297
ಕುಮಟಾ : ಕುಮಟಾ ಪೊಲೀಸ್ ಠಾಣೆಯ ಸಿಬ್ಬಂದಿಯಾಗಿರುವ ಲೋಕೇಶ ಅರಿಷಿಣಗುಪ್ಪಿ ಅವರು 2026ನೇ ಸಾಲಿನ ಪ್ರತಿಷ್ಠಿತ ‘ಕರ್ನಾಟಕ ಸೇವಾ ರತ್ನ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪೊಲೀಸ್ ಇಲಾಖೆಯಲ್ಲಿನ ಇವರ ದಕ್ಷ ಸೇವೆ ಹಾಗೂ ಸಮಾಜ ಸೇವೆಯನ್ನು ಗುರುತಿಸಿ, ಬೆಂಗಳೂರಿನ ಕರ್ನಾಟಕ ಪ್ರೆಸ್ ಕ್ಲಬ್ ಇವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಕನ್ನಡ ನಾಡು, ನುಡಿ ಮತ್ತು ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಮಾದರಿ ಸೇವೆ ಸಲ್ಲಿಸುತ್ತಿರುವ ಸಾಧಕರನ್ನು ಗುರುತಿಸಿ ಕರ್ನಾಟಕ ಪ್ರೆಸ್ ಕ್ಲಬ್ ಪ್ರತಿವರ್ಷ ಗೌರವಿಸುತ್ತದೆ. ಲೋಕೇಶ ಅವರು ತಮ್ಮ ವೃತ್ತಿ ಬದುಕಿನ ಜೊತೆಗೆ ಸಾಮಾಜಿಕ ಕಳಕಳಿಯೊಂದಿಗೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ, ಅವರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ ಎಂದು ಕ್ಲಬ್‌ನ ರಾಜ್ಯಾಧ್ಯಕ್ಷ ರಮೇಶ ಎಸ್.ಜಿ ತಮ್ಮ ಆಯ್ಕೆ ಪತ್ರದಲ್ಲಿ ತಿಳಿಸಿದ್ದಾರೆ.
ಇದೇ ಜನವರಿ 13, 2026 ರ ಮಂಗಳವಾರ ಸಂಜೆ 4 ಗಂಟೆಗೆ ಬೆಂಗಳೂರಿನ ನಾಗರಭಾವಿಯಲ್ಲಿರುವ ಕಲಾಗ್ರಾಮದಲ್ಲಿ ನಡೆಯಲಿರುವ ‘ಸಾಧಕರ ಸಮಾಗಮ’ ಕಾರ್ಯಕ್ರಮದಲ್ಲಿ ಲೋಕೇಶ ಅರಿಷಿಣಗುಪ್ಪಿ ಅವರಿಗೆ ‘ಕರ್ನಾಟಕ ಸೇವಾ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಇವರ ಈ ಸಾಧನೆಗೆ ಇಲಾಖೆಯ ಹಿರಿಯ ಅಧಿಕಾರಿಗಳು, ಸಹೋದ್ಯೋಗಿಗಳು ಹಾಗೂ ಸಾರ್ವಜನಿಕ ವಲಯದಿಂದ ಅಭಿನಂದನೆಗಳು ವ್ಯಕ್ತವಾಗಿವೆ.