ಕುಮಟಾ : ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆಲವು ತಾಲೂಕುಗಳಲ್ಲಿ ಮಳೆ ಕಡಿಮೆಯಾಗಿದ್ದರೆ ಕೆಲವು ತಾಲೂಕುಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಆರೆಂಜ್ ಅಲರ್ಟ್ ನಿಂದ ರೆಡ್ ಅಲರ್ಟ್ ಘೋಷಿಸಲಾಗಿದ್ದು ಮಳೆ ಹೆಚ್ಚಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಜಿಲ್ಲೆಯ ಕಾರವಾರ, ಜೋಯಿಡಾ, ಹಳಿಯಾಳ ಮತ್ತು ದಾಂಡೇಲಿ ತಾಲೂಕುಗಳಲ್ಲಿ ಮಳೆಯ ಆರ್ಭಟ ಮುಂದುವರೆದಿರುವುದರಿಂದ ಅಗತ್ಯ ಮುಂಜಾಗ್ರತೆ ವಹಿಸಲು ಜಿಲ್ಲಾಡಳಿತವು ಜುಲೈ 26 ರಂದು ಈ ನಾಲ್ಕು ತಾಲೂಕಗಳ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇನ್ನು ಹೊನ್ನಾವರ ತಾಲೂಕಿನಲ್ಲಿ ಮಳೆ ಜೋರಾಗಿ ಬೀಳುತ್ತಿರುವದರಿಂದ ಹಾಗೂ ಕೆಲವು ಪ್ರದೇಶಗಳಲ್ಲಿ ನೀರು ತುಂಬಿರುವುದರಿಂದ ಸಹಾಯಕ ಆಯುಕ್ತರ ನಿರ್ದೇಶನದ ಮೇರೆಗೆ ತಹಶೀಲ್ದಾರ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಚರ್ಚಿಸಿ ನಾಳೆ ದಿನಾಂಕ -26-07-2023 ರಂದು ಸಹ ತಾಲೂಕಿನ ಎಲ್ಲ ಅಂಗನವಾಡಿ ಹಾಗೂ 1-12 ನೆ ತರಗತಿಗಳಿಗೆ ರಜೆ ಮುಂದುವರಿಸಲಾಗಿದೆ.
ಇನ್ನು ಕುಮಟಾ ಹಾಗೂ ಅಂಕೋಲಾ ತಾಲೂಕುಗಳಲ್ಲಿ ತಹಶೀಲ್ದಾರ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪರಿಸ್ಥಿತಿ ಅವಲೋಕನ ನಡೆಸುತ್ತಿದ್ದಾರೆ. ಕುಮಟಾ ಹಾಗೂ ಅಂಕೋಲಾ ತಾಲೂಕುಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇರುವುದರಿಂದ ಬಹುತೇಕ ಶಾಲೆಗಳು ಎಂದಿನಂತೆ ನಡೆಯುವ ನಿರೀಕ್ಷೆ ಇದೆ. ಮಳೆಯ ಪ್ರಮಾಣ ಒಮ್ಮೆಲೆ ಜಾಸ್ತಿಯಾದರೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ತಹಶೀಲ್ದಾರರು ಅಗತ್ಯ ಕ್ರಮಕ್ಕೆ ಮುಂದಾಗುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರವೂ ಮಳೆಯ ಅಬ್ಬರ ಮುಂದುವರಿದಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಜುಲೈ 26ರಂದು ಅತಿ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇದಲ್ಲದೆ ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಭಾರೀ ಮಳೆಯುವ ಸರಿಯುವ ಸಾಧ್ಯತೆಯಿದೆ ಎಂದು ಮುನ್ನೆಚ್ಚರಿಕೆ ನೀಡಿದೆ.
ಅಲ್ಲದೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜುಲೈ 27ರಂದು ಆರೇಂಜ್ ಅಲರ್ಟ್ ನೀಡಿದ್ದರೆ, ಜುಲೈ .28ರಿಂದ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ನೀಡಿದೆ. ಬೆಳಗಾವಿ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಜುಲೈ 26 ಹಾಗೂ 27ರಂದು , ಬೀದರ್ ಮತ್ತು ಕಲಬುರಗಿಯಲ್ಲಿ ಜುಲೈ 27ರಂದು ಭಾರಿ ಮಳೆ ಸುರಿಯುವ ಸಾಧ್ಯೆ ಇರುವುದರಿಂದ ಆರೇಂಜ್ ಅಲರ್ಟ್ ನೀಡಲಾಗಿದೆ. ಹಾಸನ, ಬಳ್ಳಾರಿಯಲ್ಲಿ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ನೀಡಲಿದೆ. ಉಳಿದಂತೆ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.