ವಿಜಯಪುರ: ಬಿಜೆಪಿಯ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ತವರು ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಗುರುವಾರ ಶಕ್ತಿ ಪ್ರದರ್ಶನ ಮಾಡಿದ್ದು, ಬೆಲೆ ಏರಿಕೆ ಕುರಿತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಗುರುವಾರ ವಿಜಯಪುರದಲ್ಲಿ ಪಕ್ಷದ ಜನಕ್ರೋಶ ಯಾತ್ರೆಯಲ್ಲಿ ಭಾಗವಹಿಸುವ ಮೊದಲು ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಭರವಸೆಯ ಮೇರೆಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಹಣವನ್ನು ಬೇರೆಡೆಗೆ ತಿರುಗಿಸಿದ್ದು, ಅಗತ್ಯ ವಸ್ತುಗಳ ಬೆಲೆಗಳನ್ನು ಹೆಚ್ಚಿಸುವತ್ತ ಗಮನಹರಿಸುತ್ತಿದೆ ಎಂದು ಕಿಡಿಕಾರಿದರು.

ಜನರ ಆಕ್ರೋಶ ವ್ಯಕ್ತವಾಗುವ ಭಯದಿಂದ ಕಾಂಗ್ರೆಸ್ ನಾಯಕರು ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡದೆ ಬೆಂಗಳೂರಿನಲ್ಲಿಯೇ ಉಳಿದುಕೊಳ್ಳುತ್ತಿದ್ದಾರೆಂದು ಹೇಳಿದರು.
ಇದಕ್ಕೂ ಮೊದಲು, ಬಾಗಲಕೋಟೆಯಲ್ಲಿ ಜನಾಕ್ರೋಶ ಯಾತ್ರೆಯಲ್ಲಿ ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದರು.
ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ತಮ್ಮ ಅಧಿಕಾರಾವಧಿಯಲ್ಲಿ ಬಡವರು, ದಲಿತರು ಮತ್ತು ರೈತರಿಗೆ ಸಿಎಂ ನೀಡಿದ ಕೊಡುಗೆಯನ್ನು ಪ್ರಶ್ನಿಸಿದರು.