ಭಟ್ಕಳ : ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಜಾಲಿ ಕ್ರಾಸ್ ಬಳಿ ಬೈಕ್ ಹಾಗೂ ಕಾರಿನ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಶನಿವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಶಿರಾಲಿ ಕಡೆಯಿಂದ ಭಟ್ಕಳಕ್ಕೆ ಬರುತ್ತಿದ್ದ ಬೈಕ್ ಹಾಗೂ ಭಟ್ಕಳ ಕಡೆಯಿಂದ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ.
ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ತಿಮ್ಮಪ್ಪ ಮೊಗೇರ (36) ಅಳ್ವೆಕೋಡಿ, ಶಿರಾಲಿ ಎಂದು ಗುರುತಿಸಲಾಗಿದೆ. ಈತ ಶಿರಾಲಿ ಕಡೆಯಿಂದ ಭಟ್ಕಳಕ್ಕೆ ಬರುತ್ತಿದ್ದಾಗ ಭಟ್ಕಳ ಕಡೆಯಿಂದ ಶಿರಾಲಿ ಕಡೆಗೆ ಹೋಗುತ್ತಿದ್ದ ಕೇರಳ ಮೂಲದ ಕಾರೊಂದು ಅತಿ ವೇಗದಿಂದ ಚಲಾಯಿಸಿಕೊಂಡು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನ ತಲೆ ಹಾಗೂ ಮುಖಕ್ಕೆ ಗಂಭೀರ ಗಾಯವಾಗಿ ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದೆ.
ಈ ಸಂಬಂಧ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರು ಚಾಲಕ ಇಲಿಯಾಸ್ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿನೀಡಿ ಮುಂದಿನ ಪ್ರಕ್ರಿಯೆ ಕೈಗೊಂಡಿದ್ದಾರೆ ಎನ್ನಲಾಗಿದೆ.