ಉಡುಪಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಇಂದು ಉಡುಪಿಗೆ ಭೇಟಿ ನೀಡಲಿದ್ದಾರೆ.ಪೇಜಾವರ ಶ್ರೀವಿಶ್ವೇಶತೀರ್ಥ ಶ್ರೀಪಾದರು ಸನ್ಯಾಸ ಸ್ವೀಕರಿಸಿ 80 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭ ನಡೆಯಲಿದ್ದು,ಈ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ಕೋವಿಂದ್ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ರಥಬೀದಿಯಲ್ಲಿರುವ ಪೇಜಾವರ ಮಠದ ಎದುರು ನಿರ್ಮಿಸಲಾಗುವ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಪೇಜಾವರ ಶ್ರೀಗಳ ಶಿಷ್ಯೆಯಾಗಿರುವ ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ಉಡುಪಿಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದಾರೆ.
ಮಧ್ಯಾಹ್ನ 12ಕ್ಕೆ ರಾಷ್ಟ್ರಪತಿಗಳು ಆಗಮಿಸಲಿದ್ದು ಬನ್ನಂಜೆಯಲ್ಲಿರುವ ಪ್ರವಾಸಿ ಮಂದಿರದಲ್ಲಿ ಕೆಲ ಸಮಯ ವಿಶ್ರಾಂತಿ ಪಡೆದು ಬಳಿಕ ನೇರವಾಗಿ ಕಾರ್ಯಕ್ರಮ ನಡೆಯುವ ವೇದಿಕೆಗೆ ಆಗಮಿಸಲಿದ್ದಾರೆ ಎಂದು ವರದಿಯಾಗಿದೆ.
ಈ ಕಾರ್ಯಕ್ರಮದ ಬಳಿಕ ಶ್ರೀಕೃಷ್ಣ ದರ್ಶನ ಪಡೆಯುವ ರಾಷ್ಟ್ರಪತಿಗಳು ನಂತರ ಪ್ರಸಾದ ಸ್ವೀಕರಿಸಿ ದೆಹಲಿಗೆ ನಿರ್ಗಮಿಸಲಿದ್ದಾರೆ. ರಾಷ್ಟ್ರಪತಿಗಳ ಈ ಬರುವಿಕೆಗಾಗಿ ಮಠ ಹಾಗೂ ಸುತ್ತಮುತ್ತಲ ಪ್ರದೇಶ, ನಗರದಲ್ಲಿ ವ್ಯಾಪಕ ಭದ್ರತೆ ಕೈಗೊಳ್ಳಳಾಗಿದೆ.ಭದ್ರತೆಗಾಗಿ ನಗರದಾದ್ಯಂತ 1,400ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ.