ಕುಮಟಾ: ಪಟ್ಟಣದ ಸಿದ್ದನಬಾವಿ ರಸ್ತೆಯ ಬಳಿ ನಿರ್ಮಾಣಗೊಳ್ಳುತ್ತಿರುವ ಪ್ರಥಮ ದರ್ಜೆ ಕಾಲೇಜಿನ ಕಟ್ಟಡ ಕಾಮಗಾರಿಯನ್ನು ಶಾಸಕ ದಿನಕರ ಶೆಟ್ಟಿ ಶನಿವಾರ ಪರಿಶೀಲನೆ ನಡೆಸಿ, ತ್ವರಿತವಾಗಿ ನೂತನ ಕಾಲೇಜು ಕಟ್ಟಡವನ್ನು ಹಸ್ತಾಂತರಿಸುವಂತೆ ಸಂಬಂಧಪಟ್ಟ ಗುತ್ತಿಗೆದಾರರಿಗೆ ಸೂಚಿಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಲೇಜು ಕಟ್ಟಡ ನಿರ್ಮಾಣಕ್ಕೆ ಹೆಚ್ಚಿನ ಅನುದಾನವಾಗಿ 70 ಲಕ್ಷ ರೂ.ಗಳು ಈಗ ಬಿಡುಗಡೆಯಾಗಿದ್ದು, ಕಾಮಗಾರಿ ತ್ವರಿತ ಗತಿಯಲ್ಲಿ ಸಾಗುತ್ತಿದೆ. ಶೀಘ್ರದಲ್ಲೇ ಕಾಮಗಾರಿ ಮುಗಿಸಿ, ಕಾಲೇಜಿನ ಆಡಳಿತ ಮಂಡಳಿಗೆ ಹಸ್ತಾಂತರಿಸುವಂತೆ ಈಗಾಗಲೇ ತಿಳಿಸಿದ್ದೇನೆ. ಸಂಬಂಧಪಟ್ಟ ಇಲಾಖೆ ಹಾಗೂ ಗುತ್ತಿಗೆದಾರರೂ ಸಹ ಅತಿ ಶೀಘ್ರದಲ್ಲಿ ಕಾಮಗಾರಿ ಮುಗಿಸುವ ಬಗ್ಗೆ ಭರವಸೆ ನೀಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಪುರಸಭಾ ಸದಸ್ಯ ತುಳುಸು ಗೌಡ, ಪ್ರಮುಖರಾದ ಚೆತೇಶ ಶಾನಭಾಗ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿದ್ದರು.