ಬೆಂಗಳೂರು: ಕಾವೇರಿ ನಿರ್ವಹಣಾ ಮಂಡಳಿಯಲ್ಲಿ ರಾಜ್ಯಕ್ಕಾಗಿರುವ ಅನ್ಯಾಯದ ಬಗ್ಗೆ ಕೇಂದ್ರದ ಮುಂದೆ ಪ್ರತಿಭಟಿಸಲು ಹಾಗೂ ಅನ್ಯಾಯ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ರಾಜ್ಯ ಸರ್ಕಾರ ಶನಿವಾರ ನಿರ್ಧರಿಸಿದೆ. ರಾಜ್ಯದ ಪ್ರಬಲ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸಿ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಾಲೋಚನೆ ನಡೆಸಲು ಇಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಕರೆಯಲಾಗಿದ್ದ ಸರ್ವಪಕ್ಷ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಈ ಸಂಬಂಧ ಇಂದು ನಡೆದ ಸರ್ವಪಕ್ಷ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ, “ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಗೆ ರಾಜ್ಯದಿಂದ ನಮ್ಮ ಪ್ರತಿನಿಧಿಗಳನ್ನು ಕಳುಹಿಸುತ್ತೇವೆ. ನಮಗಾಗಿರುವ ಅನ್ಯಾಯವನ್ನು ಕೇಂದ್ರದ ಮುಂದೆ ಪ್ರತಿಭಟಿಸಲು ಸರ್ವಾನುಮತದಿಂದ ನಿರ್ಧರಿಸಲಾಗಿದೆ. ಅಂತಿಮ ಹಂತದ ನ್ಯಾಯಾಲಯದ ಹೋರಾಟದಲ್ಲಿ ಹೇಗೆ ವಾದ ಮಂಡನೆ ಮಾಡಬೇಕು ಎಂಬುದರ ಬಗ್ಗೆ ಸಭೆಯಲ್ಲಿ ಸಮಾಲೋಚನೆ ನಡೆಸಲಾಗಿದೆ” ಎಂದರು.

RELATED ARTICLES  ಎಲ್ಲ ಶಾಲೆಗಳಲ್ಲೂ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಬೋಧನೆ ಮಾಡುವ ನಿಯಮ ಕಡ್ಡಾಯ : ಇಲ್ಲವಾದಲ್ಲಿ ಶಿಸ್ತುಕ್ರಮ ಜಾರಿ.

ಸಭೆ ಬಳಿಕ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿದ ಅಧಿಸೂಚನೆಗೆ ನಮ್ಮ ವಿರೋಧವಿದೆ. ಕಾವೇರಿ ವಿಚಾರವನ್ನು ರಾಜ್ಯ ಎಲ್ಲಾ ಪಕ್ಷದ ಸಂಸದರು ಸಂಸತ್ತಿನಲ್ಲಿ ಪ್ರಸ್ತಾಪಿಸಲಿದ್ದಾರೆ. ಅಲ್ಲದೆ ಕಾವೇರಿ ನಿರ್ವಹಣಾ ಮಂಡಳಿಯಲ್ಲಿ ರಾಜ್ಯಕ್ಕಾಗಿರುವ ಅನ್ಯಾಯಕ್ಕೆ ಸಂಬಂಧಿಸಿದಂತೆ ರಾಜ್ಯದ ಕಾನೂನು ತಂಡ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಿದೆ ಎಂದರು.

RELATED ARTICLES  ಪೇಟೆಗೆ ಲಗ್ಗೆ ಇಟ್ಟಿದೆ ತರಹೇವಾರಿ ಹಣತೆ, ದೀಪಗಳ ಹಬ್ಬಕ್ಕೆ ಸಿದ್ಧವಾಗುತ್ತಿದ್ದಾರೆ ಜನರು

ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ, ಲೋಕಸಭೆ ಅಧಿವೇಶನದಲ್ಲಿ ಕಾವೇರಿ ವಿಚಾರದಲ್ಲಿ ರಾಜ್ಯಕ್ಕಾಗಿರುವ ಅನ್ಯಾಯದ ಬಗ್ಗೆ ಚರ್ಚಿಸಲು ತೀರ್ಮಾನಿಸಲಾಗಿದೆ. ಜಲ, ನಾಡು, ನುಡಿ ವಿಚಾರದಲ್ಲಿ ನಾವು ಯಾವಾಗಲೂ ಸರ್ಕಾರದ ಜೊತೆ ಇದ್ದೇವೆ. ಕಾವೇರಿ ವಿಚಾರದಲ್ಲಿ ಸರ್ಕಾರಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದರು.

ಸಭೆಯಲ್ಲಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಡಿಸಿಎಂ ಡಾ. ಜಿ. ಪರಮೇಶ್ವರ್, ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಸದಾನಂದ ಗೌಡ ಸೇರಿದಂತೆ ಹಲವು ಸಚಿವರು, ಶಾಸಕರು ಹಾಗೂ ಸಂಸದರು ಉಪಸ್ಥಿತರಿದ್ದರು.