ಕುಮಟಾ : ತಾಲೂಕಿನ ಮೂರೂರಿನ ಹೊಸಾಡಿನಲ್ಲಿರುವ ಅಮೃತಧಾರಾ ಗೋ ಶಾಲೆಯ ಆವಾರದಲ್ಲಿ ಫೆಬ್ರುವರಿ 23 ರಿಂದ 26 ರವರೆಗೆ ಆಲೆಮನೆ ಹಬ್ಬವನ್ನು ಆಯೋಜಿಸಲಾಗಿದೆ. ಗೋವಿನ ಉಳಿವಿನ ಹೊಸ ಪರಿಕಲ್ಪನೆಯೊಂದಿಗೆ ಈ ಕಾರ್ಯಕ್ರಮ‌ ಸಂಯೋಜನೆಗೊಂಡಿದ್ದು ನಾಲ್ಕು ದಿನಗಳ ಕಾಲ ಈ ಆಲೆಮನೆ ಹಬ್ಬ ನಡೆಯಲಿದೆ. ಪ್ರತಿದಿನ ಮಧ್ಯಾಹ್ನ 3 ಗಂಟೆಯಿಂದ ಆಲೆಮನೆ ಹಬ್ಬ ಪ್ರಾರಂಭವಾಗುತ್ತಿದ್ದು ಸಂಜೆ 5:00 ಗಂಟೆಗೆ ವಿದುಷಿ ರೇಷ್ಮಾ ಭಟ್ಟ, ಮೂರೂರು ಇವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಫೇ 24 ರಂದು ಆಲೆಮನೆ ಹಬ್ಬದ ಜೊತೆಗೆ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಕಡತೋಕಾ ಕೆಕ್ಕಾರು ವಲಯ ಇವರಿಂದ ಭಜನೆ, ಫೇ 25 ಶನಿವಾರ ಸಂಜೆ ಗೋಸಂಧ್ಯಾ, ಪ್ರಗತಿ ವಿದ್ಯಾಲಯ ಮೂರೂರು ಹಾಗೂ ಕೊಂಕಣ ಎಜುಕೇಶನ್ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಗೋಶಾಲೆಯ ವಾರ್ಷಿಕ ಸಮ್ಮೇಳನ, ಗೋಪಾಲ ಗೌರವ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದ್ದು, ಬಹು ವಿನೂತನವಾಗಿ ಕಾರ್ಯಕ್ರಮ ಸಂಯೋಜನೆಗೊಂಡಿದೆ. ಫೇ 26 ರಂದು ರವಿವಾರ ಸಂಜೆ 5:00 ಗಂಟೆಯಿಂದ ವಿದ್ವಾನ್ ಶಿವಾನಂದ ಭಟ್ ಹಡಿನಬಾಳ ಹಾಗೂ ವಿದ್ವಾನ್ ಎನ್. ಜಿ. ಹೆಗಡೆ ಕಪ್ಪೆಕೇರಿ ಹಾಗೂ ತಂಡದವರಿಂದ ಭಜನ್ ಸಂಧ್ಯಾ, ಶ್ರೀ ಸುಬ್ರಹ್ಮಣ್ಯ ಹೆಗಡೆ ಮೂರೂರು ಹಾಗೂ ಬಳಗದವರಿಂದ ಸುಧನ್ವಾ ರ್ಜುನ ಯಕ್ಷಗಾನ ಪ್ರದರ್ಶನ ನಡೆಯಲಿದೆ.

RELATED ARTICLES  ಭಾರತ ಜಗತ್ತಿನ ಎರಡನೇ ಅತ್ಯಂತ ಅಗ್ಗದ ದೇಶ: ಸಮೀಕ್ಷೆ

ಒಂದೇ ವೇದಿಕೆಯಲ್ಲಿ ಎರಡು ಕಬ್ಬಿನಗಾಣದ ಮಧ್ಯೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಇದರೊಂದಿಗೆ ಕೃಷಿ ಉಪಕರಣಗಳ ಮಾರಾಟ, ಗವ್ಯೋತ್ಪನ್ನಗಳ ಮಾರಾಟ, ಕರಕುಶಲ ಉತ್ಪನ್ನಗಳ ಮಾರಾಟ, ಕಬ್ಬಿನ ಹಾಲಿನ ಮಾರಾಟ, ಬಹು ಜನರ ಬೇಡಿಕೆಯ ತೊಡಾದೇವು, ಬೆಲ್ಲದ ಬಾಳೆದಿಂಡು, ಪಪ್ಪಾಯಿ ಬಾಳೆದಿಂಡು, ಬೆಲ್ಲ , ಕಬ್ಬಿನ ಹಾಲಿನ ಉತ್ಪನ್ನಗಳ ಮಾರಾಟ ನಡೆಯಲಿದೆ.

RELATED ARTICLES  ಕುಮಟಾ ವೈಭವದ ಆಮಂತ್ರಣ ಪತ್ರಿಕೆ ಬಿಡುಗಡೆ : ಕಾರ್ಯಕ್ರಮದ ಬಗ್ಗೆ ಸಂಘಟಕರ ಮಾಹಿತಿ : ನ.೧೬ ರಿಂದ ಕಾರ್ಯಕ್ರಮ.

“ಯಾವುದೇ ನಿರ್ದಿಷ್ಟ ಆದಾಯವಿಲ್ಲದೇ ಅಂದಾಜು 300 ಗೋವುಗಳನ್ನು ಸಂರಕ್ಷಿಸುತ್ತಿರುವ ಅಮೃತಧಾರ ಗೋಶಾಲೆ ಹೊಸಾಡು ಅನಾಥ, ಅಪಘಾತಕ್ಕೀಡಾದ, ಕಸಾಯಿಖಾನೆಯಿಂದ ರಕ್ಷಿಸಲ್ಪಟ್ಟ, ವಯಸ್ಸಾದ ಗೋವುಗಳ ಪಾಲನೆ ಜೊತೆಯಲ್ಲಿ ಭಾರತೀಯ ಗೋ ತಳಿ ಸಂರಕ್ಷಣೆಯನ್ನು ಮಾಡುತ್ತಿದ್ದು ಆಲೆಮನೆ ಹಬ್ಬದ ಸಂಪೂರ್ಣ ಆದಾಯವನ್ನು ಗೋವಿನ ನಿರ್ವಹಣೆಗೆ ವಿನಿಯೋಗಿಸುವ ವಿನೂತನ ಯೋಜನೆ ಇದಾಗಿದೆ. ಇದರ ಜೊತೆಯಲ್ಲಿ ಆಧುನಿಕ ಭರಾಟೆಗೆ ಪಾರಂಪರಿಕ ಸಂಸ್ಕೃತಿ ನಶಿಸುತ್ತಿದ್ದು ಎಲ್ಲಾ ಗೋಪ್ರೇಮಿಗಳನ್ನು ಒಂದೆಡೆ ಸೇರಸಿ ಮುಂದಿನ ಪೀಳಿಗೆಗೆ ಗೋ ಸಂರಕ್ಷಣೆಯ ಜಾಗೃತಿ ಪಡಿಸುವ, ಪ್ರಾಚೀನ ಪರಂಪರೆಯನ್ನು ನೆನಪಿಸುವ, ಗೋವಿಗೆ ಸಂತರ್ಪಣೆಗೈಯುವ ಸದಾವಕಾಶ ಕಲ್ಪಿಸುವುದು ಇದರ ಉದ್ದೇಶವಾಗಿದೆ ಎಂದು ಅಮೃತಧಾರಾ ಗೋ ಶಾಲಾ ಸಮಿತಿಯವರು ಹಾಗೂ ಗೋ ಸಂಧ್ಯಾ ಸಮಿತಿ ಸದಸ್ಯರು ಜಂಟಿಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.