ಬೆಂಗಳೂರು: “ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಲ್ಲಿಕೆ ಗೊಂದಲದ ಹಿನ್ನೆಲೆಯಲ್ಲಿ ರಾಜ್ಯದ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಹೈಕೋರ್ಟ್ ಮಧ್ಯಾಂತರ ತಡೆ ನೀಡಿದೆ. ನೇಮಕ ಪ್ರಕ್ರಿಯೆಯಲ್ಲಿ 1:2ರಲ್ಲಿ ಆಯ್ಕೆಯಾಗಿ ಅರ್ಹತೆ ಇದ್ದರೂ ಮೀಸ ಲಾತಿ ಗೊಂದಲದಿಂದ ತಾತ್ಕಾಲಿಕ ಆಯ್ಕೆ ಪಟ್ಟಿ 1:1 ರಲ್ಲಿ ಹೆಸರು ಪ್ರಕಟವಾಗದ ಉಡುಪಿಯ ಯಡ್ತಾಡಿ ಗ್ರಾಮದ ಅನಿತಾ ಸಹಿತ 40ಕ್ಕೂ ಅಧಿಕ ಮಹಿಳಾ ಹುದ್ದೆ ಆಕಾಂಕ್ಷಿಗಳು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾ| ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ, ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಸಹಿತ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಡಿ.9ಕ್ಕೆ ಮುಂದೂಡಿದೆ.
ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ನ.18ರಂದು ಪ್ರಕಟಿಸಲಾಗಿದ್ದ 1:1 ಅನುಪಾತದ ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಅರ್ಜಿದಾರರಿಗಿಂತ ಕಡಿಮೆ ಅಂಕ ಪಡೆದಿರುವವರ ಅಭ್ಯರ್ಥಿಗಳ ಹೆಸರುಗಳಿವೆ.
ಈ ಬಗ್ಗೆ ಡಿಡಿಪಿಐಗಳನ್ನು ವಿಚಾರಿಸಿದಾಗ ಮದುವೆಯಾಗಿರುವ ಮಹಿಳಾ ಅಭ್ಯರ್ಥಿಗಳು ಪತಿಯ ಆದಾಯ/ಜಾತಿ ಪ್ರಮಾಣಪತ್ರದ ಬದಲಾಗಿ ತಂದೆಯ ಆದಾಯ/ಜಾತಿ ಪ್ರಮಾಣಪತ್ರವನ್ನು ಸಲ್ಲಿಸಿದ್ದಾರೆ ಎಂಬ ಕಾರಣಕ್ಕೆ ಅವರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಜತೆಗೆ, ಅಭ್ಯರ್ಥಿಗಳಿಗೆ ಯಾವುದೇ ಮಾಹಿತಿ ನೀಡದೆ, ಸಾಮಾನ್ಯ ಆಭ್ಯರ್ಥಿಗಳ ವರ್ಗಕ್ಕೆ ಸೇರ್ಪಡೆ ಮಾಡಲಾಗಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.