ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಹು ಆಯ್ಕೆ ಪ್ರಶ್ನೆ ಪತ್ರಿಕೆ ಮುಂದುವರೆಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಹೆಚ್ಚಿಸಲು ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಚರ್ಚೆ ನಡೆಸಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಹು ಆಯ್ಕೆ ಮಾದರಿ ಪ್ರಶ್ನೆ ಪತ್ರಿಕೆಯನ್ನು ಈ ವರ್ಷವೂ ಮುಂದುವರೆಸುವ ಅಭಿಪ್ರಾಯ ಕೇಳಿ ಬಂದಿದೆ. ಪ್ರಥಮ ಮತ್ತು ದ್ವಿತೀಯ ಪಿಯುಸಿ ಎರಡು ಪರೀಕ್ಷೆಗಳಿಗೂ ಬಹು ಆಯ್ಕೆ ಮಾದರಿ ಪ್ರಶ್ನೆ ಪತ್ರಿಕೆ ಅಳವಡಿಸಲು ಚಿಂತನೆ ನಡೆದಿದೆ. ಕೊರೋನಾ ಕಾರಣದಿಂದ 2022ರ ವಾರ್ಷಿಕ ಪರೀಕ್ಷೆಯನ್ನು ಬಹು ಆಯ್ಕೆ ಮಾದರಿಯಲ್ಲಿ ನಡೆಸಲಾಗಿತ್ತು. ಫಲಿತಾಂಶ ಹೆಚ್ಚಳದ ಉದ್ದೇಶದಿಂದ ಈ ವರ್ಷವೂ ಮುಂದುವರೆಸುವ ಚರ್ಚೆ ನಡೆದಿದೆ.
ಅಲ್ಲದೇ, ಒಂದೆರಡು ಅಂಕಗಳಲ್ಲಿ ಫೇಲಾಗುವ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಈ ಕ್ರಮ ಕೈಗೊಳ್ಳಬಹುದೆಂಬ ಅಭಿಪ್ರಾಯ ಕೇಳಿ ಬಂದಿದೆ. ಮಾರ್ಚ್ 9 ರಿಂದ 29 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸರಳವಾದ ಪ್ರಶ್ನೆ ಪತ್ರಿಕೆ ರೂಪಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಜೊತೆಗೆ ಫಲಿತಾಂಶ ಹೆಚ್ಚಳಕ್ಕೆ ಚಿಂತನೆ ನಡೆಸಲಾಗಿದೆ. ಒಂದೆರಡು ಅಂಕಗಳಲ್ಲಿ ಫೇಲಾಗುವ ವಿದ್ಯಾರ್ಥಿಗಳಿಗೆ ಕನಿಷ್ಠ ಪಕ್ಷ ಜಸ್ಟ್ ಪಾಸ್ ಆಗಲು ಅನುಕೂಲವಾಗುವಂತೆ ಸರಳವಾದ ಪ್ರಶ್ನೆ ಪತ್ರಿಕೆ ರೂಪಿಸಿ ಮಾರ್ಗದರ್ಶನ ನೀಡಲಾಗುವುದು ಎಂದು ಹೇಳಲಾಗಿದೆ.
Source : KannadaDuniya