ಬೆಂಗಳೂರು : ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು, ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರತ್ಯೇಕ ವೇತನ ಶ್ರೇಣಿ ನಿಗದಿಗೊಳಿಸಬೇಕು ಹಾಗೂ 2014ಕ್ಕಿಂತ ಮೊದಲು ನೇಮಕವಾದ ಪ್ರಾಥಮಿಕ ಶಾಲಾ ಶಿಕ್ಷಕರನ್ನು 1ರಿಂದ 5ನೇ ತರಗತಿಗೆ ಬೋಧನೆಗೆ ಸೀಮಿತಗೊಳಿಸಿರುವ ಆದೇಶ ರದ್ದುಗೊಳಿಸುವಂತೆ ಒತ್ತಾಯಿಸಿ ಜು.9ರಂದು ರಾಜ್ಯಾದ್ಯಂತ ಶಾಲೆಗಳನ್ನು ಬಂದ್ ಮಾಡಲು ಶಿಕ್ಷಕರ ಸಂಘ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಜೂ.30ರ ವರೆಗೆ ರಾಜ್ಯ ಸರ್ಕಾರಕ್ಕೆ ಗಡುವು ನೀಡಲಾಗಿತ್ತು. ಆದರೆ, ಸರ್ಕಾರವು ಯಾವುದೇ ರೀತಿಯಲ್ಲಿ ಸ್ಪಂದಿಸದಿರುವುದರಿಂದ ಜು.9ರಂದು ರಾಜ್ಯದ ಎಲ್ಲಾ ಶಾಲೆಗಳನ್ನು ಬಂದ್ ಮಾಡಿ ಜಿಲ್ಲಾ ಮಟ್ಟದಲ್ಲಿ ಬೃಹತ್ ಹೋರಾಟ ಮಾಡಲಾಗುವುದು ಎಂದು ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಂ. ನಾರಾಯಣ ಸ್ವಾಮಿ ಹಾಗೂ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಎನ್.ಎಸ್. ತಿಳಿಸಿದ್ದಾರೆ ಎನ್ನಲಾಗಿದೆ.
ಆರನೇ ವೇತನ ಆಯೋಗದ ಅಂತಿಮ ವರದಿ ಶಿಫಾರಸಿನ ಮೇರೆಗೆ ಮುಖ್ಯ ಶಿಕ್ಷಕರಿಗೆ 10, 15, 20, 25 ಮತ್ತು 30 ವರ್ಷದ ಬಡ್ತಿ ನೀಡಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಉಪ ನಿರ್ದೇಶಕ ಹುದ್ದೆವರೆಗೂ ಬಡ್ತಿ ನೀಡಬೇಕು. ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ ಮುಂದುವರಿಸಬೇಕು. ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಲಿ ಪದವೀಧರ ಶಿಕ್ಷಕರನ್ನು ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿಯೂ ಕಾರ್ಯ ನಿರ್ವಹಿಸಲು ಪದವೀಧರ ಶಿಕ್ಷಕರ ವೇತನ ಶ್ರೇಣಿ ನಿಗದಿಗೊಳಿಸಬೇಕು. ಶಿಕ್ಷಕ ವಿದ್ಯಾರ್ಥಿ ಅನುಪಾತ ಗುರುತಿಸುವ ವೇಳೆ ಮುಖ್ಯ ಶಿಕ್ಷಕ, ದೈಹಿಕ ಶಿಕ್ಷಕರನ್ನು ಹೊರತುಪಡಿಸಿ ಮಾಧ್ಯಮವಾರು, ಪ್ರಾದೇಶಿಕವಾರು ವಿಶೇಷ ನಿಯಮಗಳನ್ನು ರೂಪಿಸಿ ಪ್ರಕ್ರಿಯೆ ನಡೆಸಬೇಕು ಎಂಬ ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದೆ ಎಂದು ವರದಿಯಾಗಿದೆ.