ಕರ್ನಾಟಕ ಬಜೆಟ್ 2024ನ್ನು ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ಪ್ರವಾಸೋಧ್ಯಮ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಿದ್ದು, 10 ಪ್ರವಾಸಿತಾಣಗಳಲ್ಲಿ ಕೇಬಲ್ ಕಾರ್, ರೋಪ್ ವೇ ಸೌಲಭ್ಯ ನಿರ್ಮಿಸಲಾಗುವುದು ಎಂದು ಹೇಳಿದರು.
ರಾಜ್ಯದ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಹೆಚ್ಚಿನ ಪ್ರವಾಸಿಗರು ಮತ್ತು ಹೂಡಿಕೆದಾರರನ್ನು ಆಕರ್ಷಿಸಲು 2024-29ಕ್ಕೆ ಪ್ರವಾಸೋದ್ಯಮ ನೀತಿಯನ್ನು ಪರಿಷ್ಕರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅಲ್ಲದೆ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಪೌರಾಣಿಕ ಮತ್ತು ಐತಿಹಾಸಿಕ ಮಹತ್ವವನ್ನು ಹೊಂದಿವೆ. ಇವುಗಳಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು 100 ಕೋಟಿ ರೂ. ಒದಗಿಸಲಾಗುವುದು ಎಂದು ಹೇಳಿದರು.
ಇದಲ್ಲದೆ ರಾಜ್ಯದ 10 ಪ್ರವಾಸಿತಾಣಗಳಲ್ಲಿ ಕೇಬಲ್ ಕಾರ್, ರೋಪ್ ವೇ ಸೌಲಭ್ಯಕ್ಕೆ ಕ್ರಮ ಕೈಗೊಳ್ಳಲಾಗಿದೆ. 250 ಮೀಟರ್ ಎತ್ತರದ ಸ್ಕೈಡೆಕ್ ನಿರ್ಮಾಣ ನಿಧಿ ಮೀಸಲಿಡಲಾಗಿದೆ. ಬೆಳಗಾವಿಯಲ್ಲಿರುವ ಗೋಕಾಕ್ ಜಲಪಾತವನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿಪಡಿಸಲಾಗುವುದು. ಮೂಲಸೌಕರ್ಯಕ್ಕಾಗಿ ಹಣ ನಿಗದಿ ಮಾಡಲಾಗುತ್ತದೆ ಎಂದರು.
ಮಾತ್ರವಲ್ಲದೇ ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಹಾರ ಪಾರ್ಕ್ ನಿರ್ಮಾಣ ಮಾಡಲಾಗುವುದು. ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ, ಬೆಂಗಳೂರು ಗ್ರಾ. ಜಿಲ್ಲೆ ಮೂಗೆನಹಳ್ಳಿ ಬಳಿ ಆಹಾರ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.
ಬಸವಣ್ಣನವರ ಜನ್ಮಸ್ಥಳದ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಪ್ರಾಧಿಕಾರ ರಚನೆಯ ಘೋಷಣೆ ಮಾಡಿದ್ದು, ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಹಾಗೆಯೇ, ಕಲಬುರಗಿಯಲ್ಲಿ ವಚನ ಮಂಟಪ ನಿರ್ಮಿಸಲಾಗುವುದು. ಜಾನಪದ ಕಲೆಗಳ ಪುನರುಜ್ಜೀವನಕ್ಕೆ ಅನುದಾನ, ನಾರಾಯಣಗುರು, ಜ್ಯೋತಿಬಾ ಫುಲೆ, ಪೆರಿಯಾರ್, ರಾಮಸ್ವಾಮಿ, ಲೋಹಿಯಾ ಬರಹ ಕನ್ನಡಕ್ಕೆ ಅನುವಾದಕ್ಕೆ ಕ್ರಮ. ಕೀರ್ತನೆಗಳ ಪ್ರಚಾರಕ್ಕೆ 1 ಕೋಟಿ ರೂ. ಮೀಸಲಿಡಲಾಗುವುದು. ಕಲಬುರಗಿ ವಿವಿಯಲ್ಲಿ ತತ್ವಪದ, ಸೂಫಿ ಅಧ್ಯಯನ ಪೀಠ ಸ್ಥಾಪನೆ. ಸರ್ವಜ್ಙನ ಸ್ಮಾರಕ ಅಭಿವೃದ್ಧಿಗೆ ಅನುದಾನ, ಕೋಲಾರದ ಅದಿಮ ಸಾಂಸ್ಕೃತಿಕ ಕೇಂದ್ರದ ಅಭಿವೃದ್ಧಿ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.