ಟಿಕೆಟ್ ಖಾತರಿಯಾಗಿದೆ. ಬಿಜೆಪಿ, ಕೆಜೆಪಿ, ಜೆಡಿಎಸ್ ತೊರೆದು ಪಕ್ಷ ಸೇರಿದ ಎಲ್ಲ ಶಾಸಕರಿಗೂ ಟಿಕೆಟ್ ದೊರೆಯಲಿದೆ. ಕಳೆದ ಬಾರಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ, ಕಡಿಮೆ ಮತಗಳ ಅಂತರದಲ್ಲಿ ಸೋತಿರುವ ಅಭ್ಯರ್ಥಿಗಳಿಗೆ ಮತ್ತೊಂದು ಬಾರಿ ಅವಕಾಶ ನೀಡುವ ಸಾಧ್ಯತೆಗಳೂ ಇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು ಹಾಗೂ ಪಕ್ಷದ ಹಿರಿಯ ಮುಖಂಡರ ಪುತ್ರರು, ಪುತ್ರಿಯರಿಗೆ ಟಿಕೆಟ್ ಹಂಚಿಕೆ ಮಾಡುವ ಕುರಿತು ಮಿಸ್ತ್ರಿ ಚರ್ಚಿಸಲಿದ್ದಾರೆ ಎಂದು ಅವರು ವಿವರಿಸಿದರು.
ಆಯಾ ಕ್ಷೇತ್ರಗಳಲ್ಲಿ ಪ್ರಬಲವಾಗಿರುವ ಆಕಾಂಕ್ಷಿಗಳಿಂದ ಅಪಸ್ವರ ಎದುರಾಗದ ರೀತಿಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.