ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗಳ ಪೈಕಿ ಕಾಂಗ್ರೆಸ್ 3 ರಾಜ್ಯಗಳಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ್ದು, ಇದರಂತೆ 3 ರಾಜ್ಯಗಳಲ್ಲಿ ಇಂದು ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ.
ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢದ ರಾಜಧಾನಿಗಳಲ್ಲಿ ಕಾರ್ಯಕ್ರಮಗಳು ನಡೆಯಲಿದ್ದು, ಇದರಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಹಲವು ಹಿರಿಯ ನಾಯಕರು ಭಾಗಿಯಾಗಲಿದ್ದಾರೆ.
ರಾಜಸ್ಥಾನದ ಜೈಪುರದ ಆಲ್ಬರ್ಟ್ ಹಾಲ್ ನಲ್ಲಿ ನೂತನ ಮುಖ್ಯಮಂತ್ರಿಯಾಗಿ ಅಶೋಕ್ ಗೆಹ್ಲೋಟ್ ಹಾಗೂ ಉಪ ಮುಖ್ಯಮಂತ್ರಿಯಾಗಿ ಸಚಿನ್ ಪೈಲಟ್ ಅವರು ಇಂದು ಬೆಳಿಗ್ಗೆ ಪ್ರಮಾಣ ವಚನ ಸ್ವೀಕಾರ ಮಾಡಿದರು ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಪ್ರಸ್ತುತತೆಯಲ್ಲಿ ಅಶೋಕ್ ಗೆಹ್ಲೋಟ್ ಹಾಗೂ ಸಚಿನ್ ಪೈಲಕಟ್ ಅವರಿಗೆ ರಾಜ್ಯಪಾಲ ಕಲ್ಯಾಣ್ ಸಿಂಗ್ ಅವರು ಪ್ರಮಾಣವಚನ ಬೋಧಿಸಿದರು ಎಂದು ವರದಿಯಾಗಿದೆ.
ಮಧ್ಯಾಹ್ನಕ್ಕೆ ಭೋಪಾಲ್ ನಲ್ಲಿ ಮಧ್ಯಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಕಮಲ್ ನಾಥ್ ಅವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಜಂಬೂರಿ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕಾಂಗ್ರೆಸ್ ಪಾಲಿಗೆ ಇಂದು ಬಹುದೊಡ್ಡ ಕಾರ್ಯಕ್ರಮವಾಗಲಿದೆ ಎಂದು ತಿಳಿದು ಬಂದಿದೆ.
ಮತ್ತೊಂದೆಡೆ ಛತ್ತೀಸ್ಗಢದ ರಾಜಧಾನಿಯಲ್ಲಿ ಸಂಜೆ 5 ಗಂಟೆಗೆ ನೂತನ ಮುಖ್ಯಮಂತ್ರಿಯಾಗಿ ಭೂಪೇಶ್ ಬಘೇಲ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರಲ್ಲೂ ಪಕ್ಷದ ಹಲವು ಹಿರಿಯ ನಾಯಕರು ಭಾಗಿಯಾಗಲಿದ್ದಾರೆ ಎಂದು ವರದಿಯಾಗಿದೆ.