ಹೊನ್ನಾವರ: ಶರಾವತಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು, ಜಲಾಶಯಕ್ಕೆ ಭಾರೀ ಪ್ರಮಾಣದ ನೀರು ಹರಿದು ಬರುತ್ತಿದೆ. ಜಲಾಶಯ ಗರಿಷ್ಠ ಮಟ್ಟ ತಲುಪುವ ಸಾಧ್ಯತೆಯಿದ್ದು ಯಾವುದೇ ಸಮಯದಲ್ಲಿ ನೀರು ಬಿಡಲಾಗುವುದು ಎಂದು ಲಿಂಗನಮಕ್ಕಿ ಜಲಾಶಯದ ಪ್ರವಾಹದ ಎರಡನೇ ಮುನ್ನೆಚ್ಚರಿಕೆಯ ಸೂಚನೆ ನೀಡಲಾಗಿದೆ.
ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ಏಕಪ್ರಕಾರವಾಗಿ ಏರುತ್ತಿರುತ್ತದೆ. ಲಿಂಗನಮಕ್ಕಿ ಜಲಾಶಯದ ಗರಿಷ್ಠ ಮಟ್ಟವು 1819 ಅಡಿಗಳಾಗಿದ್ದು ಈಗಿನ ಜಲಾಶಯದ ನೀರಿನ ಮಟ್ಟ 1806.95 ಅಡಿಗಳಾಗಿರುತ್ತದೆ. ಲಿಂಗನಮಕ್ಕಿ ಜಲಾಶಯದ ಈಗಿನ ಒಳ ಹರಿವು ಸುಮಾರು 67,000 ಕ್ಯೂಸೆಕ್ ಗಳಿಗಿಂತಲೂ ಅಧಿಕವಾಗಿರುತ್ತದೆ. ಇದೇ ರೀತಿಯಲ್ಲಿ ಜಲಾಶಯಕ್ಕೆ ಬರುವ ನೀರಿನ ಹರಿವು ಮುಂದುವರೆದ ಪಕ್ಷದಲ್ಲಿ ಜಲಾಶಯವು ಶೀಘ್ರದಲ್ಲಿ ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆ ಇರುತ್ತದೆ. ಆದ್ದರಿಂದ, ಲಿಂಗನಮಕ್ಕಿ ಅಣೆಕಟ್ಟೆಯ ಸುರಕ್ಷತಾ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಜಲಾಶಯದಿಂದ ಯಾವುದೇ ಸಮಯದಲ್ಲಿ ಹೊರಬಿಡಲಾಗುವುದು.
ಲಿಂಗನಮಕ್ಕಿ ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರು ವಗೈರೆಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಬೇಕೆಂದು ಕೆ.ಪಿ.ಸಿ.ಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
———-