ಕಾರವಾರ: ಕನ್ನಡ ರಾಜ್ಯೋತ್ಸವವನ್ನು ನವೆಂಬರ್ 1ರಂದು ಸಂಭ್ರಮದಿಂದ ಆಚರಿಸಲು ಎಲ್ಲಾ ಕ್ರಮಗಳನ್ನು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಸ್. ಎಸ್. ನಕುಲ್ ಅವರು ತಿಳಿಸಿದರು.
ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಪ್ರತಿವರ್ಷದಂತೆ ಈ ಬಾರಿಯೂ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಬೆಳಗ್ಗೆ 8ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಿಂದ ಕನ್ನಡಾಂಬೆಯ ಮೆರವಣಿಗೆ ಆರಂಭವಾಗಲಿದೆ.
ಮೆರವಣಿಗೆಯಲ್ಲಿ ವೈವಿಧ್ಯಮಯ ಸಾಂಸ್ಕøತಿಕ ತಂಡಗಳಿಂದ ಕಲಾ ಪ್ರದರ್ಶನವಿರಲಿದೆ. ಇದರೊಂದಿಗೆ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು ಸಹ ಮೆರವಣಿಗೆಯಲ್ಲಿ ಭಾಗವಹಿಸಲಿವೆ. ಇಲಾಖೆಗಳು ವಿವಿಧ ಸಂದೇಶಗಳನ್ನು ಸಾರುವ ಸ್ತಬ್ಧಚಿತ್ರಗಳನ್ನು ಕಲಾತ್ಮಕವಾಗಿ ರೂಪಿಸಬೇಕು. ಮೆರವಣಿಗೆ ಆರಂಭವಾಗುವ ಮೊದಲೇ ಸ್ತಬ್ಧಚಿತ್ರಗಳನ್ನು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಜ್ಜುಗೊಳಿಸಿರಬೇಕು ಎಂದರು.
ಬೆಳಗ್ಗೆ 9 ಗಂಟೆಗೆ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ವಿವಿಧ ತಂಡಗಳಿಂದ ಪರೇಡ್ ನಡೆಯಲಿದ್ದು, ತಂಡಗಳಿಗೆ ಮೊದಲೇ ಸಮರ್ಪಕ ತರಬೇತಿಯನ್ನು ನೀಡಬೇಕು. ಬೆಳಗ್ಗೆ ರಂಗಮಂದಿರದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದ್ದು ಡಿಡಿಪಿಐ ಕಾರವಾರ ಹಾಗೂ ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇದರ ಮೇಲುಸ್ತುವಾರಿ ನಿರ್ವಹಿಸಬೇಕು.
ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು ಕಡ್ಡಾಯವಾಗಿ ಭಾಗವಹಿಸಬೇಕು. ಸಾರ್ವಜನಿಕರು, ಸಂಘಸಂಸ್ಥೆಗಳು ಸ್ವ-ಇಚ್ಛೆಯಿಂದ ದೊಡ್ಡ ಪ್ರಮಾಣದಲ್ಲಿ ಭಾಗಿಯಾಗಬೇಕು. ಎಲ್ಲಾ ತಾಲೂಕು ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಸಾರ್ವಜನಿಕರ ಸಹಕಾರದಲ್ಲಿ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಕ್ರಮಕೈಗೊಳ್ಳಬೇಕು ಎಂದು ಅವರು ಹೇಳಿದರು.
ಕಚೇರಿಗಳಿಗೆ ದೀಪಾಲಂಕಾರ ಹಾಗೂ ನಗರಸಭೆಯವರು ಪ್ರಮುಖ ವೃತ್ತಗಳಲ್ಲಿ ಕೂಡ ದೀಪಲಂಕಾರ ಮಾಡಬೇಕು, ಮೆರವಣಿಗೆ ಸಾಗುವ ಹಾದಿಯಲ್ಲಿ ಸ್ವಚ್ಛತೆಗೆ ಕ್ರಮಕೈಗೊಳ್ಳಬೇಕು, ಕಾರ್ಯಕ್ರಮಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವ್ಯವಸ್ಥೆ ಮಾಡಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಜಿಲ್ಲಾ ಪೊಲೀಸ್ವರಿಷ್ಠಾಧಿಕಾರಿ ವಿನಾಯಕ ಪಾಟೀಲ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಇದ್ದರು.