ಶಿರಸಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟರೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪ್ರಬಲವಾಗಿರುವ ಕಾರಣ ಕಾಂಗ್ರೆಸ್ ಅಭ್ಯರ್ಥಿಯನ್ನೇ ಕಣಕ್ಕಿಳಿಸಬೇಕಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್. ವಿ. ದೇಶಪಾಂಡೆ ಹೇಳಿದರು. ಈ ಮೂಲಕ ಮಗ ಪ್ರಶಾಂತ ದೇಶಪಾಂಡೆಯವರಿಗೆ ಟಿಕೆಟ್ ನೀಡುವ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗುತ್ತಿದೆ.
‘ಆನಂದ ಆಸ್ನೋಟಿಕರ್ ಜೆಡಿಎಸ್ನಿಂದ ಟಿಕೆಟ್ ಆಕಾಂಕ್ಷಿ ಆಗಿರಬಹುದು, ಅದು ತಪ್ಪಲ್ಲ. ಆದರೆ, ಜಿಲ್ಲೆಯಲ್ಲಿ ಜೆಡಿಎಸ್ಗಿಂತ ಕಾಂಗ್ರೆಸ್ ಪ್ರಬಲವಾಗಿದೆ. ಚುನಾವಣೆಗೆ ಸ್ಪರ್ಧೆ ಮಾಡುವಾಗ ಹಲವಾರು ವಿಷಯವನ್ನು ಗಮನದಲ್ಲಿಟ್ಟುಕೊಳ್ಳಬೇಕಾಗುತ್ತದೆ ಎಂದ ಅವರು ರಾಜ್ಯ ಮಟ್ಟದಲ್ಲಿ ಹೊಂದಾಣಿಕೆ ಹೇಗೆ ಆಗುತ್ತದೆ ಎಂಬುದನ್ನೂ ನಾವು ಗಮನಿಸಬೇಕು ಎಂದರು. ‘ರಾಜಕೀಯ ಪಕ್ಷಗಳ ನಾಯಕರು ಚುನಾವಣೆಯವರೆಗೆ ಮಾತ್ರ ಪಕ್ಷಕ್ಕೆ ಅಂಟಿಕೊಂಡಿರಬೇಕು. ಆರಿಸಿ ಬಂದ ಬಳಿಕ ಬಡವರ ಕೆಲಸ ಮತ್ತು ಅಭಿವೃದ್ಧಿಗೆ ಮಾತ್ರ ಅಂಟಿಕೊಳ್ಳಬೇಕು. ಜಿಲ್ಲೆಯಲ್ಲಿ ಅರಣ್ಯ ಅತಿಕ್ರಮಣದಾರರಿಗೆ ಪಟ್ಟಾ ನೀಡುವ ಕಾರ್ಯ ನಡೆದಿದ್ದರೂ ಇನ್ನೂ ಸಾಕಷ್ಟು ಗೊಂದಲಗಳಿವೆ. ಪಟ್ಟಾ ನೀಡಿದ ಜಾಗ ನಿರ್ವನೀಕರಣ ಪ್ರಕ್ರಿಯೆ ಆಗಿಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಸಬೂಬು ಹೇಳುತ್ತಿದ್ದಾರೆ. ಈ ಕುರಿತು ಉಪ ವಿಭಾಗಾಧಿಕಾರಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸಭೆ ನಡೆಸಿ ತುರ್ತಾಗಿ ಸಮಸ್ಯೆ ಬಗೆಹರಿಸಬೇಕಿದೆ. ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದ ಅಭಿವೃದ್ಧಿಗಾಗಿ ನೀಲ ನಕ್ಷೆ ಸಿದ್ಧಪಡಿಸಿ ಸಲ್ಲಿಸಿದರೆ, ಶೀಘ್ರದಲ್ಲಿ ಅನುದಾನ ಮಂಜೂರು ಮಾಡಲಾಗುವುದು’ ಎಂದರು.
ಶಿರಸಿ ನಗರಸಭೆ ವತಿಯಿಂದ ನಿರ್ವಿುಸಿರುವ ಈಜುಗೊಳ ಉದ್ಘಾಟನೆಗೆ ಮುನ್ನ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಉಪಾಧ್ಯಕ್ಷ ಚಂದ್ರು ಎಸಳೆ, ಉಪವಿಭಾಗಾಧಿಕಾರಿ ರಾಜು ಮೊಗವೀರ, ಪೌರಾಯುಕ್ತೆ ಅಶ್ವಿನಿ ಇತರರಿದ್ದರು