ಕುಮಟಾ : ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಬಂಡಾಯದ ಬಾಂಬ್ ಸ್ಪೋಟಗೊಂಡಿದೆ. ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾದ ಶಿವಾನಂದ ಹೆಗಡೆ ಕಡತೋಕಾ ಕಾಂಗ್ರೆಸ್ ನ ಪ್ರಬಲ ಆಕಾಂಕ್ಷಿಯಾಗಿದ್ದು ನಿವೇದಿತ ಆಳ್ವಾ ಅವರಿಗೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಉತ್ತರಕನ್ನಡ ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಅವರಿಗೆ ರಾಜಿನಾಮೆ ಪತ್ರ ಬರೆದಿರುವ ಅವರು. ಉತ್ತರ ಕನ್ನಡ ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಈ ಹಿಂದೆ ನನ್ನನ್ನು ನೇಮಕ ಮಾಡಿರುತ್ತೀರಿ. ತಮ್ಮ ಆದೇಶದಂತೆ ಕಿಸಾನ್ ಘಟಕವನ್ನು ಉತ್ತಮವಾಗಿ ನಡೆಸಿದ್ದಲ್ಲದೇ ತಾವು ಹೇಳಿದಂತೆ ಎಲ್ಲಾ ಕಾರ್ಯಗಳನ್ನು ಸಮರ್ಥವಾಗಿ ಮಾಡಿರುತ್ತೇನೆ. ಪಕ್ಷದ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಿದ್ದೇನೆ ಎಂಬ ತೃಪ್ತಿ ನನಗಿದೆ. ಈ ಅವಧಿಯಲ್ಲಿ ತಾವು ನೀಡಿದ ಸಹಕಾರಕ್ಕೆ ಕೃತಜ್ಞನಾಗಿದ್ದೇನೆ. ಆದರೆ ಇತ್ತೀಚಿನ ಬೆಳವಣಿಗೆಗಳು ನನ್ನ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ. ಕುಮಟಾ ವಿಧಾನಸಭಾ
ಕ್ಷೇತ್ರದಲ್ಲಿ ಕಾಂಗ್ರೆಸ್ ಬಿ-ಫಾರ್ವಗಾಗಿ ನನ್ನನ್ನೂ ಸೇರಿದಂತೆ ಹಲವರು ಅರ್ಜಿ ಸಲ್ಲಿಸಿದ್ದರು. ಪಕ್ಷ ಸಂಘಟನೆಗಾಗಿ ದುಡಿದಿದ್ದರು, ಪಕ್ಷದ ಕಾರ್ಯಕ್ರಮಗಳಿಗೆ ಅಪಾರ ಶ್ರಮ ವಹಿಸಿದ್ದರು. ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಿ ಸ್ಥಳೀಯರನ್ನು ನಿರ್ಲಕ್ಷಿಸಿ ಹೊರಗಿನವರಾದ ನಿವೇದಿತಾ ಆಳ್ವಾರವರಿಗೆ ಕಾಂಗ್ರೆಸ್ ಬಿ-ಫಾರ್ಮ್ ನೀಡಿರುವುದು ನನ್ನ ಮನಸ್ಸಿಗೆ ತುಂಬಾ ಬೇಸರವಾಗಿದೆ. ಅನೇಕ ಕಾರ್ಯಕರ್ತರು ಪ್ರತಿಭಟಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಕಾರ್ಯ ನಿರ್ವಹಿಸಲು ನನ್ನಿಂದ ಸಾಧ್ಯವಾಗುತ್ತಿಲ್ಲ. ಕಾರಣ ಉತ್ತರ ಕನ್ನಡ ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

RELATED ARTICLES  ಬಂಗಾರ ಕೊಳ್ಳುವವರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ದರದಲ್ಲಿ ಮತ್ತಷ್ಟು ಇಳಿಕೆ.

ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿ ತಮ್ಮ ಮುಂದಿನ ನಿರ್ಧಾರ ಸೋಮವಾರ ಪ್ರಕಟಿಸುವುದಾಗಿ ಶಿವಾನಂದ ಹೆಗಡೆ ತಿಳಿಸಿದ್ದಾರೆ.