ಕುಮಟಾ : ತಾಲೂಕಿನ ಕತಗಾಲ ಬಳಿ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನ ಚಾಲಕ ಸೇರಿದಂತೆ ನಾಲ್ವರು ಪ್ರಯಾಣಿಕರು ಗಾಯಗೊಂಡ ಘಟನೆ ಶನಿವಾರ ರಾತ್ರಿ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ನಿವಾಸಿಗಳಾದ ಪವನ ಎಂ.ಎನ್, ಮಾನಸ ಎಂ.ಎಸ್, ಲತಾ ನಾಗರಾಜ, ಕಾರಿನ ಚಾಲಕ ನಾಗರಾಜ ಎಂ.ಪಿ. ಗಾಯಗೊಂಡವರಾಗಿದ್ದಾರೆ. ಘಟನೆಯಿಂದಾಗಿ ಸ್ಥಳದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು, ಸ್ಥಳೀಯ ಜನರ ಸಹಕಾರದೊಂದಿಗೆ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಚಾಲಕ ಶಿರಸಿ ಕಡೆಯಿಂದ ಕುಮಟಾ ಕಡೆಗೆ ಅತಿವೇಗ ಹಾಗೂ ನಿರ್ಲಕ್ಷದಿಂದ ಕಾರನ್ನು ಚಲಾಯಿಸಿ, ಕುಮಟಾ ಕಡೆಯಿಂದ ಶಿರಸಿ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಕುಮಟಾ ತಾಲೂಕಿನ ಕತಗಾಲ ಬಳಿಯ ಹೆದ್ದಾರಿಯಲ್ಲಿ ಡಿಕ್ಕಿ ಹೊಡೆದಿದ್ದಾನೆ.
ಘಟನೆಯಲ್ಲಿ ಕಾರಿನ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿದ್ದು, ತಕ್ಷಣ ಅಂಬುಲೆನ್ಸ್ ಮೂಲಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.