ಕುಮಟಾ: ಪಟ್ಟಣದ ಬಸ್ತಿಪೇಟೆಯಲ್ಲಿ ಪ್ರಾರಂಭಗೊಂಡಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಶಾಸಕ ದಿನಕರ ಶೆಟ್ಟಿ ಶನಿವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ಹಣದಲ್ಲಿ ಬಸ್ತಿಪೇಟೆ ಸರ್ಕಲ್‍ನಿಂದ ಹಳೆ ಬಸ್ ನಿಲ್ದಾಣದವರೆಗೆ ಸುಸಜ್ಜಿತ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗುತಿದ್ದು, ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ದಿನಕರ ಶೆಟ್ಟಿ, ರಸ್ತೆಯ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದರು. ಅಲ್ಲದೇ, ಕಾಂಕ್ರೀಟ್ ರಸ್ತೆ ನಿರ್ಮಾಣವಾಗುವ ಸ್ಥಳದಲ್ಲಿ ಒಳಚರಂಡಿ ಹಾದು ಹೋಗಿದ್ದು, ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಉದ್ಯಮಿ ಕುಮಾರ ಕವರಿ, ಗುತ್ತಿಗೆದಾರ ಸುಧೀರ ಪಂಡಿತ, ಪುರಸಭಾ ಮುಖ್ಯಾಧಿಕಾರಿ ಸುರೇಶ ಎಮ್.ಕೆ, ಸಿಬ್ಬಂದಿಗಳಾದ ಸುಧೀರ ಗೌಡ ಸೇರಿದಂತೆ ಇನ್ನಿತರರು ಇದ್ದರು.