ನವದೆಹಲಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಕರಾವಳಿ ತೀರದಲ್ಲಿ 2 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಸೆಪ್ಟೆಂಬರ್ 28ರ ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಎರಡು ದಿನಗಳ ಕಾಲ ಕರಾವಳಿ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮಾತ್ರವಲ್ಲದೇ ಬಾಗಲಕೋಟೆ, ಹಾವೇರಿ, ಕೊಪ್ಪಳ, ಕಲಬುರಗಿ, ರಾಯಚೂರು, ಯಾದಗಿರಿ, ಧಾರವಾಡ ಜಿಲ್ಲೆಯಲ್ಲಿಯೂ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಪಾಕಿಸ್ತಾನವು ಗುಲಾಬ್ ಎಂದು ಹೆಸರಿಟ್ಟಿರುವ ಈ ಚಂಡಮಾರುತವು ಒಡಿಶಾದ ಗೋಪಾಲಪುರದ 270 ಕಿಲೋ ಮೀಟರ್ ಪೂರ್ವ-ಆಗ್ನೆಯದಲ್ಲಿ ಹಾಗೂ ಆಂಧ್ರಪ್ರದೇಶದ ಕಾಳಿಂಗ ಪಟ್ಟಣಂ ನಿಂದ 330 ಕಿಲೋಮೀಟರ್ ಪೂರ್ವದಲ್ಲಿದೆ ಎಂದು ಹೇಳಿದೆ.