ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಅವರು ಇಹಲೋಕ ತ್ಯಜಿಸಿದ್ದಾರೆ. ಯೋಗ ಮಾಡುವ ವೇಳೆ ಆಯತಪ್ಪಿ ಬಿದ್ದು, ತಲೆಗೆ ಪೆಟ್ಟು ಮಾಡಿಕೊಂಡಿದ್ದ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಬಳಿಕ ಮಂಗಳೂರಿನ ಯೆನಪೋಯ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ. ಆಸ್ಕರ್ ಫರ್ನಾಂಡಿಸ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಆಪ್ತ ವಲಯದಲ್ಲಿ ಫರ್ನಾಂಡಿಸ್ ಗುರುತಿಸಿಕೊಂಡಿದ್ದರು.
ಪಕ್ಷದಲ್ಲಿ ಪ್ರಮುಖ ನಿರ್ಧಾರ ತೆಗೆದುಕೊಳ್ಳುತ್ತಿದ್ದ ಪ್ರಮುಖ ನಾಯಕರ ಪೈಕಿ ಆಸ್ಕರ್ ಫರ್ನಾಂಡಿಸ್ ಅವರು ಸಹ ಒಬ್ಬರಾಗಿದ್ದರು. ಯಾವುದೇ ಬ್ರಷ್ಟಾಚಾರವಿಲ್ಲದೇ ಶುದ್ಧ ಹಸ್ತರಾಗಿದ್ದ ಅವರು ತಮ್ಮ ಪ್ರಮಾಣಿಕತೆ,ಸರಳತೆ ಮೂಲಕ ಹೆಸರು ಮಾಡಿದ್ದರು.
1941 ರಲ್ಲಿ ಜನಿಸಿದ್ದ ಆಸ್ಕರ್ ಫರ್ನಾಂಡಿಸ್, ಐಎನ್ ಸಿಯಲ್ಲಿ ಉನ್ನತ ಹುದ್ದೆಗಳನ್ನು ನಿಭಾಯಿಸಿ ಅನುಭವವುಳ್ಳ ನಾಯಕರಾಗಿದ್ದರು. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ರಾಜಕೀಯ ಕಾರ್ಯದರ್ಶಿಯಾಗಿದ್ದಷ್ಟೇ ಅಲ್ಲದೇ ರಾಹುಲ್ ಗಾಂಧಿ ಅವರಿಗೂ ಆಸ್ಕರ್ ಆಪ್ತರಾಗಿದ್ದರು.
ಡಾ.ಮನಮೋಹನ್ ಸಿಂಗ್ ಅವರ ಯುಪಿಎ ಮೊದಲ ಸರ್ಕಾರದಲ್ಲಿ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದ ರಾಜ್ಯ ಖಾತೆ ಸಚಿವ (ಸ್ವತಂತ್ರ ನಿರ್ವಹಣೆ)ರಾಗಿದ್ದ ಆಸ್ಕರ್ ಫರ್ನಾಂಡಿಸ್ ಯುಪಿಎ-2 ನಲ್ಲಿ ಸಾರಿಗೆ, ರಸ್ತೆ ಹಾಗೂ ಹೆದ್ದಾರಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು.
1980 ರಲ್ಲಿ 7 ನೇ ಲೋಕಸಭೆಗೆ ಉಡುಪಿ ಕ್ಷೇತ್ರದಿಂದ ಮೊದಲಬಾರಿ ಸಂಸತ್ ಗೆ ಆಯ್ಕೆಯಾಗಿದ್ದ ಆಸ್ಕರ್ ಫರ್ನಾಂಡಿಸ್ 1984, 1989, 1991, 1996 ರಲ್ಲಿ ಸತತವಾಗಿ ಈ ಕ್ಷೇತ್ರದಿಂದ ಆಯ್ಕೆಯಾಗಿದ್ದರು. 1998 ರಲ್ಲಿ ರಾಜ್ಯಸಭೆಗೆ ಮೊದಲ ಬಾರಿ ಆಯ್ಕೆಯಾದ ಅವರು, 2004 ರಲ್ಲಿ ಮರು ಆಯ್ಕೆಯಾದರು. 2004-2009 ರಲ್ಲಿ ಕೇಂದ್ರ ಸಚಿವರಾಗಿ ಸಾಂಖ್ಯಿಕ ಹಾಗೂ ಯೋಜನಾ ಜಾರಿ ಸಚಿವಾಲಯ, ಎನ್ಆರ್ ಐ ವ್ಯವಹಾರಗಳ ಖಾತೆ, ಯುವಜನ ಕ್ರೀಡಾ ಖಾತೆ, ಕಾರ್ಮಿಕ ಹಾಗೂ ಉದ್ಯೋಗ ಖಾತೆಗಳಂತಹ ಪ್ರಮುಖ ಖಾತೆಗಳನ್ನು ನಿರ್ವಹಿಸಿದ್ದರು. ಬೆಂಗಳೂರಿನ ಐಐಎಸ್ ಸಿ ಕೌನ್ಸಿಲ್ ನ ಸದಸ್ಯರಾಗಿಯೂ ಆಸ್ಕರ್ ಫರ್ನಾಂಡಿಸ್ ಕಾರ್ಯನಿರ್ವಹಿಸಿ ಅನುಭವ ಹೊಂದಿದ್ದಾರೆ.