ಬೆಂಗಳೂರು- ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ರಾಜ್ಯಾದ್ಯಂತ ಆಚರಿಸುತ್ತಿರುವ ಹಜರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ರದ್ದುಗೊಳಿಸಿದೆ.
ಈ ಸಂಬಂಧ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇಂದು ಅಧಿಕೃತ ಇಲಾಖೆ ಆದೇಶ ಹೊರಡಿಸಿದೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಟಿಪ್ಪು ಜಯಂತಿಯನ್ನು ರದ್ದುಗೊಳಿಸಲು ತೀರ್ಮಾನಿಸಿತ್ತು.
ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ ಅವರು ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಪ್ರತಿ ವರ್ಷ ಸರ್ಕಾರಿ ಕಾರ್ಯಕ್ರಮವಾಗಿ ಟಿಪ್ಪು ಜಯಂತಿಯನ್ನು ಆಚರಿಸುತ್ತಿದ್ದು, ಈ ಜಯಂತಿ ವಿರುದ್ಧ ಕೊಡಗು ಜಿಲ್ಲೆಯಲ್ಲಿ ತೀವ್ರ ಪ್ರತಿಭಟನೆಗಳು ನಡೆದಿದ್ದು, ಜಿಲ್ಲೆಯ ಜನರು ಈ ಕಾರ್ಯಕ್ರಮದ ವಿರುದ್ದ ಇದ್ದಾರೆ.
ಟಿಪ್ಪು ಜಯಂತಿ ಆಯೋಜಿಸಿದ್ದರಿಂದ ಸಾರ್ವಜನಿಕರ ಆಸ್ತಿಪಾಸ್ತಿಗಳಿಗೆ ಅಪಾರ ಹಾನಿಯಾಗಿದೆ. ಜಿಲ್ಲೆಯಲ್ಲಿ ಅಶಾಂತಿ ವಾತಾವರಣ ಇದ್ದು, ಜನರ ನಡುವಿನ ಸಾಮರಸ್ಯ ಹದಗೆಟ್ಟಿದೆ ಹೀಗಾಗಿ ಟಿಪ್ಪು ಜಯಂತಿ ಆಚರಣೆಯನ್ನು ರದ್ದುಪಡಿಸಲು ಆದೇಶ ನೀಡಬೇಕೆಂದು ಕೋರಿದ್ದರು.
ಈ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಟಿಪ್ಪು ಜಯಂತಿಯನ್ನು ರದ್ದುಗೊಳಿಸುವ ತೀರ್ಮಾನವನ್ನು ಕೈಗೊಂಡಿದೆ. ಟಿಪ್ಪು ಜಯಂತಿಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಮೊದಲಿಗೆ ಆಚರಣೆ ಮಾಡಲಾಯಿತು.
ನಂತರ 2016ರಲ್ಲಿ ಟಿಪ್ಪು ಜಯಂತಿ ಆಚರಣೆಯನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ ವರ್ಗಾಯಿಸಲಾಯಿತು. ಅಂದಿನಿಂದಲೂ ಆ ಇಲಾಖೆ ಟಿಪ್ಪು ಜಯಂತಿಯನ್ನು ಆಚರಿಸಿಕೊಂಡು ಬರುತ್ತಿತ್ತು.