ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ. ಕೆ. ಭಂಡಾರ್ಕರ್ಸ ಸರಸ್ವತಿ ಪದವಿಪೂರ್ವ ಕಾಲೇಜಿನ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ೨೦೨೩-೨೪ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳಿಸಿ ರಾಜ್ಯ ಮಟ್ಟದಲ್ಲಿ ನಾಲ್ಕು ಸ್ಥಾನವನ್ನು ಪಡೆದು ಸಂಸ್ಥೆಯ ಹಿರಿಮೆಯನ್ನು ಹೆಚ್ಚಿಸಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಶ್ರಾವ್ಯ ಭಟ್ಟ 592 ಅಂಕಗಳಿಸಿ ರಾಜ್ಯ ಮಟ್ಟದಲ್ಲಿ 7 ನೇ ಸ್ಥಾನ ಪಡೆದು ಕಾಲೇಜಿಗೆ ಪ್ರಥಮಳಾಗಿ ಹೊರಹೊಮ್ಮಿದ್ದಾಳೆ. ತಿಲಕ ಕುಮಟಾ ಹಾಗೂ ಶ್ರೀಕೃಷ್ಣ ಶಾನಭಾಗ 589 ಅಂಕಗಳಿಸಿ ರಾಜ್ಯ ಮಟ್ಟದಲ್ಲಿ 10 ನೇ ಸ್ಥಾನ ಗಳಿಸುವುದರೊಂದಿಗೆ ಕಾಲೇಜಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ರಾಘವೇಂದ್ರ ಎನ್. ಹಾಗೂ ಪೂರ್ಣ ಶೇಟ್ 584 ಅಂಕಗಳಿಸಿ ಕಾಲೇಜಿಗೆ ತೃತೀಯ ಸ್ಥಾನ ಪಡೆದಿದ್ದಾರೆ. ಒಟ್ಟು 193 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅದರಲ್ಲಿ 139 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಹಾಗೂ ಉಳಿದ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಅಕ್ಷತಾ ಶಾನಭಾಗ 589 ಅಂಕಗಳಿಸಿ ರಾಜ್ಯ ಮಟ್ಟದಲ್ಲಿ 9 ನೇ ಸ್ಥಾನ ಪಡೆದು ವಾಣಿಜ್ಯ ವಿಭಾಗದಲ್ಲಿ ಪ್ರಥಮಳಾಗಿ ಹೊರಹೊಮ್ಮಿದ್ದಾಳೆ. ಅಮಿತ ಪೈ 583 ಅಂಕಗಳಿಸಿ ದ್ವಿತೀಯ ಸ್ಥಾನ ಹಾಗೂ ಗ್ರೀಷ್ಮಾ ಗಾವಡಿ 581 ಅಂಕಗಳಿಸಿ ತೃತೀಯ ಸ್ಥಾನ ಪಡೆದಿದ್ದಾರೆ. ಒಟ್ಟು 37 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 17 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಮತ್ತು ಉಳಿದ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕೊಂಕಣ ಎಜುಕೇಶನ್ ಟ್ರಸ್ಟ್ ನ ಪದಾಧಿಕಾರಿಗಳು, ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕರಾದ ಶ್ರೀ. ಗುರುರಾಜ ಶೆಟ್ಟಿಯವರು, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.