ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ನಡೆದ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 69ಕ್ಕೂ ಹೆಚ್ಚು ಮಂದಿ ಸಜೀವ ದಹನಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇಲ್ಲಿನ ಅಪಾರ್ಟ್​ಮೆಂಟ್​​ವೊಂದರಲ್ಲಿ ಈ ದುರ್ಘಟನೆ ಸಂಭವಿಸಿದ್ದು ,ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ. ಅಲ್ಲದೇ, ಸಾವು ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಬೆಂಕಿಯ ಕೆನ್ನಾಲಿಗೆಯಲ್ಲಿ ಹಲವು ಮಂದಿ ಸಿಲುಕಿದ್ದು ಅವರ ರಕ್ಷಣಾಕಾರ್ಯ ಭರದಿಂದ ಸಾಗಿದೆ.

ಅಪಾರ್ಟ್​ಮೆಂಟ್​​ನಲ್ಲಿ ಕೆಮಿಕಲ್​ ಗೋದಾಮು ಕೂಡ ಇತ್ತು. ರಾತ್ರಿ 10.48 ರ ಸುಮಾರಿಗೆ ಗ್ಯಾಸ್​ ಸಿಲಿಂಡರ್​​ನಲ್ಲಿ ಬೆಂಕಿ ಕಾಣಿಸಿಕೊಂಡು ದುರಂತ ಸಂಭವಿಸಿದೆ ಎನ್ನಲಾಗಿದೆ. ಅಲ್ಲದೇ ಅಪಾರ್ಟ್​ಮೆಂಟ್​​ನಲ್ಲಿದ್ದ 10 ಆಟೋ ರಿಕ್ಷಾಗಳು ಸೇರಿದಂತೆ ಹಲವು ವಾಹನಗಳು ಕೂಡ ಸುಟ್ಟು ಕರಕಲಾಗಿವೆ. ಸ್ಥಳಕ್ಕೆ 200ಕ್ಕೂ ಹೆಚ್ಚು ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಸಂಕಷ್ಟಕ್ಕೆ ಸಿಲುಕಿದವರ ರಕ್ಷಣೆಯಲ್ಲಿ ತೊಡಗಿದ್ದಾರೆ. ಗಾಯಗೊಂಡವರನ್ನ ಢಾಕಾದ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.