ಭಟ್ಕಳ: ಭಟ್ಖಳದ ಜನತೆ ಮಳೆಯ ರಭಸಕ್ಕೆ ತತ್ತರಿಸಿ ಹೋಗಿದ್ದಾರೆ. ತಾಲೂಕಿನಲ್ಲಿ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಶನಿವಾರ ತಡರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಭಟ್ಕಳದ ಚೌಥನಿ ನದಿ ಉಕ್ಕಿ ಹರಿಯುತ್ತಿದೆ. ಇಲ್ಲಿನ ಶಂಸುದ್ದೀನ್ ಸರ್ಕಲ್ ನೀರಿನಿಂದ ಜಲಾವೃತಗೊಂಡಿದೆ. ಜೊತೆಗೆ ವಿವಿಧ ರಸ್ತೆಗಳು, ಚೌಥನಿ ಗ್ರಾಮ ಸಂಪೂರ್ಣ ಜಲಾವೃತವಾಗಿವೆ.
ತಾಲೂಕಿನ ಕೆಲವು ಮನೆಗಳಿಗೂ ನೀರು ನುಗ್ಗಿದೆ. ಗ್ರಾಮಗಳ ಮುಳುಗಡೆ ಹಾಗೂ ರಸ್ತೆಯ ತುಂಬಾ ನೀರು ಹರಿದಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.
ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಕಾಮಗಾರಿ ಅಸಮರ್ಪಕವಾಗಿರುವ ಕಾರಣ ಈ ರೀತಿಯಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ತಾಲ್ಲೂಕಿನ ಗ್ರಾಮೀಣ ಭಾಗದಲ್ಲೂ ಮಳೆ ಮುಂದುವರಿದಿದೆ.