2.4K
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ ತಾಲ್ಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜುಲೈ 7ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಮುಂದಿನ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಭಾರಿ ಮಳೆ ಹಾಗೂ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 34(ಎಂ) ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಬಳಸಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದು, ಸಂಬಂಧಿತ ಇಲಾಖೆಗಳು ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.
ರಜೆ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಲಾಗಿದೆ.