ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ವ್ಯುತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು.

ತ್ರೇತಾಯುಗದಲ್ಲಿ ಶ್ರೀರಾಮಚಂದ್ರ ರಾವಣನನ್ನು ವಧಿಸಿ ಲಂಕೆಗೆ ಮರಳಿ ಬಂದ ದಿನ ಇದು. ಅದೇ ದಿನವನ್ನು ಯುಗಾದಿ ಹಬ್ಬದ ದಿನವಾಗಿ ಆಚರಿಸಲಾಗುತ್ತದೆ ಎಂಬ ನಂಬಿಕೆಯಿದೆ.  ಅಲ್ಲದೆ ಇಂದಿನ ದಿನವೇ ಮಹಾವಿಷ್ಣು ಮತ್ಸ್ಯಾವತಾರ ತಾಳಿದನೆಂಬುದು ಪ್ರತೀತಿ. ಆದರೆ ಇದರಲ್ಲಿ ಚಂದ್ರಮಾನ ಮತ್ತು ಸೌರಮಾನ ಯುಗಾದಿ ಎಂಬ ಎರಡು ಬೇಧಗಳಿವೆ.
 
  ಕರ್ನಾಟಕ ಮತ್ತು ಆಂಧ್ರಪ್ರದೇಶ ಹಾಗೂ ಉತ್ತರ ಭಾರತದ ಹಲವೆಡೆ ಚಂದ್ರಮಾನ ಯುಗಾದಿ ಆಚರಿಸಲಾಗುತ್ತದೆ. ಆದರೆ ತಮಿಳುನಾಡು ಮತ್ತು ಕೇರಳದಲ್ಲಿ ಸೌರಮಾನ ಯುಗಾದಿ ಅಂದರೆ, ವಿಷು ಹಬ್ಬವನ್ನು ಹೊಸ ವರ್ಷಾಚರಣೆಯ ದಿನವನ್ನಾಗಿ ಆಚರಿಸಲಾಗುತ್ತದೆ.
 

ಸಾಂಪ್ರದಾಯಿಕವಾಗಿ ಆಚರಣೆಗಳು ಹೇಗೆ?

  • ಯುಗಾದಿ ಹಬ್ಬದ ಸಾಂಪ್ರದಾಯಿಕ ಆಚರಣೆಗಳಲ್ಲಿ ಕೆಲವೆಂದರೆ ಸೂರ್ಯ ನಮಸ್ಕಾರ, ಪಂಚಾಂಗದ ಪೂಜೆ, ಹಾಗೂ ಸರ್ವೇ-ಸಾಮಾನ್ಯವಾಗಿ “ಬೇವು-ಬೆಲ್ಲ.” ಜೀವನದ ಸಿಹಿ-ಕಹಿಗಳೆರಡನ್ನೂ ಪಡೆಯಬೇಕೆಂದು ನೆನಪಿಸಲು ಬೇವು-ಬೆಲ್ಲಗಳ ಮಿಶ್ರಣವನ್ನು ತಿನ್ನಲಾಗುತ್ತದೆ. ಯುಗಾದಿಯೆಂದರೆ ಹೊಸವರ್ಷದ ಆರಂಭದ ದಿನವಾದರೂ ಭಾರತದಲ್ಲಿ ಈ ದಿನವನ್ನು ನಿರ್ಧರಿಸುವ ರೀತಿ ಹಲವಾರಿವೆ.
  • ಮುಖ್ಯವಾಗಿ ಚಾಂದ್ರಮಾನ ಹಾಗೂ ಸೌರಮಾನ ಎಂಬ ಎರಡು ಪ್ರಭೇದಗಳಿದ್ದು, ಹಿಂದೂ ಧರ್ಮದ ವೇದಾಂಗ ಜ್ಯೋತಿಷ ಶಾಸ್ತ್ರದಿಂದ ನಿರ್ಣಯಗೊಳ್ಳುತ್ತವೆ. ಚಂದ್ರನ ಚಲನೆಯನ್ನಾಧರಿಸಿ, ದಿನಗಣನೆ ಮಾಡುವುದನ್ನು ಚಾಂದ್ರಮಾನ ಹಾಗೂ ಸೂರ್ಯನ ಗತಿಯಿಂದ ಎಣಿಕೆ ಮಾಡುವುದನ್ನು ಸೌರಮಾನ ಎನ್ನುತ್ತಾರೆ. ಕರ್ನಾಟಕದಲ್ಲಿ ಚಾಂದ್ರಮಾನಪದ್ಧತಿ ಮೊದಲಿನಿಂದ ರೂಢಿಯಲ್ಲಿದೆ.
  • ಭೂಮಿಯಿಂದ ನೋಡಿದಾಗ, ಸೂರ್ಯ, ಚಂದ್ರ, ಗ್ರಹಗಳು ನಕ್ಷತ್ರಮಂಡಲದಿಂದಾದ ರಾಶಿಚಕ್ರದಲ್ಲಿ ದಿನೇ ದಿನೇ ಸ್ವಲ್ಪ ಸ್ವಲ್ಪವಾಗಿ ಸಂಚರಿಸಿದಂತೆ ಕಾಣುತ್ತವೆ. ವೇದಾಂಗ ಜ್ಯೋತಿಷದಂತೆ, ಮೊದಲ ನಕ್ಷತ್ರ ಅಶ್ವಿನಿ – ಅಂದರೆ ಮೇಷ ರಾಶಿಯ ೦ – ೧೩:೨೦ ಭಾಗ(ಡಿಗ್ರಿ). ಅಲ್ಲಿ ಸೂರ್ಯನಿದ್ದಾಗ ಭೂಮಿಯ ಉತ್ತರಾರ್ಧಗೋಳದಲ್ಲಿ ಸಸ್ಯಗಳಲ್ಲಿ ಚಿಗುರು ಕಾಣುತ್ತದೆ; ಅಂದರೆ ಹೊಸಹುಟ್ಟು.
  • ಆದ್ದರಿಂದ ಅಶ್ವಿನೀ ನಕ್ಷತ್ರಕ್ಕೆ ರವಿಯು ಪ್ರವೇಶಿಸುವ ಕಾಲವನ್ನು ಹೊಸವರ್ಷ ಎಂದು ಪರಿಗಣಿಸುತ್ತಾರೆ. ಇದೇ ಸೌರಮಾನ ಯುಗಾದಿ. ಸಾಮಾನ್ಯವಾಗಿ ಈಗ ಇದು ಏಪ್ರಿಲ್ ೧೪ ಅಥವಾ ೧೫ ನೇ ತಾರೀಖಿಗೆ ಬೀಳುತ್ತದೆ. ಆದರೆ ಚಂದ್ರನ ಗತಿ ಅತಿವೇಗವಾದ್ದರಿಂದ ಪ್ರತಿ ಪ್ರದಕ್ಷಿಣೆಗೂ ಒಂದೊಂದು ತಿಂಗಳಾಗಿ, ಹನ್ನೆರಡು ಪ್ರದಕ್ಷಿಣೆಗಳಿಗೆ ಸರಿಯಾಗಿ ಒಂದು ಚಾಂದ್ರಮಾನ ಸಂವತ್ಸರವಾಗುತ್ತದೆ.
  • ರವಿಚಂದ್ರರ ಗತಿಯನ್ನವಲಂಬಿಸಿ, ೧೧ ರಿಂದ ೧೩ ಪೂರ್ಣಿಮೆ/ಅಮಾವಾಸ್ಯೆಗಳಿಗೊಂದು ಚಾಂದ್ರಮಾನ ಯುಗಾದಿಯಾಗುತ್ತದೆ. ಈ ಯುಗಾದಿನಿರ್ಣಯದ ಹಿಂದೆ ವೇದಾಂಗ ಜ್ಯೋತಿಷದ ಮಹತ್ತರ ಸಾಧನೆಗಳೇ ಅಡಗಿವೆ; ಅದರಿಂದ ನಮ್ಮ ಪೂರ್ವಿಕರ ಖಗೋಲಗಣಿತದ ಅಪಾರ ಜ್ಞಾನ ವ್ಯಕ್ತವಾಗುತ್ತದೆ.
RELATED ARTICLES  ಮಕ್ಕಳ ಪ್ರಶ್ನೆಗೆ ಉತ್ತರ ನೀಡುತ್ತೆ ರೋಬೋಟ್ : ವಾವ್ ಇದೇನು ನೋಡಿ.

ಹಬ್ಬದ ಆಚರಣೆಯ ವಿಧಾನ:

ತಳಿರು ತೋರಣವನ್ನು (ಎಳೆಯ ಹಸಿರು ಮಾವಿನೆಲೆ ಮಧ್ಯೆ ಮಧ್ಯೆ ಬೇವಿನ ಎಲೆ ಹೂಗಳ ಗೊಂಚಲು) ಮನೆಗಳ ಮುಂಬಾಗಿಲಿಗೆ ಮತ್ತು ದೇವರ ಮನೆಯ ಬಾಗಿಲಿಗೆ ತಳಿರು ತೋರಣವಾಗಿ ಕಟ್ಟುವರು.

  • ಈ ಹಬ್ಬವನ್ನು ಹೆಚ್ಚಾಗಿ  ಕರ್ನಾಟಕ  ಆಂಧ್ರ ಮತ್ತು ಮಹಾರಾಷ್ಟ್ರಗಳಲ್ಲಿ ಆಚರಿಸುವರು. ಆಂಧ್ರ ಮತ್ತು ಕರ್ನಾಟಕಗಳಲ್ಲಿ ಇದು ಯುಗಾದಿಯಾದರೆ,
  • ಮಹಾರಾಷ್ಟ್ರದಲ್ಲಿ ಗುಡಿಪಾಡ್ವ. ಪಾಡ್ಯಮಿ ದಿವಸ ಗುಡಿಯನ್ನು ಏರಿಸುವುದೇ ಗುಡಿಪಾಡ್ವ – ಒಂದು ಕೋಲಿಗೆ ವಸ್ತ್ರವನ್ನು ಕಟ್ಟಿ, ಹೂವಿನ ಹಾರವನ್ನು ಏರಿಸಿ ‘ಗುಡಿ’ ಎಂದು ಮೂಲೆಯಲ್ಲಿ ಇರಿಸುವರು. ಇದು ಹೊಸ ವರುಷದ ಆಗಮನಕ್ಕೆ ಬಾವುಟವನ್ನು ಹಾರಿಸುವುದರ ಸಂಕೇತ.
  • ಹುಣಿಸೇಹಣ್ಣು, ಬೆಲ್ಲ, ಮಾವಿನಕಾಯಿ, ಉಪ್ಪು, ಮೆಣಸು, ಬೇವು ಇತ್ಯಾದಿಗಳ ಮಿಶ್ರಣ ಮಾಡಿ ಯುಗಾದಿ ಪಚ್ಚಡಿ ಎಂಬ ಹೆಸರಿನ ಪದಾರ್ಥವನ್ನು ಸೇವಿಸುವರು. ಅಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಇರುವುದು.
  • ಮನೆಯ ಮುಂದೆ ಬಣ್ಣ ಬಣ್ಣದ ರಂಗೋಲಿಯನ್ನಿಡುವರು. ಮುಂಜಾನೆ ಬೇಗನೆದ್ದು ಅಭ್ಯಂಜನ (ಎಣ್ಣೆ ಸೀಗೇಕಾಯಿಯಿಂದ ತಲೆಯನ್ನು ತೊಳೆದುಕೊಳ್ಳುವುದು) ಮಾಡಿ ಪುಣ್ಯಾಹ ಮಂತ್ರಗಳನ್ನು ಉಚ್ಚರಿಸಿ ಮಾವಿನೆಲೆಯಿಂದ ಮನೆಯ ಎಲ್ಲ ಕಡೆ ಕಳಶದ ನೀರನ್ನು ಸಿಂಪಡಿಸುವರು. ನಂತರ ಹೊಸ ಬಟ್ಟೆ ಧರಿಸಿ ಪಂಚಾಂಗವನ್ನು ಮನೆಯ ಹಿರಿಯರು ಓದುವರು ಮತ್ತೆಲ್ಲರೂ ಅದನ್ನು ಕೇಳುವರು.
  • ಪಂಚಾಂಗ ಹಿಂದೂ ಸಂಪ್ರದಾಯದ ಕ್ಯಾಲೆಂಡರ್. ಇದು ದಿನಸೂಚಿಯಷ್ಟೆ ಅಲ್ಲದೇ ಆ ವರುಷದಲ್ಲಿ ಮಳೆ ಬೆಳೆ ಹೇಗಿದೆ, ರಾಶಿಫಲ, ಮದುವೆ ಉಪನಯನಗಳಿಗೆ ಒಳ್ಳೆಯ ಮುಹೂರ್ತಗಳು, ಒಟ್ಟರೆ ಜನಜೀವನದ ಸ್ಥಿತಿಯನ್ನು ಸೂಚಿಸಿರುವುದು. ಅಂದು ಹಿರಿಯ ಕಿರಿಯರೆಲ್ಲರೂ ಹೊಸ ಬಟ್ಟೆಗಳನ್ನು ಧರಿಸಿ ಸಂತೋಷದಿಂದ ಹಾಡಿ ನಲಿವರು.
  • ಖಣಿ ಇಡುವುದು : ಕರಾವಳಿಯ ಸೌರಮಾನ ಯುಗಾದಿಯ ವಿಶೇಷತೆ ಖಣಿ ಇಡುವುದು. ಬಾಳೆ ಎಲೆ, ತಟ್ಟೆಯಲಿ ಅಕ್ಕಿ ಹಾಕಿ ಅದರ ಮೇಲೆ ತೆಂಗಿನಕಾಯಿ, ಸೌತೇಕಾಯಿ, ರವಿಕೆ ಕಣ, ಹೊಸ ಬಟ್ಟೆ, ಚಿನ್ನ, ಬತ್ತದ ತೆನೆ, ಹಣ್ಣು, ದೇವರ ಪ್ರತಿಮೆ ಅದರ ಮುಂದೆ ಒಂದು ಕನ್ನಡಿ ಇತ್ತು, ಆ ಕನ್ನಡಿಯಲಿ ದೇವರ ಪ್ರತಿಮೆ ಹಾಗೂ ತಟ್ಟೆಯಲಿ ಇಟ್ಟಂತಹ ವಸ್ತುಗಳನ್ನು ಕಾಣುವ ಹಾಗೆ ಇಡುತ್ತಾರೆ. ವನ್ನು ಇಟ್ಟು ದೇವರ ಮುಂದೆ ಹಿಂದಿನ ರಾತ್ರಿ ಮಲಗುವ ಮುನ್ನ ಇಡುತ್ತಾರೆ. ಯುಗಾದಿ ಹಬ್ಬದಂದು ಬೆಳಿಗ್ಗೆ ಬೇಗ ಎದ್ದು ದೇವರ ದೀಪ ಹಚ್ಚಿ ಖಣಿಯಲ್ಲಿನ ಕನ್ನಡಿಯಲಿ ದೇವ ದರ್ಶನ ಪಡೆಯುವುದು ಅಂದಿನ ವಿಶೇಷ. ನಂತರ ಸ್ನಾನ, ಹೋಳಿಗೆ ಚಿತ್ರಾನ್ನದೂಟ, ದೇಗುಲಕ್ಕೆ ಹಾಗೂ ಹಿರಿಯರ ಭೇಟಿ, ಪಂಚಾಂಗ ಶ್ರವಣ.
  • ಒಬ್ಬಟ್ಟು ಅಥವಾ ಹೋಳಿಗೆ. ತೆಂಗಿನಕಾಯಿ ಹೂರಣದಲ್ಲಿ ಮಾಡಿದ ಹೋಳಿಗೆ ಬಹಳ ದಿನ ಇರದೇ ಕೆಡುವುದೆಂದು ಕಡಲೆ ಅಥವಾ ತೊಗರೀ ಬೇಳೆಯ ಹೂರಣದಲ್ಲಿ ಮಾಡುವರು. *ಇದನ್ನೇ ಮರಾಠಿಯಲ್ಲಿ ಪೂರಣ ಪೋಳಿಎಂದು ಕರೆವರು. ಸಂಜೆಯ ವೇಳೆಯಲ್ಲಿ ಗುರು ಹಿರಿಯರ ಮನೆಗಳಿಗೆ ಹೋಗಿ ಅವರಿಗೆ ಕಾಲುಮುಟ್ಟಿ ನಮಸ್ಕರಿಸಿ ಅವರ ಆಶೀರ್ವಾದ ಪಡೆವರು.
  • ಮನೆಯ ಹೆಂಗಸರು ಹೊಸದಾಗಿ ಬರುವ ಮಾವಿನಕಾಯಿಯಿಂದ ಉಪ್ಪಿನಕಾಯಿಯನ್ನು ಮಾಡುವರು.
  •  
RELATED ARTICLES  ಸ್ಯಾಡ್ ಮ್ಯೂಸಿಕ್ ಕೇಳುವ ಮುನ್ನ ಯೋಚಿಸಿ..!

ಇಂದಿನಿಂದ ವಸಂತ ಮಾಸ ಪ್ರಾರಂಭವಾಗುತ್ತದೆ. ಗಿಡ ಮರಗಳು ಹೊಸ ಚಿಗುರು ಪಡೆಯಲು ಪ್ರಾರಂಭವಾಗುತ್ತದೆ. ಈ ಹೊಸ ವರ್ಷವನ್ನು ಬೇವು-ಬೆಲ್ಲ ತಿನ್ನುವುದರ ಮೂಲಕ ಜೀವನದಲ್ಲಿ ಸಿಹಿ-ಕಹಿ ಎರಡೂ ಸಮಾನವಾಗಿರುವುದರ ಸಂಕೇತವಾಗಿ ಸ್ವೀಕರಿಸಬೇಕೆಂಬ ಸಂದೇಶ ನೀಡಲಾಗುತ್ತದೆ.