ಹೊನ್ನಾವರ: ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಬಾರೀ ಮಳೆ ಸುರಿಯುತ್ತಿದ್ದು, ಲಿಂಗನಮಕ್ಕಿ ಜಲಾಶಯಕ್ಕೆ ವ್ಯಾಪಕ ಪ್ರಮಾಣದ ನೀರು ಹರಿದು ಬಂದಲ್ಲಿ ಯಾವುದೇ ಕ್ಷಣದಲ್ಲಿ ನೀರು ಹೊರಬಿಡಲಾಗುವುದು ಎಂದು ಲಿಂಗನಮಕ್ಕಿ ಜಲಾಶಯದ ಪ್ರವಾಹದ ಮೂರನೇ ಅಂತಿಮ ಮುನ್ನೆಚ್ಚರಿಕೆಯ ಸೂಚನೆ ನೀಡಲಾಗಿದೆ.
ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದೆ. ಜಲಾಶಯದ ಗರಿಷ್ಠ ಮಟ್ಟವು 1819 ಅಡಿಗಳಾಗಿದ್ದು ಈಗಿನ ಜಲಾಶಯದ ನೀರಿನ ಮಟ್ಟ 1811.80 ಅಡಿಯಾಗಿದೆ.
ಲಿಂಗನಮಕ್ಕಿ ಜಲಾಶಯದ ಒಳ ಹರಿವು ಸುಮಾರು 29,000 ಕ್ಯೂಸೆಕ್ ಗಿಂತಲೂ ಅಧಿಕವಾಗಿದ್ದು, ಇದೇ ರೀತಿ ಜಲಾಶಯಕ್ಕೆ ನೀರು ಹರಿದು ಬಂದಲ್ಲಿ ಜಲಾಶಯವು ಶೀಘ್ರವಾಗಿ ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆಯಿದೆ. ಆದ್ದರಿಂದ ಅಣೆಕಟ್ಟೆಯ ಸುರಕ್ಷತಾ ದೃಷ್ಠಿಯಿಂದ ಹೆಚ್ಚುವರಿ ನೀರನ್ನು ಯಾವುದೇ ಸಮಯದಲ್ಲಿ ಜಲಾಶಯದಿಂದ ಹೊರಬಿಡಲಾಗುವುದು. ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರವಾಗಬೇಕೆಂದು ಕೆಪಿಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.