ಬೆಂಗಳೂರು: ಮಾರ್ಚ್ 1 ರಿಂದ ಆರಂಭವಾಗುವ 2019ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಪರೀಕ್ಷಾ ಕೇಂದ್ರಕ್ಕೆ ಹೋಗಲು ವಿದ್ಯಾರ್ಥಿಗಳಿಗೆ ಸಾರಿಗೆ ಸಂಸ್ಥೆಯೇ ಉಚಿತ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸಿದೆ ಎಂದು ತಿಳಿದುಬಂದಿದೆ. ಕೇವಲ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.
ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೇ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ ತಿಳಿಸಿದ್ದು,
ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ಮುಕ್ತಾಯಗೊಳ್ಳುವ ಮಾರ್ಚ್ 18ರ ವರೆಗೆ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಮತ್ತು ವಾಸಸ್ಥಳಕ್ಕೆ ಹಿಂದಿರುಗುವಾಗ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೆ.ಎಸ್.ಆರ್.ಟಿ.ಸಿ. ಪ್ರಕಟಣೆಯಲ್ಲಿ ತಿಳಿಸಿದೆ .
ರಾಜ್ಯದ ಎಲ್ಲಾ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪ್ರಯಾಣಕ್ಕೆ ಅವಕಾಶವಿರುತ್ತದೆ ಎಂದು ಕೆಎಸ್‌ಆರ್‌ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರೇ ತಿಳಿಸಿದ್ದಾರೆ ಎಂದು ವರದಿಯಾಗಿದೆ.