ಕಾರವಾರ: ಜಿಲ್ಲೆಗೆ ಹೊಸಬನಾಗಿರುವುದರಿಂದ ಭೌಗೋಳಿಕವಾಗಿ ಜಿಲ್ಲೆಯನ್ನು ಸುತ್ತಾಡಿ ಮಾಹಿತಿ ಕಲೆ ಹಾಕುವ ಕಾರ್ಯ ಮಾಡುತ್ತಿದ್ದೇನೆ ಎಂದು ನೂತನ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಿ ಸ್ಥಳೀಯ ಜನರು ಹಾಗೂ ಅಧಿಕಾರಿಗಳನ್ನು ಭೇಟಿಯಾಗುತ್ತಿದ್ದೇನೆ. ಅವರ ಅಹವಾಲುಗಳನ್ನು ಹಾಗೂ ಸ್ಥಳೀಯ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳುವ ಪ್ರಯತ್ನ ಮಾಡುತ್ತಿದ್ದೇನೆ ಎಂದು ತಿಳಿಸಿದರು.
ಇನ್ನು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಅರಣ್ಯ ಹಕ್ಕು ಅರ್ಜಿಗಳ ಪ್ರಗತಿ ಹಾಗೂ ವಿಲೇವಾರಿ ಬಗ್ಗೆ ಸಮಿತಿ ಸಭೆ ನಡೆಸಲಾಗಿದೆ. ಸುಮಾರು ವರ್ಷಗಳಿಂದ ಬಾಕಿ ಇರುವ ಪ್ರಕರಣಗಳನ್ನು ಯಾವ ರೀತಿ ವಿಲೇವಾರಿ ಮಾಡಬೇಕು ಎಂಬುದನ್ನು ಚರ್ಚೆ ನಡೆಸಲಾಗಿದೆ. ಮೂರು ಹಂತದಲ್ಲಿರುವ ಈ ಸಮಿತಿಯಲ್ಲಿ ಉಪವಿಭಾಗ ಮಟ್ಟದಲ್ಲಿ ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಸದಸ್ಯರುಗಳು ಇರುವುದರಿಂದ ತಾಂತ್ರಿಕ ಸಮಸ್ಯೆ ಉಂಟಾಗಿದ್ದು, ಅದನ್ನು ಹೊರತುಪಡಿಸಿ ಗ್ರಾಮ ಮಟ್ಟದಲ್ಲಿ ಬಾಕಿ ಇರುವ ಪ್ರಕರಣಗಳನ್ನು ವಿಚಾರಣೆಗೆ ಮತ್ತು ಮರು ವಿಚಾರಣೆಗೆ ಕ್ರಮ ತೆಗೆದುಕೊಳ್ಳಲು ಸಚಿವರು ನಿರ್ದೇಶನ ನೀಡಿದ್ದಾರೆ. ಅದರಂತೆ ಅರಣ್ಯಾಧಿಕಾರಿಗಳು ಹಾಗೂ ತಾಲೂಕು ಪಂಚಾಯತಿ ಇಒಗಳ ಮೂಲಕ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ ಎಂದರು.