ನವದೆಹಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ 2 ರುಪಾಯಿ ಕಡಿತಗೊಳಿಸಿದ್ದು, ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.
ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಹೆಚ್ಚುತ್ತಿದ್ದರೂ ದರ ಸರಿದೂಗಿಸಲು ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಸುಂಕ ಕಡಿತದಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 26 ಸಾವಿರ ಕೋಟಿ ರುಪಾಯಿ ಹೊರೆ ಬೀಳಲಿದೆ. ಉಳಿದಿರುವ ಅವಧಿಗೆ 13 ಸಾವಿರ ಕೋಟಿ ರೂಪಾಯಿ ಹೊರೆಯಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಟ್ವೀಟ್ ಮಾಡಿದೆ.
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಳ ಮಾಡಲಾಗಿತ್ತು. ಸದ್ಯ ಪೆಟ್ರೋಲ್ ಮೇಲೆ ಕೇಂದ್ರ ಸರ್ಕಾರ ಪ್ರತಿ ಲೀಟರ್ ಗೆ 21.48 ರುಪಾಯಿ ಹಾಗೂ ಡೀಸೆಲ್ ಮೇಲೆ ಪ್ರತಿ ಲೀಟರ್ 17.33 ರುಪಾಯಿ ಅಬಕಾರಿ ಸುಂಕ ವಿಧಿಸುತ್ತಿದೆ.