– ಉಮೇಶ ಮುಂಡಳ್ಳಿ ಭಟ್ಕಳ
ಮೊಬೈಲ್- ೯೯೪೫೮೪೦೫೫೨

ಶ್ರಾವಣ ಮಾಸ ಆರಂಭವಾಯಿತು ಎಂದಾಕ್ಷಣವೇ ಹಿಂದು ಹಬ್ಬಗಳು ಸಾಲು ಸಾಲಾಗಿ ಒಂದರ ಹಿಂದೆ ಒಂದು ಬರತೊಡಗುತ್ತದೆ. ಶ್ರಾವಣ ಮಾಸ ಹಾಗೂ ಮಳೆಗಾಲದಲ್ಲಿಯೇ ಹಬ್ಬಗಳು ಹೆಚ್ಚಾಗಿ ಬರಲು ಕಾರಣವೇನು. ಕಂಡಿತ ಇದಕ್ಕೆ ಕಾರಣ ಇದ್ದೆ ಇದೆ. ಅದನ್ನು ತಿಳಿಯುವ ಪ್ರಯತ್ನ ಮಾಡೋಣ. ಇಂದು ಶ್ರಾಮಣದ ಮೊದಲ ಹಬ್ಬದ ಕುರಿತು ತಿಳಿದುಕೊಳ್ಳುವ ಪ್ರಯತ್ನ ಈ ಲೇಖನ.

ಹಿಂದೂ ಪಂಚಾಂಗದ ಪ್ರಕಾರ ಎಲ್ಲ ಹಬ್ಬಗಳಿಗೆ ಮುನ್ನುಡಿಯಂತೆ ಬರುವ ಹಬ್ಬ ಎಂದರೆ ಅದು ನಾಗರ ಪಂಚಮಿ.ಪಂಚಮಿಯು ಭಾರತದ ಎಲ್ಲ ಭಾಗಗಳಲ್ಲಿ ಹಿಂದೂಗಳು ಆಚರಿಸುವ ಒಂದು ಪವಿತ್ರ ಹಬ್ಬ. ಇದನ್ನು ಶ್ರಾವಣಮಾಸದ ಶುಕ್ಲಪಕ್ಷದ ಪಂಚಮಿಯಂದು ಆಚರಿಸಲಾಗುತ್ತದೆ. ಈ ದಿನದಂದು, ನಾಗ ದೇವತೆಯನ್ನು ಪೂಜಿಸಲಾಗುತ್ತದೆ. ಪೂಜೆಯ ಅಂಗವಾಗಿ ದೇವಸ್ಥಾನ ಹಾಗೂ ಹುತ್ತಗಳಿಗೆ ಭೇಟಿ ನೀಡಿ, ಎಲ್ಲ ತೊಂದರೆ ತಾಪತ್ರಯಗಳಿಂದ ತಮ್ಮನ್ನು ರಕ್ಷಿಸಲೆಂದು ಬೇಡಿಕೊಂಡು ಜನರು ಹಾಲನ್ನು ಅರ್ಪಿಸುತ್ತಾರೆ. ಶ್ರಾವಣ ಶುದ್ಧ ಪಂಚಮಿಯಂದು ಆಚರಿಸಲ್ಪುಡುವ ಈ ಹಬ್ಬ ಮುಂದೆ ಬರಲಿರುವ ಗಣೇಶ ಚತುರ್ಥಿ, ಕೃಷ್ಣಾಷ್ಟಮಿ, ನವರಾತ್ರಿ, ದಸರಾ ಎಲ್ಲ ಶುಭ ಆಚರಣೆಗಳಿಗೆ ಮೊದಲ ಆರಂಭ ಅಥವಾ ಮೆಟ್ಟಿಲು ಎಂದೇ ಹೇಳಬಹುದು.

ನಾಗರ ಪಂಚಮಿ ಸಂಬಂಧಿಸಿದಂತೆ ಜನಪದ ಮತ್ತು ಪುರಾಣದಲ್ಲಿ ಹಲವು ಕಥೆಗಳಿವೆ. ಜನಪದ ಕಥೆಯ ಪ್ರಕಾರ ನಾಗರ ಪಂಚಮಿ ಬರುವುದು ಮುಂಗಾರಿನ ರಭಸದ ದಿನಗಳ ಮಧ್ಯೆ. ಈ ಕಾಲ ಕೃಷಿ ಚಟುವಟಿಕೆಗಳಿಗೆ ಪರ್ವ ಕಾಲ. ಈ ಕಾಲದಲ್ಲಿ ಕೃಷಿ ಕಾರ್ಯಕ್ಕೆ ಕೀಟ, ಮಿಡತೆಗಳ ಹಾವಳಿಯೂ ಅಧಿಕ. ಅಷ್ಟೇ ಅಲ್ಲದೆ ಫಸಲು ತಿನ್ನಲು ಬರುವ ಇಲಿಗಳಿಗಂತೂ ಕೊರತೆಯಿಲ್ಲ. ಇವೆಲ್ಲದರಿಂದ ರೈತನ ಫಸಲನ್ನು ಕಾಪಾಡುವುದು ಹಾವುಗಳು. ಶೃಷ್ಠಿಯ ಆಹಾರ ಚಕ್ರದಂತೆ ಇಲಿ, ಕಪ್ಪೆಗಳ ಅತಿಯಾದ ಹಾವಳಿಯನ್ನು ನಿಯಂತ್ರಿಸುವಲ್ಲಿ ನಾಗರ ಹಾವು ಪಾತ್ರ ಮುಖ್ಯ. ಇಂತಹ ರೈತ ಮಿತ್ರನಿಗೆ ಪುಟ್ಟದೊಂದು ಧನ್ಯವಾದ ಹೇಳಲು ನಡೆಸುವ ಪೂಜೆಯೇ ನಾಗರ ಪಂಚಮಿ.

ಸ್ಕಂದ ಪುರಾಣದಲ್ಲಿ ನಾಗರ ಪಂಚಮಿಯ ಬಗ್ಗೆ ಕೆಲ ಮಾಹಿತಿಗಳು ಸಿಗುತ್ತದೆ. ಶ್ರೀಕೃಷ್ಣನ ಮಗನಾದ ಸಾಂಬನು ಶಿವಸುತ ಸುಬ್ರಹ್ಮಣ್ಯನಲ್ಲಿ ನಾಗರ ಪಂಚಮಿಯನ್ನು ಯಾಕೆ ಆಚರಿಸಲಾಗುತ್ತದೆ ಎಂದು ಪ್ರಶ್ನೆ ಕೇಳಿದಾಗ ಆತನ ಒಂದು ಕಥೆಯನ್ನು ಹೇಳುತ್ತಾನೆ.

ಹಿಂದೆ ದೇವಶರ್ಮ ಎಂಬ ಬ್ರಾಹ್ಮಣನೊಬ್ಬನಿದ್ದನು. ಆತನಿಗೆ 8 ಗಂಡು ಮಕ್ಕಳು ಹಾಗೂ ಒಬ್ಬಾಕೆ ಹೆಣ್ಣು ಮಗಳಿದ್ದಳು. ಒಂದು ದಿನ ಗರುಡನಿಂದ ಹೆದರಿಸಲ್ಪಟ್ಟ ನಾಗರವೊಂದು ಈ ಕನ್ನಿಕೆಯ ಬಳಿ ಬಂದು ಆಶ್ರಯವನ್ನು ಕೇಳುತ್ತದೆ. ಭಕ್ತಿಯಿಂದ ಕನ್ನಿಕೆ ಆ ನಾಗನಿಗೆ ಹಾಲು, ಫಲಗಳನ್ನು ಇಟ್ಟು ಭಕ್ತಿಯಿಂದ ಸಾಕುತ್ತಾಳೆ. ಇದಕ್ಕೆ ಪ್ರತಿಯಾಗಿ ಆ ನಾಗವು ದಿನಂಪ್ರತಿ ಆಕೆಗೆ ಒಂದು ತೊಲೆ ಚಿನ್ನವನ್ನು ನೀಡುತ್ತಿರುತ್ತದೆ. ಹೀಗಿರಲು ಒಂದು ದಿನ ಎಂಟು ಗಂಡು ಮಕ್ಕಳಲ್ಲಿ ಒಬ್ಬನು ತುಂಬಾ ಬಂಗಾರ ಬೇಕೆಂದು ನಾಗನನ್ನು ಪೀಡಿಸಿ, ಕಾಲಿನಿಂದ ಒದೆಯುತ್ತಾನೆ. ಕೋಪಗೊಂಡ ನಾಗರ ಹಾವು ಅವನ್ನು ಸೇರಿದಂತೆ ಇತರ ಏಳು ಜನರನ್ನು ಕೊಂದು ಹೊರಟು ಹೋಗುತ್ತದೆ. ತನ್ನ ಅಣ್ಣಂದಿರ ಸಾವಿಗೆ ತಾನೇ ಕಾರಣನಾದೇ ಎಂದು ಆ ಕನ್ನಿಕೆ, ದೇವರ ಎದುರಿನಲ್ಲಿಯೇ ಶಿರಚ್ಛೇದನಕ್ಕೆ ಮುಂದಾದಾಗ, ನಾರಾಯಣನು ವಾಸುಕಿಗೆ ಆ ಸತ್ತ ಹುಡುಗರನ್ನು ಬದುಕಿಸಲು ಹೇಳುತ್ತಾನೆ. ಈ ರೀತಿ ಪುನಃ ಅಣ್ಣಂದಿರ ಜೀವವನ್ನು ಮರಳಿ ಪಡೆದುಕೊಳ್ಳುವಲ್ಲಿ ಆ ಕನ್ನಿಕೆ ಯಶಸ್ವಿಯಾದ ದಿನವೇ ನಾಗರ ಪಂಚಮಿ. ಹಾಗಾಗಿ ಈ ಪಂಚಮಿ ಹೆಣ್ಣುಮಕ್ಕಳಿಗೆ ವಿಶೇಷವೂ ಆಗಿದೆ.

RELATED ARTICLES  ವಿದ್ಯಾಪ್ರಸನ್ನ ಶ್ರೀಗಳ ಭೇಟಿ- ಕುಕ್ಕೆ ದೇವರ ದರ್ಶನ ಪಡೆದ ಅಮಿತ್ ಶಾ

ಉತ್ತರ ಕರ್ನಾಟಕ ಭಾಗದಲ್ಲಿ ನಾಗರಪಂಚಮಿ ಅತ್ಯಂತ ವಿಶೇಷತೆಗಳಿಂದ ಕೂಡಿರುತ್ತದೆ. `ನಾಗರ ಪಂಚಮಿ ಬಂತು, ಅಣ್ಣ ಬರುತ್ತಾನೆ ಕರೆಯಾಕ, ಎನ್ನುವ ಜಾನಪದ ಹಾಡು ಹಬ್ಬದ ವಿಶೇಷತೆ ಸಾರುತ್ತದೆ. ತವರಿಗೆ ಹೆಣ್ಣುಮಕ್ಕಳನ್ನು ಆಹ್ವಾನಿಸಿ, ಉಡುಗೊರೆ ನೀಡಿ ಗೌರವಿಸಲಾಗುತ್ತದೆ. ಹೆಣ್ಣು ಮಕ್ಕಳು ಈ ಬಾಗದಲ್ಲಿ ಜೋಕಾಲಿ ಕಟ್ಟಿ ಆಡುತ್ತ ಸಂಭ್ರಮಿಸುತ್ತಾರೆ. ವಿಶೇಷ ರೀತಿಯ ಸಿಹಿ ತಿನಿಸು ಉಂಡೆ ಖಾದ್ಯಗಳನ್ನು ಮಾಡಿ ಮನೆ ಮನೆಗಳಲ್ಲಿ ಪರಸ್ಪರ ಹಂಚಿಕೊಂಡು ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಾರೆ.

ನಮ್ಮ ಪೂರ್ವಜರ ಕಾಲದಿಂದಲೂ ನಾಗಪೂಜೆ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ. ಮಹಾಭಾರತ ಕಾಲದಲ್ಲಿಯೂ ನಾಗಾರಾಧನೆಯನ್ನು ಮಾಡಿರುವುದನ್ನು ತಿಳಿಯಬಹುದಾಗಿದೆ. ಸಿಂಧೂ ಸಂಸ್ಕೃತಿಯ ಉತ್ಕನನ ತಾಣಗಳಲ್ಲಿ ಸಿಕ್ಕಿರುವ ಅನೇಕ ಅವಶೇಷಗಳು ಅಲ್ಲಿನ ಜನರು ನಾಗ ಪೂಜೆ ಮಾಡುತ್ತಿದ್ದರು ಎನ್ನುವುದು ತಿಳಿದುಬರುತ್ತದೆ. ಅವರ ನಂತರ ಬಂದಿರುವ ಅನೇಕ ರಾಜಮನೆತನಗಳು ಸರ್ಪವನ್ನು ವಿಶೇಷವಾಗಿ ಪೂಜಿಸುತ್ತಿದ್ದರು. ಈ ಬಗ್ಗೆ ಇತಿಹಾಸದ ಪುಟಗಳಲ್ಲಿ ಅನೇಕ ಉಲ್ಲೇಖಗಳನ್ನು ಕಾಣಬಹುದಾಗಿದೆ.

“ಅನಂತಂ ವಾಸುಕಿಂ ಶೇಷಂ ಪದ್ಮನಾಭಂ ಚ ಕಂಬಲಮ್| ಶಂಖಪಾಲಂ ಧೃತರಾಷ್ಟ್ರಂ ತಕ್ಷಕಂ, ಕಾಲಿಯಂ ತಥಾ”
ಎಂಬ ಶ್ಲೋಕವು ನಾಗ ದೇವನ ವಿವಿಧ ಹೆಸರುಗಳನ್ನು ಹೇಳುತ್ತದೆ. ಅನಂತ, ವಾಸುಕೀ, ಶೇಷ, ಪದ್ಮನಾಭ, ಕಂಬಲ, ಶಂಖಪಾಲ, ಧೃತರಾಷ್ಟ್ರ, ತಕ್ಷಕ ಮತ್ತು ಕಾಲಿಯಾ ಹೀಗೆ ಒಂಭತ್ತು ಜಾತಿಯ ನಾಗಗಳ ಆರಾಧನೆ ಮಾಡಲಾಗುತ್ತದೆ. ಸರ್ಪಭಯ ಮತ್ತು ವಿಷದಿಂದ ತೊಂದರೆಯಾಗದೇ ಇರಲು ಹಲವು ಕಡೆ ನಾಗನ ಕಲ್ಲುಗಳಿಗೆ ಕ್ಷೀರಾಭಿಷೇಕ ಮಾಡುವ ಪದ್ಧತಿಯಿದೆ.

RELATED ARTICLES  ಜಾಧವ್‌ ತಾಯಿ, ಪತ್ನಿಯ ಮಂಗಳ ಸೂತ್ರ, ಬಳೆ, ಕುಂಕುಮ ತೆಗೆಸಿದ ಪಾಕ್‌!

ನಾಗರಪಂಚಮಿಯ ದಿನದಲ್ಲಿ ವಾತಾವರಣವು ಸ್ಥಿರವಾಗಿರುತ್ತದೆ. ಸಾತ್ವಿಕತೆಯನ್ನು ಗ್ರಹಿಸಲು ಈ ಕಾಲವು ಅತ್ಯಂತ ಯೋಗ್ಯ ಮತ್ತು ಬಹಳ ಉಪಯುಕ್ತವಾಗಿದೆ. ಅನೇಕ ಕಡೆ ಶ್ರಾವಣ ಶುದ್ಧ ಪಂಚಮಿಯ ದಿನ, ಸಗಣಿಯಿಂದ ಬಾಗಿಲು ಸಾರಿಸಿ, ರಂಗೋಲಿ, ಇಲ್ಲವೇ ಅರಿಶಿಣ, ಕುಂಕುಮದಿಂದ ನಾಗರ ಚಿತ್ರಗಳನ್ನು ಬರೆದು ನೇಮನಿಷ್ಠೆಯಿಂದ ಪೂಜೆ ಮಾಡುತ್ತಾರೆ.
ಒಂದು ಐತಿಹ್ಯದ ಪ್ರಕಾರ ಈ ಪಂಚಮಿಯನ್ನು ಸರ್ಪಯಜ್ಞವನ್ನು ನಿಲ್ಲಿಸಿದ ದಿನವೆಂದು ಹೇಳಲಾಗುತ್ತದೆ.

ಜನಮೇಜಯ ರಾಜ ತನ್ನ ತಂದೆ ಪರೀಕ್ಷಿತ ರಾಜನ ಸಾವಿಗೆ ಸರ್ಪವೊಂದು ಕಾರಣವೆಂದು ತಿಳಿದು, ಭೂಲೋಕದಲ್ಲಿ ಸರ್ಪಸಂಕುಲವನ್ನು ನಿರ್ನಾಮ ಮಾಡಲು ‘ಸರ್ಪಯಜ್ಞ’ವನ್ನು ಆರಂಭಿಸುತ್ತಾನೆ. ಋತ್ವಿಜರು ಹೋಮಮಾಡಲು ಆರಂಭಿಸಿದಾಗ ಸರ್ಪಗಳು ಒಂದರ ಹಿಂದೆ ಒಂದರಂತೆ ಬಂದು ಅಗ್ನಿಕುಂಡಕ್ಕೆ ಬಿದ್ದು ಬುದಿಯಾಗತೊಡಗಿತು. ಇದನ್ನು ಕಂಡ ಉಳಿದ ಸರ್ಪಗಳು ಸರ್ಪರಾಜ ವಾಸುಕಿಯ ತಂಗಿಯಾದ ಜರತ್ಕಾರು ಬಳಿ ಹೋಗಿ  ದಯವಿಟ್ಟು ನಮ್ಮನ್ನು ಆ ರಾಜನ ಹೋಮದಿಂದ ರಕ್ಷಿಸು ಎಂದು ಬೇಡಿಕೊಳ್ಳುತ್ತವೆ. ಸರ್ಪಗಳ ಮನವಿಗೆ ಜರತ್ಕಾರು ಒಪ್ಪಿ ತನ್ನ ಮಗನಾದ ಆಸ್ತೀಕನಿಗೆ ಯಜ್ಞವನ್ನು ನಿಲ್ಲಿಸಿ ಬರುವಂತೆ ಸೂಚನೆ ನೀಡುತ್ತಾಳೆ. ಆಸ್ತೀಕ ಋಷಿಯು ಸರ್ಪಯಜ್ಞ ಮಾಡುವ ಜನಮೇಜಯ ರಾಜನ ಯಜ್ಞಶಾಲೆಯನ್ನು ಪ್ರವೇಶಿಸಿ ತನ್ನ ವಿದ್ಯಾಬಲದಿಂದ ಪ್ರಾಣಿ ಹಿಂಸೆ ಮಹಾಪಾಪ, ನೀನು ಈಗಾಗಲೇ ಮಾಡುತ್ತಿರುವ ಸರ್ಪಯಜ್ಞವನ್ನು ನಿಲ್ಲಿಸಬೇಕು ಎಂದು ಬೋಧಿಸಿದ. ಜನಮೇಜಯನು ಆಸ್ತಿಕನ ಮಾತಿಗೆ ಬೆಲೆಕೊಟ್ಟು ಸರ್ಪಯಜ್ಞವನ್ನು ನಿಲ್ಲಿಸಿದ ಎಂದು ಹೇಳಲಾಗುತ್ತದೆ. ಈ ದಿನ ಕೂಡ ಪಂಚಮಿಯ ದಿನವೇ ಆಗಿರುವುದು ವಿಶೇಷವಾಗಿದೆ.

ಹೀಗೆ ನಾಗರ ಪಂಚಮಿ ಒಂದು ಕಾಲ,ಒಂದು ಜನಾಂಗ, ಒಂದು ಪ್ರದೇಶಕಷ್ಟೇ ಸೀಮಿತವಾಗದೆ ಎಲ್ಲ ಕಾಲ ಪ್ರದೇಶಗಳನ್ನು ಮೀರಿದ ಭಾವೈಕ್ಯತೆ ಬಾಂಧವ್ಯ ಬೆಸೆಯುವ ಹಬ್ಬವಾಗಿದೆ.
( ಮಾಹಿತಿ ಸಂಗ್ರಹ- ಜನಪದ ಮಾಹಿತಿ, ಸ್ಕಂದ ಪುರಾಣ, ಮಹಾಭಾರತ ಹಾಗೂ ಐತಿಹಾಸಿಕ ದಾಖಲೆಗಳು)