ಹೊನ್ನಾವರ: ಸರ್ಕಾರ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಹಿಂದೆ ಆಗಿ ಹೋದ ಎಲ್ಲ ಮುಖ್ಯಮಂತ್ರಿಗಳು ಶಿಕ್ಷಣಕ್ಕೆ ಆದ್ಯತೆ ನೀಡಿ ಪಾಲಕರ ಮೇಲಿನ ಹೊರೆ ಕಡಿಮೆ ಮಾಡಿದ್ದಾರೆ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು.
ಪೋಷಣ ಶಕ್ತಿ ನಿರ್ಮಾಣ ಯೋಜನೆ ಅಡಿಯಲ್ಲಿ ತಾಲೂಕಿನ ಕರ್ಕಿಯ ಶ್ರೀ ಚೆನ್ನಕೇಶವ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಒಂದು ದೇಶ ಅಭಿವೃದ್ಧಿಯಾಗಿದೆ ಎಂದು ಗುರುತಿಸಿಕೊಳ್ಳುವುದು ಶಿಕ್ಷಣದಿಂದ. ಯಾವ ದೇಶದಲ್ಲಿ ನೂರಕ್ಕೆ ನೂರರಷ್ಟು ಸಾಕ್ಷರತೆ ಇದೆಯೋ ಅದು ಅಭಿವೃದ್ಧಿ ಹೊಂದಿದ ದೇಶವಾಗುವುದು ಎಂದರು.
ಚೆನ್ನಕೇಶವ ಪ್ರೌಢಶಾಲೆಗೆ ರಂಗ ಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ. ಅನುದಾನ ಮಂಜೂರಾತಿ ಕೊಡುವುದಾಗಿ ಈ ಸಂದರ್ಭದಲ್ಲಿ ಅವರು ಭರವಸೆ ನೀಡಿದರು.
ಶಾಲಾಭಿವೃದ್ಧಿ ಸಮಿತಿಯಿಂದ ಶಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಪ್ರೌಢಶಾಲೆಯ ಆಡಳಿತ ಮಂಡಳಿಯ ನಿರ್ದೇಶಕ ಸುಬ್ರಾಯ ಭಟ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಾಧ್ಯಾಪಕ ಎಲ್.ಎಂ.ಹೆಗಡೆ ಸ್ವಾಗತಿಸಿದರು. ಶಿಕ್ಷಕ ಶ್ರೀಕಾಂತ ಹಿಟ್ನಳ್ಳಿ ವಂದಿಸಿದರು. ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಗಜಾನನ ಹೆಗಡೆ, ಬಿಆರ್‌ಸಿ ಎಸ್.ಎಂ.ಹೆಗಡೆ, ಗ್ರಾ.ಪಂ. ಸದಸ್ಯರಾದ ಶ್ರೀಕಾಂತ ಮೊಗೇರ, ಸಾಧನಾ ನಾಯ್ಕ, ನಾಗರಾಜ ಗೌಡ, ಗಜಾನನ ನಾಯ್ಕ, ಹರೀಶ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.