ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ವಿವಿಧ ಬಡ್ತಿ ಪಡೆಯಲು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ (Computer Literacy Test) ಕಡ್ಡಾಯವಾಗಿದ್ದು, ಈ ಪರೀಕ್ಷೆ ಉತ್ತೀರ್ಣರಾಗಲು ಸರ್ಕಾರಿ ನೌಕರರಿಗೆ ನೀಡಲಾಗಿದ್ದ ಕಾಲಾವಕಾಶದ ಅವಧಿಯನ್ನು ಡಿಸೆಂಬರ್ 31ರ ವರೆಗೆ ವಿಸ್ತರಿಸಲಾಗಿದೆ.
ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಸಿಎಲ್‌ಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನಿಗದಿಪಡಿಸಿದ್ದ ಅವಧಿಯನ್ನು ದಿನಾಂಕ 31-12-2023ರ ವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಲಾಗಿದೆ.
ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ರ ನಿಯಮಾವಳಿಯಲ್ಲಿ ನಿಯಮ 1(3)ರಲ್ಲಿ ನಿರ್ದಿಷ್ಟಪಡಿಸಿರುವ ಹುದ್ದೆಗಳನ್ನು ಹೊರತುಪಡಿಸಿ, ಉಳಿದ ಎಲ್ಲ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವುದನ್ನು ಕಡ್ಡಾಯಗೊಳಿಸಲಾಗಿದೆ. ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಪ್ರಸ್ತುತ ಸರ್ಕಾರದಿಂದ ಅನುಮೋದಿಸಲ್ಪಟ್ಟ ಕಿಯೋನಿಕ್ಸ್ ಸಂಸ್ಥೆಯ ಮೂಲಕ ನಡೆಸಲಾಗುತ್ತಿದೆ. ಈ ನಿಯಮಗಳು ನೇರ ನೇಮಕಾತಿ ಹೊಂದಿದ ಮತ್ತು ಸೇವಾನಿರತ ಸರ್ಕಾರಿ ನೌಕರರಿಗೆ ಅನ್ವಯವಾಗುತ್ತದೆ ಎಂದು ತಿಳಿಸಲಾಗಿದೆ.