Home Uttara Kannada ಶಾರದಾ ಭಟ್ಟರಿಗೆ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ.

ಶಾರದಾ ಭಟ್ಟರಿಗೆ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ.

ಕುಮಟಾ: ಪ್ರಸಕ್ತ ಸಾಲಿನ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕೊಡಮಾಡುವ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿಗೆ ಕುಮಟಾ ತಾಲೂಕಿನ ಕೂಜಳ್ಳಿಯ ನಿವೃತ್ತ ಶಿಕ್ಷಕಿ ಶಾರದಾ ಕೃಷ್ಣಮೂರ್ತಿ ಭಟ್ಟ ಆಯ್ಕೆಯಾಗಿದ್ದಾರೆ. ಇವರು ಸುದೀರ್ಘ 31 ವರ್ಷಗಳ ಕಾಲ ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಮುಖ್ಯಾಧ್ಯಾಪಕಿಯಾಗಿ ನಿವೃತ್ತಿಯಾಗಿದ್ದಾರೆ. ಇವರಿಗೆ 1997 ರಲ್ಲಿ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ, 2001ರಲ್ಲಿ ರಾಷ್ಟ್ರ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಸಿಕ್ಕಿದೆ.

ಇವರು ರಚಿಸಿದ ನಾಟಕ, ಭಜನೆ, ಚುಟುಕು ಒಳಗೊಂಡ ಒಟ್ಟೂ 9 ಕೃತಿಗಳು ಈಗಾಗಲೇ ಬಿಡುಗಡೆಯಾಗಿದ್ದು, ಸದ್ಯ ಒಂದು ಕೃತಿ ಬಿಡುಗಡೆ ಹಂತದಲ್ಲಿದೆ. ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗೆ ಸಲ್ಲಿಸಿರುವ ಸೇವೆ, ಶಿಕ್ಷಣ, ಸಾಮಾಜಿಕ, ಸಾಹಿತ್ಯ ಕ್ಷೇತ್ರದಲ್ಲಿ ಇವರು ಸಾದನೆ ಗುರುತಿಸಿ, ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2022ನೇ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಘೋಷಿಸಲಾಗಿದೆ. ಮಾ. 8ರಂದು ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕರು ತಿಳಿಸಿದ್ದಾರೆ.