ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ವೈದ್ಯರು ನಾಲ್ಕು ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಶಸ್ತ್ರ ಚಿಕಿತ್ಸೆ ಬಳಿಕ ಬೇಗನೆ ಗುಣಮುಖರಾಗಲಿ ಎಂದು ಅವರ ಅಭಿಮಾನಿಗಳು ಹಾಗು ಹಿತೈಷಿಗಳು ಹಾರೈಸಿದ್ದಾರೆ.
2023ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಪಕ್ಷಗಳು ಚುನಾವಣೆಗೆ ಸಜ್ಜಾಗುತ್ತಿವೆ. ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಸಿದ್ದರಾಮಯ್ಯನವರು ಇತ್ತೀಚೆಗೆ 75ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಈ ಬಾರಿ ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಈ ಬಾರಿ ಅವರು ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಹೇಳಲಾಗುತ್ತಿದ್ದು, ಕೋಲಾರದಲ್ಲಿಯೇ, ವರುಣಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆಯೇ ಎಂಬುದು ಇನ್ನೂ ನಿರ್ಧಾರವಾಗಿಲ್ಲ.