ಭಟ್ಕಳ: ಮಗುವಿಗೆ ಒಂದೇ ಸೂರಿನಡಿ ಪ್ರಾಥಮಿಕ ಶಿಕ್ಷಣದಿಂದ ಪದವಿಪೂರ್ವ ತರಗತಿವರೆಗೆ ಶಿಕ್ಷಣ ನೀಡುವ ಉದ್ದೇಶದಿಂದ ಆರಂಭಿಸಲಿರುವ ಕರ್ನಾಟಕ ಪಬ್ಲಿಕ್ ಶಾಲೆ ಯೋಜನೆಯಡಿ ಆಯ್ಕೆಯಾದ ಒಟ್ಟೂ ನೂರು ಶಾಲೆಗಳಲ್ಲಿ ಭಟ್ಕಳ ತಾಲ್ಲೂಕು ಬೈಲೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಜೆಎಚ್ ಪಿಎಸ್ ಮತ್ತು ಜೆಎಚ್ಎಸ್ ಬೈಲೂರು ಶಾಲೆಯನ್ನು ಆಯ್ಕೆ ಮಾಡಲಾಗಿದೆ.
ಅದಲ್ಲದೆ ಪಾಲಕರು ಇಂಗ್ಲಿಷ್ ಮಾಧ್ಯಮ ಶಾಲೆಗಳ ಬಗ್ಗೆ ಹೆಚ್ಚಿನ ಒಲವು ತೋರಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವೇ ಆಸಕ್ತಿ ವಹಿಸಿ ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆಯುವ ಯೋಜನೆ ಕಾರ್ಯಗತಗೊಳಿಸಿದ್ದು, ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ 5 ಶಾಲೆಗಳಲ್ಲಿ ಪ್ರಸಕ್ತ ಸಾಲಿನಿಂದ ಆಂಗ್ಲ ಮಾಧ್ಯಮ ವಿಭಾಗವನ್ನು ಮಂಜೂರು ಮಾಡಿಸಲಾಗಿದೆ ಎಂದು ಶಾಸಕ ಸುನೀಲ್ ನಾಯ್ಕ ತಿಳಿಸಿದರು.
ಸತ್ವಾಧಾರ ನ್ಯೂಸ್ ಗೆ ಮಾಹಿತಿ ನೀಡಿದ ಶಾಸಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗೊರಟೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ತೆರ್ನಮಕ್ಕಿ ಹಾಗೂ ಹೊನ್ನಾವರ ತಾಲ್ಲೂಕಿನ ಚಿತ್ತಾರ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮಂಕಿಯಲ್ಲಿ ಆಂಗ್ಲ ಮಾಧ್ಯಮ ವಿಭಾಗ ಈ ಶೈಕ್ಷಣಿಕ ವರ್ಷದಿಂದಲೇ ಆರಂಭವಾಗಲಿದೆ ಎಂದರು.
ಪಾಲಕರು ಈ ಶಾಲೆಗಳ ಪ್ರಯೋಜನ ಪಡೆದುಕೊಂಡು ಉತ್ತಮ ಶಿಕ್ಷಣ ಪಡೆದು ಕೊಳ್ಳುವಂತಾಗಬೇಕು ಎಂದು ಶಾಸಕರು ಹೇಳಿದರು.