ಬೆಂಗಳೂರು: ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ನೆರೆಯ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿಯೂ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸಂವಾದದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸುದ್ದಿಗೋಷ್ಟಿ ನಡೆಸಿದ್ದಾರೆ.
ಕೊರೋನಾ ಸಂಬಂಧಿಸಿದಂತೆ ಎಚ್ಚರಿಕೆ ವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಿದ್ದಾರೆ. ಕೊರೋನಾ ಹಿನ್ನೆಲೆ ರಾಜ್ಯದಲ್ಲಿ ಲಾಕ್ಡೌನ್, ನೈಟ್ ಕರ್ಫ್ಯೂ ಇಲ್ಲ. ಸೀಲ್ ಡೌನ್ ಸಹ ಇಲ್ಲ. ಆದರೆ ಜನರು ಕಡ್ಡಾಯವಾಗಿ ಕೊರೋನಾ ನಿಯಂತ್ರಣ ನಿಯಮಗಳನ್ನು ಅನುಸರಿಸಬೇಕು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಮತ್ತಿತರ ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆಯೂ ಅವರು ತಿಳಿಸಿದ್ದಾರೆ.
ಹಾಗೆಯೇ ಕೊರೋನಾ ವಿಚಾರವಾಗಿ ರಾಜ್ಯ ನಡೆಸುತ್ತಿರುವ ಆರ್‌ಟಿ-ಪಿಸಿಆರ್ ಟೆಸ್ಟ್ ಅನ್ನು ಪ್ರಧಾನಿ ಮೋದಿ ಅವರು ಶ್ಲಾಘಿಸಿದ್ದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಕೊರೋನಾ ಮಾದರಿ ಪರೀಕ್ಷೆಗಳ ಪ್ರಮಾಣವನ್ನು ಹೆಚ್ಚಿಸಲಾಗುತ್ತದೆ ಎಂಬುದಾಗಿಯೂ ಸಿಎಂ ತಿಳಿಸಿದ್ದಾರೆ. ಅಲ್ಲದೆ ಪ್ರತಿನಿತ್ಯ ೩ ಲಕ್ಷ ಜನರಿಗೆ ಕೊರೋನಾ ಮಾದರಿ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗುವುದು. ಎಲ್ಲಾ ರಾಜ್ಯಗಳಿಗೂ ಕೊರೋನಾ ಲಸಿಕೆ ವಿತರಿಸುವ ಭರವಸೆಯನ್ನು ಪ್ರಧಾನಿಗಳು ನೀಡಿದ್ದಾಗಿಯೂ ಅವರು ಹೇಳಿದ್ದಾರೆ.
ಸಾರ್ವಜನಿಕ ಸಭೆ, ಸಮಾರಂಭಗಳಿಗೆ ತಡೆ ಇಲ್ಲ. ಆದರೆ ಒಳಾಂಗಣ ಕಾರ್ಯಕ್ರಮಗಳಿಗೆ ಸೀಮಿತ ಜನರಿಗಷ್ಟೇ ಅವಕಾಶ ಎಂದು ತಿಳಿಸಿದ್ದಾರೆ. ಟೆಸ್ಟಿಂಗ್ ಪ್ರಮಾಣ ಹೆಚ್ಚಿಸಲು ಪ್ರಧಾನಿಗಳು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಟೆಸ್ಟಿಂಗ್ ಸೆಂಟರ್‌ಗಳ ಹೆಚ್ಚಳಕ್ಕೂ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಗಡಿ ಜಿಲ್ಲೆಗಳಲ್ಲಿ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿರುವುದು ಕಂಡುಬಂದಿದ್ದು, ಜನದಟ್ಟಣೆ ಸೇರದಂತೆ ಎಚ್ಚರವಹಿಸುವಂತೆಯೂ ಅವರು ತಿಳಿಸಿದ್ದಾರೆ
ನ್ಯೂಸ್ ೧೩