ಕುಮಟಾ : ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಕಾರವಾರ- ಅಂಕೋಲಾ ತಾಲೂಕಿನ ಶಿಕ್ಷಣ ಇಲಾಖೆ, ಸಾರಿಗೆ, ಪೋಲಿಸ್ ಹಾಗೂ ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.

ಕೊರೊನಾ ಇರುವ ಕಾರಣಕ್ಕೆ ಪರೀಕ್ಷೆ ಎದುರಿಸುತ್ತಿರುವ ಮಕ್ಕಳ ಆರೋಗ್ಯದ ಬಗ್ಗೆ ಶಿಕ್ಷಕರು ಕಾಳಜಿ ವಹಿಸಬೇಕು. ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಮಾಸ್ಕ್ ‌ಧರಿಸುವುದು, ಸ್ಯಾನಿಟೈಸರ್‌ ಬಳಕೆ ಮಾಡಬೇಕು. ಅಲ್ಲದೇ, ಪರೀಕ್ಷೆಗೆ ಹಾಜರಾಗುವ ಮಕ್ಕಳಿಗೆ ಥರ್ಮಲ್‌ ಸ್ಕ್ರೀನಿಂಗ್ ವ್ಯವಸ್ಥೆ ಕುರಿತು ಶಾಸಕಿ ರೂಪಾಲಿ ನಾಯ್ಕ ವರದಿಪಡೆದರು.

ಮಕ್ಕಳ ಆರೋಗ್ಯದ ಮೇಲೆ ನಿಗಾ ಇಡಲು ಆರೋಗ್ಯ ಇಲಾಖೆ ಸಿಬ್ಬಂದಿ ನಿಯೋಜನೆ, ಹಳ್ಳಿಗಳಿಂದ ಬಸ್‌ನಲ್ಲಿ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಸುಸಜ್ಜಿತ ಬಸ್‌ಗಳ ವ್ಯವಸ್ಥೆ ಕುರಿತು ಮಾಹಿತಿ ಪಡೆಯಲಾಯಿತು.

RELATED ARTICLES  ಕೊಂಕಣ ಎಜ್ಯುಕೇಶನ್ ನಲ್ಲಿ ಮಾತೃಮಂಡಳಿ ಉದ್ಘಾಟನೆ

ಬಸ್ಸಿನಲ್ಲಿ ಪರೀಕ್ಷೆಗೆ ಬರುವಾಗ ಮಕ್ಕಳಲ್ಲಿ ಕೊರೊನಾ ಭಯ ಹೋಗಲಾಡಿಸಲು ಮಕ್ಕಳ ಸ್ನೇಹಿ‌ ಶಿಕ್ಷಕರನ್ನು ನೇಮಿಸಿ ಪರೀಕ್ಷೆಯ ಆತ್ಮವಿಶ್ವಾಸವನ್ನು ಹೆಚ್ಚಿಸುವ ಕೆಲಸವಾಗಬೇಕು. ವಿದ್ಯಾರ್ಥಿಗಳು ಬಸ್‌ಗೆ ಹತ್ತುವ ಸಂದರ್ಭದಲ್ಲಿ ಸ್ಯಾನಿಟೈಸರ್‌ ವ್ಯವಸ್ಥೆ ಮಾಡಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಮಾಹಿತಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಇರಬೇಕು. ಇದರ ಉಸ್ತುವಾರಿಯನ್ನು ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ, ತಹಶಿಲ್ದಾರರು ಮೇಲುಸ್ತುವಾರಿ ವಹಿಸಬೇಕು. ಮಕ್ಕಳನ್ನು ಸಮಯಕ್ಕೆ ಸರಿಯಾಗಿ ಕರೆದುಕೊಂಡು ಹೋಗುವ ವ್ಯವಸ್ಥೆ ಮಾಡಿ ಪಾಲಕರಲ್ಲಿ ಭಯ ಹೊಗಲಾಡಿಸಬೇಕು.

ಪರೀಕ್ಷೆ ತಯಾರಿಬಗ್ಗೆ ಯಾರಿಂದಲೂ ಕಪ್ಪು ಚುಕ್ಕೆ ಬರದ ಹಾಗೆ ನೋಡಿಕೊಳ್ಳಬೇಕು. ಒಂದು ವೇಳೆ ಯಾರಾದರೂ ಲೋಪ ಮಾಡಿದರೆ ಅಂತಹವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.

ಪ್ರತಿಯೊಬ್ಬ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ರೀನಿಂಗ್, ಕೈಗಳಿಗೆ ಸ್ಯಾನಿಟೈಸರ್‌ ಮಾಡಿ ಪರೀಕ್ಷಾ ಕೊಠಡಿಗಳಿಗೆ ಕಳುಹಿಸಲಾಗುತ್ತಿರುವುದರಿಂದ ವಿದ್ಯಾರ್ಥಿಗಳು ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವಂತೆ ನೋಡಿಕೊಳ್ಳಬೇಕು. ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ತಲುಪಿಸಬೇಕು. ಪರೀಕ್ಷೆಯ ಪಾವಿತ್ರತೆಯನ್ನು ಕಾಪಾಡಿಕೊಂಡು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಬೇಕು. ಪರೀಕ್ಷಾ ಕೇಂದ್ರಕ್ಕೆ ಸೂಕ್ತ ಬಂದೋಬಸ್ತನ್ನು ಪೊಲೀಸ್ ಇಲಾಖೆ ಒದಗಿಸಬೇಕು. ಇಂಗ್ಲಿಷ್ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೆ ಪರೀಕ್ಷೆಯನ್ನು ಎದುರಿಸಬೇಕು ಎಂದರು.

RELATED ARTICLES  ವೀಕೆಂಡ್ ಕರ್ಫ್ಯೂ - ಶಾಲೆಗಳು ಬಂದ್ - ಕೊರೋನಾಕ್ಕೆ ಕಡಿವಾಣ ಹಾಕಲು ಸಿದ್ದತೆ.

ಈ ಸಂದರ್ಭದಲ್ಲಿ ಕಾರವಾರ ಮತ್ತು ಅಂಕೋಲಾ ತಾಲೂಕಿನ ಶಿಕ್ಷಣ ಇಲಾಖೆ ಅಧಿಕಾರಿಗಳು, ತಾಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ, ಆರೋಗ್ಯ ಇಲಾಖೆ ಸಿಬ್ಬಂದಿ, ಸಾರಿಗೆ ಇಲಾಖೆ ಅಧಿಕಾರಿಗಳು, ಉಪಸ್ಥಿತರಿದ್ದರು.