ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಹಾವೇರಿಯ ಶಿಗ್ಗಾಂವ್ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ಬೊಮ್ಮಾಯಿ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಆಯ್ಕೆಯಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಆರ್.ಬೊಮ್ಮಾಯಿಯವರ ಪುತ್ರನಾಗಿರುವ ಅವರು, ಜನತಾದಳದಿಂದ ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಜವಾಬ್ಧಾರಿ ನಿರ್ವಹಿಸಿದ ಅನುಭವ ಹೊಂದಿದ್ದಾರೆ.
ಜತೆಗೆ 2008ರಿಂದ ಸತತ ಮೂರು ಬಾರಿ ಶಿಗ್ಗಾಂವ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದು, ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ ಮತ್ತು ಜಗದೀಶ ಶೆಟ್ಟರ ಸಿಎಂ ಆಗಿದ್ದ ವೇಳೆ ಐದು ವರ್ಷ ಜಲಸಂಪನ್ಮೂಲ ಖಾತೆ ನಿರ್ವಹಣೆ ಮಾಡಿದ ಅನುಭವ ಹೊಂದಿದ್ದಾರೆ.
ಬೊಮ್ಮಾಯಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರ, ಶಾಸನ ರಚನಾ ಸಚಿವ ಹಾಗೂ ಹಾವೇರಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಲಸ ನಿರ್ವಹಿಸಿದ ಅನುಭವಗಳನ್ನು ಬಸವರಾಜ ಬೊಮ್ಮಾಯಿ ಹೊಂದಿದ್ದಾರೆ.
ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪನವರು ತಮ್ಮ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದರು. ಬಳಿಕ ನಡೆದ ಕೆಲವು ಚರ್ಚೆಗಳ ಬಳಿಕ ಇಂದು ನೂತನ ಸಿಎಂ ಆಯ್ಕೆಯಾಗಿದೆ.
ದೆಹಲಿಯಲ್ಲಿ ವರಿಷ್ಠರ ಸಭೆಯ ಬಳಿಕ, ವೀಕ್ಷಕರಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ರಾಜ್ಯಕ್ಕೆ ಆಗಮಿಸಿದ್ದರು. ದೆಹಲಿಯಿಂದ ನೇರ ಕಾವೇರಿ ನಿವಾಸಕ್ಕೆ ಆಗಮಿಸಿದ್ದ ಅವರು ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಬಳಿಕ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆದಿತ್ತು