ಕುಮಟಾ:ಜಿಲ್ಲಾ ಪಂಚಾಯತ ಉ.ಕ., ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಹೊನ್ನಾವರ, ಮತ್ತು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಹೊನ್ನಾವರದ ಹಮ್ಮಿಕೊಂಡ ತಾಲೂಕಾ ಮಟ್ಟದ ಪ್ರೌಢಶಾಲೆಗಳ ಇಲಾಖಾ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಸೇಂಟ್ ಆಂಥೊನಿ ಮೈದಾನದಲ್ಲಿ ಆಯೋಜಿಸಲಾಗಿತ್ತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಬಿಜೆಪಿ ಮುಖಂಡ ವಿನೋದ ನಾಯ್ಕ,ರಾಯಲ್ ಕೇರಿ ಅವರು ಮಾತನಾಡಿ ಮಕ್ಕಳು ಹಿರಿಯರನ್ನು ಗೌರವಿಸುವ ಸಂಸ್ಕøತಿಯನ್ನು ಬೆಳೆಸಿಕೊಳ್ಳಬೇಕು. ಆತ್ಮವಿಶ್ವಾಸ ಹಾಗೂ ಸತತ ಪರಿಶ್ರಮದಿಂದ ಕೈಗೊಂಡ ಕಾರ್ಯಕ್ರಮಗಳು ಯಶಸ್ವಿಯಾಗುತ್ತವೆ ಎಂದರು. ಗ್ರಾ. ಪಂ. ಅಧ್ಯಕ್ಷ ಶ್ರೀಕಾಂತ ಮೊಗೇರ ಅವರು ಮಾತನಾಡಿ ಪ್ರತಿಯೊಬ್ಬರಿಗೂ ಶಿಕ್ಷಣ ಅತ್ಯಗತ್ಯವಾಗಿದೆ. ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಭಾಗವಹಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರಾದ ನಾಗರಾಜ ನಾಯಕ ತೊರ್ಕೆ ಅವರು ಮಾತನಾಡಿ ಕೇವಲ ಪಠ್ಯದಿಂದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಿಲ್ಲ. ಜೊತೆಗೆ ಕ್ರೀಡೆ ಹಾಗೂ ಸಾಂಸ್ಕøತಿಕ ಚಟುವಟಿಕೆಗಳಲ್ಲೂ ಭಾಗವಹಿಸಿ ಪರಿಪೂರ್ಣರಾಗಬೇಕು. ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಹಾಗೂ ಬೌದ್ಧಿಕ ಸದೃಢತೆ ದೊರೆಯುತ್ತದೆ. ಜೀವನದಲ್ಲಿ ಬರುವ ಸೋಲು ಗೆಲುವುಗಳನ್ನು ಸಮನಾಗಿ ಸ್ವೀಕರಿಸಿ ಸೋತಾಗ ಕುಗ್ಗದೇ ಗೆದ್ದಾಗ ಹಿಗ್ಗದೇ ಸಮತೋಲನವನ್ನು ಕಾಯ್ದುಕೊಳ್ಳಬೇಕು. ಗಂಡು ಹೆಣ್ಣು ಎಂಬ ತಾರತಮ್ಯ ತೋರದೇ ಹೆಣ್ಣು ಮಕ್ಕಳಿಗೂ ಗಂಡು ಮಕ್ಕಳಂತೆ ಸಮಾನ ಆದ್ಯತೆ ನೀಡಬೇಕು. ಸೋತವರು ಧೃತಿಗೆಡದೇ ಮುಂದಿನ ದಿನಗಳಲ್ಲಿ ಹೆಚ್ಚು ಪರಿಶ್ರಮ ವಹಿಸಿದರೆ ಜಯ ಲಭಿಸುತ್ತದೆ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ರವಿ ಕೆ. ಶೆಟ್ಟಿ, ರಾಜು ಭಂಡಾರಿ, ನಾರಾಯಣ ಹೆಗಡೆ ಮುಗ್ವಾ, ಅರುಣ ಕವರಿ ತೊರ್ಕೆ, ವಿನಾಯಕ ಆಚಾರಿ, ಆನಂದ ಮಾಸ್ತಿಕಟ್ಟೆ, ಎಮ್. ಜಿ. ನಾಯ್ಕ, ಸಾಧನಾ ಬರ್ಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಮಹೇಶ ಶೆಟ್ಟಿ ಅವರು ಸ್ವಾಗತಿಸಿ, ನಿರೂಪಿಸಿ ವಂದಿಸಿದರು.