ಶಿವರಾತ್ರಿ, ಈ ದಿನದಂದು ಕೈಲಾಸ ವಾಸ ಪರಶಿವನನ್ನು ಕೋಟಿ ಕೋಟಿ ಜನರು ಭಜಿಸಿ ಪೂಜಿಸುತ್ತಾರೆ. ಶಿಶಿರ ಋತುವಿನ ಮಾಘ ಮಾಸದ ಕೃಷ್ಣ ಪಕ್ಷ ಬಹುಳ ಚತುರ್ದಶಿ ಯಂದು ಬರುವ ಶಿವರಾತ್ರಿಯ ದಿನ ಭಕ್ತಾದಿಗಳು ಶಂಭೋ ಶಂಕರನನ್ನು ನೆನೆದು, ಪುನೀತರಾಗುತ್ತಾರೆ.
ತನ್ನ ನಂಬಿ ಬಂದ ಭಕ್ತರ ಇಷ್ಟಾರ್ಥಗಳಿಗೆ ಎಂದಿಗೂ ನಿರಾಸೆ ಮಾಡದ ದಯಾಮಯಿ ಶಿವನಿಗೆ ಶಿವರಾತ್ರಿಯಂದು ದೇಶಾದ್ಯಂತ ವಿಶೇಷ ಪೂಜೆಗಳು ನೆರವೇರುತ್ತವೆ. ಇಡೀ ಭಾರತದಾದ್ಯಂತ ಬಹುತೇಕ ಎಲ್ಲಾ ಭಾಗಗಳಲ್ಲೂ ಆಚರಿಸುವ ಹಬ್ಬ ಇದು. ಈ ಹಬ್ಬದಂದು ದಿನವಿಡೀ ಪೂಜೆ, ಉಪವಾಸ ಮಾಡಿ, ರಾತ್ರಿಯಿಡೀ ಜಾಗರಣೆ ಮಾಡಿ ಶಿವನನ್ನು ಆರಾಧಿಸುವ ಸಂಪ್ರದಾಯವಿದೆ.
ಶಿವಪುರಾಣದಲ್ಲಿ ಶಿವಾರಾತ್ರಿಯ ಆಚರಣೆ ಬಂದಿರುವ ಬಗ್ಗೆ ಒಂದು ಸಣ್ಣ ಕಥೆ ಇದೆ…. ದೇವಲೋಕದಲ್ಲಿ ಒಮ್ಮೆ ಬ್ರಹ್ಮ ಹಾಗೂ ವಿಷ್ಣುವಿನ ನಡುವೆ ಯಾರು ಶ್ರೇಷ್ಠರು ಎಂಬ ವಿಷಯಕ್ಕೆ ವಾಗ್ವಾದಗಳು ನಡೆಯುತ್ತಿದ್ದವು. ಮಹಾ ದೇವತೆಗಳಿಬ್ಬರನ್ನೂ ಸಮಾಧಾನ ಮಾಡುವುದು ದುರ್ಲಭ ಎನಿಸಿದಾಗ, ದೇವತೆಗಳೆಲ್ಲ ಹೋಗಿ ಪರಶಿವನನ್ನು ಬೇಡಿಕೊಳ್ಳುತ್ತಾರೆ. ವಿಷ್ಣು ಹಾಗೂ ಬ್ರಹ್ಮರ ಜಗಳವನ್ನು ಶಮನ ಮಾಡುವಂತೆ ಕೋರಿಕೊಳ್ಳುತ್ತಾರೆ. ಆಗ ವಿಷ್ಣು ಮತ್ತು ಬ್ರಹ್ಮರ ನಡುವೆ ಶಿವ, ಅಗ್ನಿಕಂಭದ ರೂಪದಲ್ಲಿ ಬಂದು ನಿಂತು ತನ್ನ ಮೂಲವನ್ನು ಕಂಡುಹಿಡಿಯಲು ಸೂಚಿಸುತ್ತಾನೆ.
ಆಗ ಹಂಸದ ರೂಪ ತಾಳಿದ ಬ್ರಹ್ಮ ಅಗ್ನಿ ಕಂಭದ ಶಿರವನ್ನು ಹುಡುಕಲು ಮೇಲ್ಮುಖವಾಗಿ ಹೊರಡುತ್ತಾನೆ. ವಿಷ್ಣು ವರಾಹವತಾರ ತಾಳಿ ಕಂಭದ ತಳವನ್ನು ನೋಡುವುದಕ್ಕಾಗಿ ಪಾತಾಳಕ್ಕೆ ಇಳಿಯುತ್ತಾನೆ. ಎಷ್ಟೇ ಮುಂದೆ ಸಾಗಿದರೂ ಬ್ರಹ್ಮ ಹಾಗೂ ವಿಷ್ಣು ಇವರಿಬ್ಬರಿಗೂ ಕಂಭದ ಅಂತ್ಯವೇ ಕಾಣುವುದಿಲ್ಲ. ಅನಂತವಾಗಿರುವ ಶಿವನ ಶಕ್ತಿಯನ್ನು ನೋಡಿದ ವಿಷ್ಣು ಹಾಗೂ ಬ್ರಹ್ಮರಿಗೆ ಸತ್ಯದ ಅರಿವಾಗುತ್ತದೆ. ಆದರೆ ಶಿವನ ಜಡೆಯಿಂದ ಕೆಳಗೆ ಬೀಳುತ್ತಿದ್ದ ಕೇತಕಿ ಪುಷ್ಫದ ಬಳಿ ಬ್ರಹ್ಮ , ನೀನು ಎಲ್ಲಿಂದ ಬೀಳುತ್ತಿದ್ದೀಯ ಎಂದು ಪ್ರಶ್ನಿಸುತ್ತಾನೆ. ಆಗ ಆ ಪುಷ್ಪವು ನಾನು ಅಗ್ನಿ ಕಂಭದ ಶಿರದಿಂದ ಬೀಳುತ್ತಿದ್ದೇನೆ ಎಂಬ ಉತ್ತರ ನೀಡುತ್ತದೆ. ಆಗ ಬ್ರಹ್ಮ ಶಿವನಲ್ಲಿಗೆ ಬಂದು ಕೇತಕಿ ಪುಪ್ಪವನ್ನು ತೋರಿಸಿ, ತಾನು ಅಗ್ನಿ ಕಂಭದ ಶಿರಭಾಗವನ್ನು ನೋಡಿರುವುದಾಗಿಯೂ ಅಲ್ಲಿಂದಲೇ ಕೇತಕಿ ಪುಷ್ಪವನ್ನು ತಂದಿರುವುದಾಗಿಯೂ ಹೇಳುತ್ತಾನೆ. ಇವರಿಬ್ಬರ ಮೋಸವನ್ನು ಅರಿತ ಶಿವ, ಬ್ರಹ್ಮನನ್ನು ಯಾರೂ ಪೂಜಿಸಕೂಡದು ಎಂದು ಶಾಪ ನೀಡಿ ಲಿಂಗರೂಪ ತಾಳುತ್ತಾನೆ. ಅಂದು ಮಾಘ ಮಾಸದ ಬಹುಳ ಚತುರ್ದಶಿಯಾಗಿರುತ್ತದೆ. ಹೀಗಾಗಿ, ಶಿವ ಲಿಂಗರೂಪ ತಾಳಿದ ಮಾಘ ಮಾಸದ ಬಹುಳ ಚತುರ್ದಶಿಯಂದು ಶಿವರಾತ್ರಿಯನ್ನು ಆಚರಿಸಲಾಗುತ್ತದೆ.
ಮಹಾಶಿವರಾತ್ರಿಯ ಉಪವಾಸ ಮತ್ತು ಜಾಗರಣೆಯ ಮಹತ್ವ
ಪ್ರತಿ ವರ್ಷದ ಶಿವರಾತ್ರಿಯ ಸಮಯದಲ್ಲಿ ಶಿವನು, ಪಾರ್ವತಿಯ ಜೊತೆಯಲ್ಲಿ ಭೂಮಿಗೆ ಆಗಮಿಸುತ್ತಾನೆ.. ಭೂ-ಸಂಚಾರ ಮಾಡುತ್ತಾನೆ.. ಎಲ್ಲ ಸ್ಥಾವರ ಜಂಗಮ ಲಿಂಗಗಳಲ್ಲಿ ಸಂಕ್ರಮಣಗೊಳ್ಳುತ್ತಾನೆ.. ಹೀಗಾಗಿ ಶಿವರಾತ್ರಿಯ ಶಿವನನ್ನು ಯಾರು ಪೂಜಿಸುವರೋ ಅವರ ಪಾಪಗಳು ಪರಿಹಾರವಾಗುತ್ತವೆ ಎಂದು ಸ್ವತಃ ಶಿವನೇ ತಿಳಿಸಿದ್ದಾನೆ ಎಂಬುದರ ಬಗ್ಗೆ ಶಾಸ್ತ್ರೋಕ್ತಿ ಇದೆ.
ಮದುವೆಯಾಗದ ಹೆಣ್ಣುಮಕ್ಕಳು ಶಿವಗುಣರೂಪಿಯಾದ ಅನುರೂಪ ಪತಿಗಾಗಿ ಪ್ರಾರ್ಥಿಸಿದರೆ, ಮುತ್ತೈದೆಯರು ಪತಿಯ ಶ್ರೇಯೋಭಿವೃದ್ಧಿಗಾಗಿ ಪ್ರಾರ್ಥಿಸುವುದು ಸಂಪ್ರದಾಯ. ಶಿವರಾತ್ರಿಯಂದು ಶಿವನನ್ನು ಪೂಜಿಸಿದರೆ, ಸುಖ, ಶಾಂತಿ, ಸಮೃದ್ಧಿ ದೊರೆಯುವುದೆಂಬ ನಂಬಿಕೆ ಆಸ್ತಿಕರದು.
ಕರುಣಾಮಯಿಯಾದ ಶಿವನನ್ನು ಭಕ್ತಿ ಪೂರಕವಾಗಿ ಯಾರೇ ಪೂಜಿಸಿದರೂ ಅವರನ್ನು ಅನುಗ್ರಹಿಸುತ್ತಾನೆ.. ಹಿಂದು ಮುಂದು ನೋಡದೇ ಅವರಿಗೆ ಬೇಡಿದ ವರಗಳನ್ನು ನೀಡುತ್ತಾನೆ.. ಭಕ್ತಿಗೆ ಮರುಳಾಗುವ ಶಿವನು ಹೀಗೆ ತನ್ನ ಭಕ್ತರಿಗೆ ಬೇಡಿದ ವರವನ್ನು ನೀಡುವುದರ ಮೂಲಕ ಎಷ್ಟೋ ಸಲ ಸಂಕಟಕ್ಕೆ ಸಿಲುಕಿದ್ದೂ ಇದೆ.. ಆದರೆ ಎಂಥದ್ದೇ ಸಂಕಟವಿದ್ದರೂ ಶಿವನು ಭಕ್ತರನ್ನು ಸದಾ ಅನುಗ್ರಹಿಸುತ್ತಲೇ ಇರುತ್ತಾನೆ.. ಅದಕ್ಕೆ “ಶಿವ ಭಕ್ತನಿಗೆ ನರಕಾ ಇಲ್ಲ” ಅನ್ನೋ ಮಾತಿದೆ.
ಶಿವರಾತ್ರಿಯ ಮತ್ತೊಂದು ವಿಶೆಷವೆಂದರೆ, ಶಿವನು ಪಾರ್ವತಿ ಹಿಮವಂತನ ಮಗಳಾದ ಗಿರಿಜೆಯನ್ನು ಅಂದರೆ ಪಾರ್ವತಿ ದೇವಿಯನ್ನು ವಿವಹವಾಗಿದ್ದು ಶಿವರಾತ್ರಿಯ ದಿನವೇ.. ಪಾರ್ವತಿ ದೇವಿಯು ಶಿವರಾತ್ರಿಯ ಸಮಯದಲ್ಲಿ ಶಿವನನ್ನು ಪ್ರಾರ್ಥಿಸಿ..ಶಿವನ ಜಪ ಮಾಡಿ ಶಿವನನ್ನು ವಲಿಸಿಕೊಂಡು ವಿವಾಹಳಾದಳು… ಅಷ್ಟೇ ಅಲ್ಲ, ಶಿವನು ಸಮುದ್ರ ಮಂಥನದಿಂದ ಉದ್ಭವಿಸಿದ ವಿಷವನ್ನು ಸೇವಿಸಿ, ಜಗತ್ತನ್ನು ವಿನಾಶದಿಂದ ಪಾರು ಮಾಡಿದ್ದು ಕೂಡ ಇದೇ ಸಮಯದಲ್ಲಿ.. ಹೀಗೆ ಹಿಂದೂ ಪುರಾಣಗಳಲ್ಲಿ ಶಿವರಾತ್ರಿಗೆ ಮಹತ್ವದ ಹಿನ್ನೆಲೆ ಇದೆ..
ವೈಜ್ಞಾನಿಕವಾಗಿ ಶಿವರಾತ್ರಿಯ ಆಚರಣೆ
ಸೂರ್ಯ ಮತ್ತು ಚಂದ್ರರ ಚಲನೆಯಿಂದಾಗುವ ಎಲ್ಲಾ ಕಾಲ ವ್ಯತ್ಯಾಸಕ್ಕೆ ಈ ನಮ್ಮ ದೇಹ ಹೊಂದಿಕೊಳ್ಳ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ಈ ಹಬ್ಬದ ಆಚರಣೆ ಬಹು ಮುಖ್ಯ. ಈ ಸಮಯದಲ್ಲಿ ಚಳಿಗಾಲವು ಮುಗಿದು ಬೇಸಗೆಕಾಲವು ಪ್ರಾರಂಭಗೊಳ್ಳುವುದು. ಅಂದರೆ ಈ ದಿನದಂದು ಚಳಿಗಾಲ ಉತ್ತುಂಗದಲ್ಲಿದ್ದು ಅಂದು ಕೃಷ್ಣ ಪಕ್ಷದ ಕೊನೆಯ ದಿನವೂ ಆಗಿರುತ್ತದೆ. ಈ ದಿನದಲ್ಲಿ ಸೂರ್ಯನ ಶಾಖ ಕಡಿಮೆಯಾಗಿರುತ್ತದೆ ಮತ್ತು ಚಂದ್ರನ ಪ್ರಕಾಶವೂ ಕ್ಷೀಣಿಸಿರುತ್ತದೆ. ನಮ್ಮ ಪೂರ್ವಜರು ಇದನ್ನೆಲ್ಲಾ ಅರಿತೇ ಹಬ್ಬ ಹರಿದಿನಗಳನ್ನು ಆಚರಿಸುತ್ತಿದ್ದರು. ಈ ವ್ಯತ್ಯಯದ ಸಮಯದಲ್ಲಿ ನಮ್ಮ ದೇಹದಲ್ಲಿ ಬಹಳಷ್ಟು ಬದಲಾವಣೆಗಳಾಗುತ್ತವೆ. ಈ ಕಾಲ ವ್ಯತ್ಯಾಸದ ಸಮಯದಲ್ಲಿ ನಮ್ಮಲ್ಲಿ ಉಸಿರಾಟದ ತೊಂದರೆ (ನೆಗಡಿ, ಕೆಮ್ಮು, ಶೀತ ಮತ್ತಿತರೆ) ಬರುವುದು. ಈ ದಿನದಂದು ನಾವು ಮಾಡುವ ಶಿವನ ಪೂಜೆ, ಉಪವಾಸಗಳು ನಮಗೆ ತುಂಬಾ ಉಪಯುಕ್ತ. ಅಂದು ಪರಶಿವನಿಗೆ ನೀರಿನ ಅಭಿಷೇಕ ಮತ್ತು ಬಿಲ್ವ ಪತ್ರೆಯ ಪೂಜೆ. ಬಿಲ್ವ ಪತ್ರೆಯಲ್ಲಿ ಉಸಿರಾಟದ ತೊಂದರೆ ನಿವಾರಿಸುವ ಗುಣವಿದೆ. ಬಿಲ್ವವನ್ನು ಲಿಂಗದ ಮೇಲೆ ಹಾಕುವಾಗ ಅದರ ವಾಸನೆ ನಮ್ಮ ದೇಹದ ಒಳಗೆ ಹೋಗುವುದು. ಬಿಲ್ವವನ್ನು ಮೂಸಿ ಎಸೆಯುವುದು ಸರಿಯಾದ ವಿಧಾನ. ಶಿವನ ಲಿಂಗವು ಕಲ್ಲಿನದಾಗಿದ್ದು ಅದರ ಮೇಲೆ ನೀರನ್ನು ಸುರಿಯುವುದರಿಂದ ಬಹಳಷ್ಟು ಶಕ್ತಿ ಹೊರಹೊಮ್ಮುತ್ತದೆ. ಅದೊಂದು ವಿಶಿಷ್ಟ ಕಲ್ಲಿನಿಂದ ಮಾಡಿದ ಲಿಂಗವಾಗಿರುತ್ತದೆ.
ಪೂಜಿಸುವ ದೇಗುಲವನ್ನು ವಾಸ್ತುವಿನ ಪ್ರಕಾರ ಕಟ್ಟಿರುತ್ತಾರೆ. ಈ ಕ್ಷೇತ್ರದಲ್ಲಿ ಹೆಚ್ಚಿನ ಗುರುತ್ವಾಕರ್ಷಣವಿದ್ದು ಅದನ್ನು ಶಿವ ಶಕ್ತಿಯೆಂದೂ ಕರೆಯುವರು. ಇಲ್ಲಿ ಮಂತ್ರಗಳನ್ನು ಪಠಿಸುತ್ತಾ ವಿಶಿಷ್ಟ ಕಲ್ಲಿನಿಂದ ಕೆತ್ತಿರುವ ಲಿಂಗಕ್ಕೆ ನೀರಿನ ಅಭಿಷೇಕ ಮಾಡುವುದರಿಂದ ಸುತ್ತ ಮುತ್ತಲಿಗೆಲ್ಲಾ ಹೆಚ್ಚಿನ ಶಕ್ತಿ ಬರುವುದೆಂಬ ನಂಬಿಕೆ ಇದೆ.
ವೇದೋಕ್ತ ಪೂಜೆ ಮತ್ತು ಆಚರಣೆ
ಬಿಲ್ವದ ಎಲೆ ಹೃದಯವನ್ನು ಹೋಲುತ್ತದೆ ಮತ್ತು ಲಿಂಗ ಪರಮಾತ್ಮನ ಪ್ರತೀಕ. ಆದ್ದರಿಂದ ಇವೆರಡರ ಜೊತೆಗೂಡಿಕೆ ಆತ್ಮ ಪರಮಾತ್ಮಗಳ ಮಿಲನ. ರಾತ್ರಿಯು ಅಜ್ಞಾನದ ಸಂಕೇತ ಮತ್ತು ಆ ವೇಳೆಯಲ್ಲಿ ನಿದ್ರೆ ಮಾಡದೇ ಎಚ್ಚರವಾಗಿರುವುದು ತಿಳುವಳಿಕೆಯ ಕಡೆಗೆ ಹೋಗುತ್ತಿರುವ ಸಂಕೇತ. ಹೀಗೆ ಶಿವರಾತ್ರಿಯ ರಾತ್ರಿ ಜಾಗರಣೆ ಮಾಡುವುದು ಮೋಕ್ಷದ ಕಡೆಗೆ ಹೊಗುವುದು ಎಂದು ತತ್ವಗಳು ತಿಳಿಸುತ್ತವೆ.
ಉಪವಾಸ ಮಾಡುವುದು ಎಂದರೆ, ದೇವರಿಗೆ ಹತ್ತಿರವಾಗಿರುವುದು/ದೇವರ ಬಗ್ಗೆ ಚಿಂತಿಸುತ್ತಿರುವುದು ಎಂದು ಅರ್ಥ. ಹೀಗೆ ಆತನ ಧ್ಯಾನದಲ್ಲಿ ಇರುವಾಗ ಊಟ/ತಿಂಡಿಯ ಕಡೆ ಗಮನ ಹೋಗುವುದಿಲ್ಲ.
ಜಾಗರಣೆ ಎಂದರೆ, ಜಾಗೃತರಾಗಿರೋದು ಎಂದು. ರಾತ್ರಿಯಲ್ಲಿ ಜಾಗರಣೆ ಮಾಡುವುದರ ಅರ್ಥವೇನು? ರಾತ್ರಿ ಎನ್ನುವುದು ತಮೋ ಗುಣದ ಪ್ರತೀಕ. ಆಲಸ್ಯ, ನಿದ್ರೆ, ಅಹಂಕಾರ, ಅಜ್ಞಾನಗಳ ದ್ಯೋತಕ ನಿಶೆ. ಆ ಸಮಯದಲ್ಲಿ ಜಾಗೃತರಾಗಿರಬೆಕು ಎಂದರೆ, ಅವುಗಳಿಂದ ಜಾಗೃತರಾಗಿರಬೇಕು ಎಂಬರ್ಥ. ಹಾಗೆ ಜಾಗೃತರಾಗಿರುವುದಕ್ಕೆ ನಮಗೆ ಸಹಾಯವನ್ನು ಮಾಡುವವನು ದೇವರು. ಆ ದೇವರನ್ನು ಸ್ಮರಿಸುತ್ತ ಈ ತಮೋ ಗುಣಗಳಿಂದ ಜಾಗೃತರಾಗಿರಬೇಕು ಎನ್ನುವುದರ ಪ್ರತೀಕ ಶಿವರಾತ್ರಿಯ ಜಾಗರಣೆ.
ಆ ದಿನ ಬೆಳಗ್ಗೆ ಬೇಗ ಎದ್ದು ಅಭ್ಯಂಜನ ಮಾಡಿ ಶಿವನಿಗೆ ಅಭಿಷೇಕ ಮಾಡುವುದು ರೂಢಿ. ಇಲ್ಲಿ ದಿನವನ್ನು ಮೂರು ಭಾಗಗಳನ್ನಾಗಿ ಮಾಡಿ ರುದ್ರಾಭಿಷೇಕಯುಕ್ತ ಪೂಜೆಯನ್ನು ಮಾಡುವುದು ವಾಡಿಕೆ. ರುದ್ರ ನಮಕ ಚಮಕಗಳನ್ನು ಉಚ್ಚರಿಸುವುದರಿಂದ ಉಸಿರಾಟಕ್ಕೂ ಹೆಚ್ಚಿನ ಶಕ್ತಿ ಬರುವುದು ಮತ್ತು ಬಾಯಿಯಿಂದ ಹೊರ ಹೊಮ್ಮುವ ತರಂಗಗಳಿಂದ ಸುತ್ತ ಮುತ್ತಲಿನ ಪರಿಸರ ಶಕ್ತಿಯುತವಾಗುವುದು.
ಮೊದಲಿಗೆ ಶಿವಲಿಂಗಕ್ಕೆ ಪಂಚಾಮೃತ ಅಭಿಷೇಕವನ್ನೂ ಮಾಡುವರು. ಇದಕ್ಕೆಂದೇ ಮಹಾನ್ಯಾಸವೆಂಬ ಪ್ರಕಾರವಿದೆ. ನಂತರ ನೀರಿನ ಅಭಿಷೇಕವನ್ನು ನಿರಂತರವಾಗಿ ಮಾಡುವರು. ಅಭಿಷೇಕ್ಕಾಗಿಯೇ ಪ್ರತ್ಯೇಕವಾದ ಪಾತ್ರೆ ಇರುವುದು. ಅದರ ತಳಭಾಗದಲ್ಲಿ ರಂದ್ರವಿದ್ದು ಅದನ್ನು ಲಿಂಗದ ಮೇಲೆ ತೂಗು ಬಿಟ್ಟಿರುವರು. ಅದರೊಳಗೆ ನೀರು ತುಂಬಿಸಿದರೆ, ಸಣ್ಣದಾಗಿ ನೀರು ಲಿಂಗದ ಮೇಲೆ ಬೀಳುವುದು. ಕೃಷ್ಣ ಯಜುರ್ವೇದದ ಪ್ರಕಾರವಾದ ರುದ್ರ ನಮಕ ಮತ್ತು ಚಮಕಗಳನ್ನು ಅಭಿಷೇಕದ ಸಂದರ್ಭದಲ್ಲಿ ಪಠಿಸುತ್ತಾರೆ. ಹನ್ನೊಂದು ಬಾರಿ ನಮಕ ಚಮಕಗಳನ್ನು ಹನ್ನೊಂದು ಜನ ಋತ್ವಿಕರು ಪಠಣ ಮಾಡುವುದಕ್ಕೆ ಏಕಾದಶವಾರ ರುದ್ರಾಭಿಷೇಕ ಎಂದು ಕರೆಯುವರು. ಮೊದಲಿಗೆ ಚಮಕದ ಮೂರನೆಯ ಭಾಗವನ್ನು ಉಚ್ಚರಿಸಿ, ನಂತರ ಒಂದು ನಮಕದ ಭಾಗವನ್ನೂ ನಂತರ ಹನ್ನೊಂದು ಚಮಕ ಭಾಗಗಳನ್ನೂ ಪಠಿಸುವರು. ತದನಂತರ ಎರಡನೆಯ ನಮಕದ ಭಾಗವನ್ನೂ ಮತ್ತು ಹನ್ನೊಂದು ಚಮಕ ಭಾಗಗಳನ್ನೂ ಪಠಿಸುವರು. ಹೀಗೆ ನಮಕಗಳ ಹನ್ನೊಂದೂ ಭಾಗವನ್ನು ಪಠಿಸಿ ಅಭಿಷೇಕ ಮಾಡುವರು. ಇದಕ್ಕೆ ಒಂದು ರುದ್ರವೆಂದು ಕರೆಯುವರು. ಬೆಳಗ್ಗೆ, ಸಂಜೆ ಮತ್ತು ರಾತ್ರೆ ಹೀಗೆ ೨೪ ಘಂಟೆಗಳು ಭಗವನ್ನಾಮಸ್ಮರಣೆ ಮಾಡುತ್ತಾ ಜಾಗರಣೆ ಮಾಡುವುದು ಪರಿಪಾಠ. ಅಂದು ಊಟ ಮಾಡದೆ ಅಲ್ಪಾಹಾರ ಸೇವನೆ ಮಾಡುವರು.